ವಿಜಯನಗರ ಜಿಲ್ಲೆಯಲ್ಲಿ ಸಾಧನಾ ಸಮಾವೇಶ
ಬೆಂಗಳೂರು : ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಮೇ 20ರಂದು ಎರಡು ವರ್ಷ ತುಂಬುತ್ತಿದೆ. ಈ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಬೃಹತ್ ಸಾಧನಾ ಸಮಾವೇಶವನ್ನು ಹಮ್ಮಿಕೊಳ್ಳಲು ನಿರ್ಧಾರ ಮಾಡಲಾಗಿದೆ. ಭಾರತ ಪಾಕಿಸ್ತಾನ ಸಂಘರ್ಷದ ಹಿನ್ನೆಲೆಯಲ್ಲಿ ಸಾಧನಾ ಸಮಾವೇಶ ರದ್ದು ಮಾಡಲಾಗಿತ್ತು. ಆದರೆ ಇದೀಗ ಕದನ ವಿರಾಮದ ಹಿನ್ನೆಲೆಯಲ್ಲಿ ಮತ್ತೆ ನಡೆಸಲು ತೀರ್ಮಾನ ಮಾಡಲಾಗಿದೆ.
ವಿಜಯನಗರದಲ್ಲಿ ನಡೆಯಲಿರುವ ಸಾಧನಾ ಸಮಾವೇಶದಲ್ಲಿ ಕಾಂಗ್ರೆಸ್ ಸರಕಾರದ ವಿಪಕ್ಷಗಳ ಆರೋಪಗಳಿಗೆ ಉತ್ತರ ಕೊಡುವ ಜೊತೆಗೆ ಎರಡು ವರ್ಷಗಳ ಸಾಧನೆಗಳನ್ನು ಅನಾವರಣ ಮಾಡಲು ಈ ಸಮಾವೇಶವನ್ನು ಬಳಕೆ ಮಾಡಲಿದೆ ಎಂದು ಹೇಳಲಾಗುತ್ತಿದೆ. ಸಮಾವೇಶಕ್ಕೆ ಕಾಂಗ್ರೆಸ್ ಹೈಕಮಾಂಡ್ ನಾಯಕರ ದಂಡು ಬರುವ ಸಾಧ್ಯತೆ ಇದೆ. ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅಥವಾ ಪ್ರಿಯಾಂಕಾ ಗಾಂಧಿ ಈ ಸಮಾವೇಶಕ್ಕೆ ಆಗಮಿಸುವ ಸಾಧ್ಯತೆಯಿದೆ.

ʼಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ವಿಜಯನಗರ ಜಿಲ್ಲೆಯಲ್ಲಿ ನಡೆಯಲಿರುವ 2ನೇ ವರ್ಷದ ಸಾಧನಾ ಸಂಭ್ರಮದಲ್ಲಿ 1 ಲಕ್ಷ ಕುಟುಂಬಗಳಿಗೆ ಪಟ್ಟಾ ಖಾತೆ ಹಂಚಿಕೆ ಮಾಡಲಾಗುತ್ತಿದೆ. ಇದು ಸರಕಾರದ ಸಂಭ್ರಮಾಚರಣೆ ಮಾತ್ರವಲ್ಲ. ಇಡೀ ರಾಜ್ಯದ ಜನ ಸಂಭ್ರಮಿಸುವ ಕ್ಷಣʼ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ.






























































