ಕಾರ್ಕಳ : ಕಾರ್ಕಳ ನಗರ ಮಹಿಳಾ ಕಾಂಗ್ರೆಸ್ ವತಿಯಿಂದ ಮಾ. 8ರಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಸಾಧಕಿಯರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ಪಕ್ಷದ ಮುಖಂಡ ಉದಯ್ ಕುಮಾರ್ ಶೆಟ್ಟಿ ಮುನಿಯಾಲು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮಹಿಳೆಯರು ಕುಟುಂಬದ ಶಕ್ತಿಯಾಗಿ ಮನೆಯ ಜವಾಬ್ದಾರಿಗಳನ್ನು ನಿಭಾಯಿಸುವುದು ಮಾತ್ರವಲ್ಲದೆ ಸ್ವಾವಲಂಬಿ ಜೀವನ ನಡೆಸುವ ಮೂಲಕ ದೇಶದ ಪ್ರಗತಿಗೆ ಮಹತ್ತರವಾದ ಕೊಡುಗೆ ನೀಡುತ್ತಿದ್ದಾರೆ. ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ ಪರಿಣಾಮವಾಗಿ ಇಂದು ಅದರ ಪ್ರತಿಫಲವು ದೇಶದಾದ್ಯಂತ ಪ್ರತಿಫಲಿಸುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಭಾಗವಹಿಸಿದ್ದ ನ್ಯಾಯವಾದಿ ನಂದಿನಿ ಬಿ. ಶೆಟ್ಟಿ ಮಾತನಾಡಿ, ಮಹಿಳೆಯರಿಗೆ ಯಾವುದೇ ತೊಂದರೆಯಾದರೆ ಭಯಪಡಬೇಕಾಗಿಲ್ಲ. ಎಂತಹದ್ದೇ ಪರಿಸ್ಥಿತಿ ಎದುರಾದರೂ ಕಾನೂನಿನ ನೆರವಿನ ಮೂಲಕ ಧೈರ್ಯವಾಗಿ ಎದುರಿಸಬಹುದು ಎಂದ ಅವರು ಮಹಿಳಾ ರಕ್ಷಣೆ ಕುರಿತಾದ ಕಾನೂನು ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಹೆಬ್ಬಾರ್ ಹಾಗೂ ಮುಖ್ಯ ಅತಿಥಿ ಭಾಗವಹಿಸಿದ್ದ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಸಂದರ್ಬೋಚಿತವಾಗಿ ಮಾತನಾಡಿದರು.

ಸನ್ಮಾನ
ಹಿರಿಯ ಕಾಂಗ್ರೆಸ್ ನಾಯಕಿ ಸುಮತಿ ಕಲ್ಲೋಟ್ಟೆ, ಸಮಾಜ ಸೇವಕಿ ಆಯಿಶಾ, ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ದ್ರುವಿ, ಶಿಕ್ಷಣ ಕ್ಷೇತ್ರದ ಸಾಧಕಿ ಜೋಯ್ಲಿಯಾ ಡಿ. ಸೋಜ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಂಗವಾಗಿ ನಡೆಸಿದ ಆಟೋಟ ಸ್ಪರ್ಧೆಯ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷೆ ಮಾಲಿನಿ ರೈ, ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಭಾನು ಬಾಸ್ಕರ್ ಪೂಜಾರಿ, ಕಾರ್ಕಳ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೀನಾ ಡಿಸೋಜ, ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಂದ್ರ ದೇವಾಡಿಗ ಉಪಸ್ಥಿತರಿದ್ದರು. ಪುರಸಭಾ ಸದಸ್ಯೆ ನಳಿನಿ ಆಚಾರ್ಯ ಕಾರ್ಯಕ್ರಮ ನಿರೂಪಿಸಿ, ಪ್ರಿಯಾ ರಾಜೇಂದ್ರ ಪ್ರಸಾದ್ ವಂದಿಸಿದರು.
























