ಮೌಲ್ಯಧಾರಿತ ಶಿಕ್ಷಣದೊಂದಿಗೆ ಉತ್ತಮ ಬದುಕು ಕಟ್ಟಿಕೊಳ್ಳಿ – ಮುನಿರಾಜ ರೆಂಜಾಳ
ಕಾರ್ಕಳ : ಕ್ರೈಸ್ಟ್ಕಿಂಗ್ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ಆರಂಭೋತ್ಸವ ಸಂಸ್ಥೆಯ ನೂತನ ಸಭಾಂಗಣದಲ್ಲಿ ಮೇ 29ರಂದು ನಡೆಯಿತು. ನಿವೃತ್ತ ಮುಖ್ಯ ಶಿಕ್ಷಕ ಹಾಗೂ ವಾಗ್ಮಿ ಮುನಿರಾಜ ರೆಂಜಾಳ ದೀಪ ಬೆಳಗಿಸಿ ಆರಂಭೋತ್ಸವಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳು ಮೌಲ್ಯಾಧಾರಿತ ಶಿಕ್ಷಣದೊಂದಿಗೆ ಒಳ್ಳೆಯ ಬದುಕನ್ನು ಕಟ್ಟಿಕೊಳ್ಳಬೇಕು. ಪೋಷಕರು ತಮ್ಮ ಮಕ್ಕಳಿಗೆ ಪ್ರೀತಿಯೊಂದಿಗೆ ಉತ್ತಮ ಕಲಿಕಾ ವಾತಾವರಣವನ್ನು ಸೃಷ್ಟಿಸಬೇಕು ಎಂದು ಹೇಳಿದರು.
ಉದ್ಯಮಿ ವಿವೇಕಾನಂದ ಶೆಣೈ ಮಾತನಾಡಿ, ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪಡುವ ಪರಿಶ್ರಮದ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಅರಿತುಕೊಳ್ಳಬೇಕು. ಮಕ್ಕಳ ಭವಿಷ್ಯ ರೂಪಿಸುವುದರಲ್ಲಿ ಕ್ರೈಸ್ಟ್ಕಿಂಗ್ ಪದವಿ ಪೂರ್ವ ಕಾಲೇಜು ಕಾರ್ಕಳಕ್ಕೆ ಮಾದರಿ ಸಂಸ್ಥೆಯಾಗಿದೆ ಎಂದು ಹೇಳಿದರು.

ಶಿಕ್ಷಕ –ರಕ್ಷಕ ಸಂಘದ ಮಾಜಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಹಾಲಿ ಅಧ್ಯಕ್ಷ ಪ್ರಕಾಶ್ ಡಿಸೋಜ, ಸಂಸ್ಥೆಯ ವಿದ್ಯಾರ್ಥಿ ಆಪ್ತ ಸಮಾಲೋಚಕಿ ಡಾ. ಸಿಸ್ಟರ್ ಶಾರ್ಲೆಟ್ ಸಿಕ್ವೇರಾ ಸಂದರ್ಭೋಚಿತವಾಗಿ ಮಾತನಾಡಿದರು.
ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಕ್ಕೆ ಎಂಟನೇ ರ್ಯಾಂಕ್, ಕೆಸಿಇಟಿ ಪರೀಕ್ಷೆಯ ಇಂಜಿನಿಯರಿಂಗ್ನಲ್ಲಿ ರಾಜ್ಯಕ್ಕೆ 57ನೇ ರ್ಯಾಂಕ್ ಹಾಗೂ ರಾಷ್ಟ್ರ ಮಟ್ಟದ ಜೆಇಇ ಮೈನ್ ಪರೀಕ್ಷೆಯಲ್ಲಿ 99.69 ಪರ್ಸೆಂಟೈಲ್ ಪಡೆದ ಸಂಸ್ಥೆಯ ಸಾಧಕ ವಿದ್ಯಾರ್ಥಿ ಅನಂತ್ ಎನ್.ಕೆ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಸಂಸ್ಥೆಯ ಪ್ರಾಚಾರ್ಯ ಲಕ್ಷ್ಮೀ ನಾರಾಯಣ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರುಡಾಲ್ಫ್ ಕಿಶೋರ್ ಲೋಬೊ, ಪ್ರೌಢಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಜೋಸ್ನಾ ಸ್ನೇಹಲತಾ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯ ಉಪಪ್ರಾಚಾರ್ಯ ಡಾ. ಪ್ರಕಾಶ್ ಭಟ್ ಸ್ವಾಗತಿಸಿ, ಸಂಸ್ಥೆಯ ನೀಟ್ ಸಂಯೋಜಕ ಹಾಗೂ ಜೀವಶಾಸ್ತ್ರ ವಿಭಾಗ ಮುಖ್ಯಸ್ಥ ಮೌನೇಶ್ವರ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಕನ್ನಡ ಉಪನ್ಯಾಸಕ ಉಮೇಶ್ ಬೆಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು. ರಸಾಯನಶಾಸ್ತ್ರ ಉಪನ್ಯಾಸಕಿ ಸೌಮ್ಯ ನಾಯ್ಕ್ ವಂದಿಸಿದರು.






























































