ಜಿಲ್ಲೆಯಲ್ಲಿ 26 ಮೈತ್ರಿ ಕಾರ್ಯಕರ್ತರಿಗೆ ತರಬೇತಿ – ಡಾ. ಶಿವಣ್ಣ
ಉಡುಪಿ : ಜಿಲ್ಲೆಯಲ್ಲಿನ ಪಶುಗಳ ಆರೋಗ್ಯ ಸುಧಾರಣೆಗೆ ನೇಮಕಗೊಂಡಿರುವ ಮೈತ್ರಿ ಕಾರ್ಯಕರ್ತರು ಉತ್ತಮವಾಗಿ ಸೇವೆ ನೀಡಿ ಸಾರ್ವಜನಿಕರಿಂದ ಪ್ರಶಂಸೆ ಪಡೆಯಬೇಕೆಂದು ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವ ಕೆ. ವೆಂಕಟೇಶ್ ಹೇಳಿದರು.
ಅವರು ಎ. 5ರಂದು ಜಿಲ್ಲಾ ಪಂಚಾಯತ್‌ನ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಡುಪಿ ಜಿಲ್ಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಮೈತ್ರಿ ಕಾರ್ಯಕರ್ತರ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪಶುಗಳು ಉತ್ತಮ ಆರೋಗ್ಯವನ್ನು ಹೊಂದಬೇಕು ಎಂಬ ಉದ್ದೇಶದಿಂದ ಅವುಗಳ ಆರೋಗ್ಯ ಸುಧಾರಣೆಗೆ ಪಶು ವೈದ್ಯರು, ಪಶು ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಮೈತ್ರಿ ಕಾರ್ಯಕರ್ತರನ್ನು ನೇಮಕ ಮಾಡಲಾಗಿದೆ ಎಂದರು.
ಮೈತ್ರಿ ಕಾರ್ಯಕರ್ತರಿಗೆ ಈಗಾಗಲೇ ಮೂರು ತಿಂಗಳ ತರಬೇತಿ ನೀಡಲಾಗಿದೆ. ಇವರು ನಗರ ಹಾಗೂ ಗ್ರಾಮೀಣ ಭಾಗದಲ್ಲಿ ತಮ್ಮ ಪಶು ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ ನೀಡಿ, ಜಾನುವಾರುಗಳ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವುಗಳ ಆರೋಗ್ಯದಲ್ಲಿ ಸಮಸ್ಯೆಗಳಿದ್ದಲ್ಲಿ ಅಗತ್ಯ ಸಲಹೆ ಸೂಚನೆ ಹಾಗೂ ಚಿಕಿತ್ಸೆಯನ್ನು ನೀಡಲಿದ್ದಾರೆ ಎಂದರು.

ಮೈತ್ರಿ ಕಾರ್ಯಕರ್ತರಿಗೆ ಪ್ರಸ್ತುತ 3,700 ರೂ. ಗೌರವಧನವನ್ನು ನೀಡಲಾಗುತ್ತಿದೆ. ಇದರ ಹೆಚ್ಚಳ ಮಾಡಬೇಕೆಂಬ ಬೇಡಿಕೆ ಕೇಳಿ ಬರುತ್ತಿದೆ. ಈ ಬಗ್ಗೆ ಕೇಂದ್ರದ ಹೈನುಗಾರಿಕೆ ಸಚಿವರ ಗಮನಕ್ಕೆ ತರಲಾಗಿದೆ. ಈ ಕುರಿತು ಮುಖ್ಯಮಂತ್ರಿಗಳೊಂದಿಗೂ ಚರ್ಚಿಸಿ ಗೌರವಧನ ಹೆಚ್ಚಳ ಮಾಡುವ ಬಗ್ಗೆ ಪ್ರಯತ್ನಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಜಿಲ್ಲೆಯಲ್ಲಿ 20ನೇ ಜಾನುವಾರು ಗಣತಿ ಅನ್ವಯ 2.57 ಲಕ್ಷ ದನ ಹಾಗೂ ಎಮ್ಮೆ, 3,107 ಆಡು – ಕುರಿ, 3,289 ಹಂದಿಗಳು, 1.18 ಲಕ್ಷ ನಾಯಿಗಳು ಮತ್ತು 11.43 ಲಕ್ಷ ಕೋಳಿಗಳಿದೆ. 1 ಪಾಲಿಕ್ಲಿನಿಕ್, 12 ಪಶು ಆಸ್ಪತ್ರೆಗಳು, 38 ಪಶು ಚಿಕಿತ್ಸಾಲಯಗಳು, 36 ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರಗಳು ಹಾಗೂ 8 ಪಶು ಸಂಜೀವಿನಿ ಆಂಬುಲೆನ್ಸ್ ಘಟಕಗಳು ಕಾರ್ಯನಿರ್ವಹಿಸುತ್ತಿವೆ. ಪ್ರಥಮ ಬಾರಿಗೆ ಜಿಲ್ಲೆಯಲ್ಲಿ 26 ಮೈತ್ರಿ ಕಾರ್ಯಕರ್ತರಿಗೆ ತರಬೇತಿ ನೀಡಲಾಗಿದೆ.
ಡಾ. ಶಿವಣ್ಣ
ಜಂಟಿ ನಿರ್ದೇಶಕರು, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಮೈಸೂರು
ಶಾಸಕರಾದ ಯಶ್‌ಪಾಲ್ ಎ. ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿದರು. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶ್ರೀನಿವಾಸ ರಾವ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ನಿರ್ದೇಶಕ ಡಾ. ಮಂಜುನಾಥ್ ಎಸ್. ಪಾಳೇಗಾರ್, ಪಶು ವೈದ್ಯಕೀಯ ಪರಿಷತ್ತಿನ ನಿರ್ದೇಶಕ ಡಾ. ಸುಶಾಂತ್ ರೈ, ಮಂಗಳೂರು ಉಪನಿರ್ದೇಶಕ ಡಾ. ಅರುಣ್ ಕುಮಾರ್ ಶೆಟ್ಟಿ, ಜಿಲ್ಲಾ ಮಟ್ಟದ ಅಧಿಕಾರಿಗಳು, ಇಲಾಖೆಯ ಸಿಬ್ಬಂದಿ, ಮೈತ್ರಿ ಕಾರ್ಯಕರ್ತರು ಉಪಸ್ಥಿತರಿದ್ದರು. ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ (ಆಡಳಿತ) ಡಾ. ಎಂ.ಸಿ. ರೆಡ್ಡಪ್ಪ ಸ್ವಾಗತಿಸಿ, ಮುಖ್ಯ ಪಶು ವೈದ್ಯಾಧಿಕಾರಿ ಡಾ. ಉದಯ ಕುಮಾರ್ ಶೆಟ್ಟಿ ನಿರೂಪಿಸಿ, ವಂದಿಸಿದರು.



























