ಪ್ರಾರಂಭ ದಿನವೇ ಸಮವಸ್ತ್ರ, ಪಠ್ಯಪುಸ್ತಕ ವಿತರಣೆ – ಮಧು ಬಂಗಾರಪ್ಪ
ಬೆಂಗಳೂರು : ರಾಜ್ಯಾದ್ಯಂತ ಮೇ 29ರಿಂದ ಶಾಲೆಗಳ ಪುನರ್ ಆರಂಭವಾಗಲಿದ್ದು, ಪ್ರಾರಂಭದ ದಿನವೇ ಎಲ್ಲ ಮಕ್ಕಳಿಗೆ ಸಮವಸ್ತ್ರ, ಪಠ್ಯಪುಸ್ತಕ ವಿತರಿಸಲಾಗುತ್ತದೆ. ಶೂ, ಸಾಕ್ಸ್ ಅನ್ನು ಹಂತ-ಹಂತವಾಗಿ ಶಾಲೆಯಲ್ಲಿ ವಿತರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಶಾಲಾ ಪ್ರಾರಂಭದ ದಿನ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಸರಕಾರಿ ಶಾಲೆಗಳಿಗೆ ತೆರಳಿ ವಿದ್ಯಾರ್ಥಿಗಳನ್ನು ಸ್ವಾಗತಿಸಲಿದ್ದಾರೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಲೆಗಳಲ್ಲಿ ಮಕ್ಕಳಿಗೆ ನೈತಿಕ ಶಿಕ್ಷಣ ನೀಡಬೇಕು ಎಂದು ಸೂಚಿಸಿದ್ದು, ಈ ಬಗ್ಗೆ ವಿಧಾನ ಪರಿಷತ್ನಲ್ಲಿಯೂ ಚರ್ಚೆಯಾಗಿದೆ. ಈ ವರ್ಷ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ, ಪ್ರೌಢ, ಪಿಯುಸಿ ಹಂತದಲ್ಲಿ ಮಕ್ಕಳಿಗೆ ಮಾನವೀಯ ಮೌಲ್ಯವುಳ್ಳ ಶಿಕ್ಷಣ ನೀಡುವ ಉದ್ದೇಶದಿಂದ ನೀತಿ ವಿಜ್ಞಾನ ಬೋಧಿಸಲಾಗುವುದು. ರಾಜ್ಯದಲ್ಲಿ 46 ಸಾವಿರ ಶಾಲೆಗಳಿದ್ದು, ಕೆಲ ಶಾಲೆಗಳಲ್ಲಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೂನ್ಯ ಫಲಿತಾಂಶ ಬಂದಿವೆ. ಅಂತಹ ಶಾಲೆಗಳ ಸುಧಾರಣೆಗೆ ಕ್ರಮ ವಹಿಸಲಾಗುವುದು ಎಂದು ಮಧು ಬಂಗಾರಪ್ಪ ತಿಳಿಸಿದರು.






























































