ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಉಸಿರಾಟ ಸಮಸ್ಯೆ ಮತ್ತು ಹೃದಯಸಂಬಂಧಿ ಕಾಯಿಲೆ ಇರುವವರಿಗೆ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಒಂದು ತಿಂಗಳಿಗಾಗುವಷ್ಟು ಟೆಸ್ಟ್ ಕಿಟ್ ತೆಗೆದಿಡುವಂತೆ ಎಲ್ಲಾ ಆಸ್ಪತ್ರೆಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಒಟ್ಟು 35 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 32 ಬೆಂಗಳೂರಿನಲ್ಲಿ ದೃಢಪಟ್ಟಿವೆ.
ಉಸಿರಾಟ ಹಾಗೂ ಹೃದಯಸಂಬಂಧಿ ಕಾಯಿಲೆಯಿಂದ ದಾಖಲಾಗಿರುವ ರೋಗಿಗಳಿಂದ ಆಸ್ಪತ್ರೆ ಸಿಬ್ಬಂದಿ ಸ್ಯಾಂಪಲ್ಸ್ ಕಲೆಕ್ಟ್ ಮಾಡಿ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಬೇಕು. ಜನಸಂದಣಿಯಲ್ಲಿ ಮಾಸ್ಕ್ ಧರಿಸಿ. ಕೋವಿಡ್ ಬಂದಿದೆ ಎಂದು ಆತಂಕ ಪಡುವ ಅಗತ್ಯವಿಲ್ಲ. ಆರೋಗ್ಯ ಇಲಾಖೆಯ ಮಾರ್ಗಸೂಚಿಯನ್ನು ಪಾಲಿಸಿ, ಮುಂಜಾಗ್ರತೆ ವಹಿಸಿದರೆ ಸಾಕು ಎಂದು ಸಲಹೆ ನೀಡಿದ್ದಾರೆ.






























































