ಬೆಂಗಳೂರು : ಶಾಸಕ ಬಸನಗೌಡ ಪಾಟೀಲ್ ಉಚ್ಛಾಟನೆ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಮತ್ತೊಂದು ಶಾಕ್ ನೀಡಿದೆ. ಯಲ್ಲಾಪುರದ ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಬೆಂಗಳೂರಿನ ಯಶವಂತಪುರದ ಶಾಸಕ ಎಸ್. ಟಿ. ಸೋಮಶೇಖರ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ. ಬಿಜೆಪಿಯಲ್ಲಿ ಇದ್ದುಕೊಂಡು ಕಾಂಗ್ರೆಸ್ ಜೊತೆ ಹೆಚ್ಚು ಗುರುತಿಸಿಕೊಂಡಿದ್ದರು. ಹೀಗಾಗಿ, ಅವರನ್ನು ಉಚ್ಚಾಟನೆ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಈ ಮೊದಲು ಇಬ್ಬರೂ ಕಾಂಗ್ರೆಸ್ನಲ್ಲಿ ಗುರುತಿಸಿಕೊಂಡಿದ್ದರು. 2019ರಲ್ಲಿ ಇಬ್ಬರೂ ಬಿಜೆಪಿ ಸೇರಿದರು. 2023ರಲ್ಲಿ ಇಬ್ಬರೂ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದು ಬಂದರು. ಆದರೆ, ಈಗ ಇಬ್ಬರೂ ಕಾಂಗ್ರೆಸ್ ಪಕ್ಷದ ಜೊತೆ ಹೆಚ್ಚು ಗುರುತಿಸಿಕೊಳ್ಳುತ್ತಿದ್ದರು. ಪದೇ ಪದೇ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಮಾರ್ಚ್ ಕೊನೆಯಲ್ಲಿ ಇಬ್ಬರಿಗೂ ಶೋಕಾಸ್ ನೋಟಿಸ್ ನೀಡಲಾಗಿತ್ತು. ಶೋಕಾಸ್ ನೋಟಿಸ್‌ಗೆ ಸರಿಯಾದ ಉತ್ತರ ನೀಡದ ಕಾರಣ ಇಬ್ಬರನ್ನೂ ಬಿಜೆಪಿ ಉಚ್ಚಾಟನೆ ಮಾಡಿದೆ. ಇಬ್ಬರು ನಾಯಕರು ಬಹಿರಂಗವಾಗಿ ಕಾಂಗ್ರೆಸ್ ಸಭೆಯಲ್ಲಿ ಭಾಗಿಯಾಗುತ್ತಿದ್ದರು. ಅಷ್ಟೇ ಅಲ್ಲದೇ ಪಕ್ಷದ ನಾಯಕರ ವಿರುದ್ಧವೇ ಹೇಳಿಕೆ ನೀಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಇಬ್ಬರ ವಿರುದ್ಧ ಶಿಸ್ತು ಕ್ರಮವನ್ನು ಕೈಗೊಂಡಿದೆ





































