ಬೆಂಗಳೂರು: ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದೆ. ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಮಾರ್ಚ್ 15ಕ್ಕೆ ನಿಗದಿ ಪಡಿಸಿದೆ. ಪ್ರಕರಣ ಸಂಬಂಧ ಸಲ್ಲಿಕೆಯಾಗಿರುವ ಆರೋಪ ಪಟ್ಟಿಯ ವಿಚಾರಣೆಗೆ ಕೋರ್ಟ್ ಸಮ್ಮತಿಸಿದ್ದು, ಮಾರ್ಚ್ 15ರಂದು ಖುದ್ದಾಗಿ ಹಾಜರಾಗುವಂತೆ ಯಡಿಯೂರಪ್ಪ ಹಾಗೂ ಇತರ ಆರೋಪಿಗಳಿಗೆ ಸಮನ್ಸ್ ನೀಡಿದೆ.
ಪೋಕ್ಸೊ ಪ್ರಕರಣದಲ್ಲಿ ಯಡಿಯೂರಪ್ಪಗೆ ಕೆಲವೇ ದಿನಗಳ ಹಿಂದಷ್ಟೇ ಕರ್ನಾಟಕ ಹೈಕೋರ್ಟ್ನಲ್ಲಿ ರಿಲೀಫ್ ದೊರೆತಿತ್ತು. ಪ್ರಕರಣ ರದ್ದತಿ ಕೋರಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಧಾರವಾಡ ಪೀಠ ನಿರೀಕ್ಷಣಾ ಜಾಮೀನು ನೀಡಿತ್ತು. ಆದರೆ ಪ್ರಕರಣ ರದ್ದು ಮಾಡಲು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ನಿರಾಕರಿಸಿತ್ತು. ಹೀಗಾಗಿ ಯಡಿಯೂರಪ್ಪ ಬಂಧನದಿಂದ ಪಾರಾದರೂ ವಿಚಾರಣೆ ಎದುರಿಸಲೇಬೇಕಾಗಿದೆ. ಆದ್ದರಿಂದ ಬೆಂಗಳೂರಿನ ನ್ಯಾಯಾಲಯ ವಿಚಾರಣೆಗೆ ದಿನ ನಿಗದಿಪಡಿಸಿದೆ.
ಯಡಿಯೂರಪ್ಪ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ 2024ರ ಮಾರ್ಚ್ನಲ್ಲಿ ಕೇಳಿ ಬಂದಿತ್ತು. ಸಂತ್ರಸ್ತೆಯ ತಾಯಿ ಈ ಆರೋಪ ಮಾಡಿದ್ದರು. ಬಳಿಕ ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯ್ದೆಯಡಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಪೋಕ್ಸೊ ಕೇಸ್ : ಯಡಿಯೂರಪ್ಪ ಖುದ್ದು ಹಾಜರಾತಿಗೆ ಸಮನ್ಸ್






























































