ದೆಹಲಿ : ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಸತತ 3ನೇ ಬಾರಿಗೆ ರೆಪೋ ದರ ಕಡಿತಗೊಳಿಸಿದೆ. ನಿರೀಕ್ಷೆಗೂ ಮೀರಿ 50 ಬೇಸಿಸ್ ಪಾಯಿಂಟ್ ಕಡಿತಗೊಳಿಸಿದ್ದು ರೆಪೋ ಬಡ್ಡಿ ದರ ಶೇ. 6ರಿಂದ ಶೇ. 5.50ಕ್ಕೆ ಇಳಿಕೆಯಾಗಿದೆ.
ಆರ್‌ಬಿಐನ ಹಣಕಾಸು ನೀತಿ ಸಮಿತಿಯು ಸಭೆಯ ಬಳಿಕ 50 ಮೂಲಾಂಶದಷ್ಟು (ಬೇಸಿಸ್ ಪಾಯಿಂಟ್) ರೆಪೋ ದರ ಕಡಿಮೆ ಮಾಡಲು ನಿರ್ಧರಿಸಿರುವುದಾಗಿ ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ತಿಳಿಸಿದ್ದಾರೆ. ಇದರಿಂದ ಸಾಲ ಮತ್ತು ಇಎಂಐಗಳ ಬಡ್ಡಿ ದರವೂ ಇಳಿಕೆಯಾಗಲಿದೆ. ಜೊತೆಗೆ ಹೊಸ ಸಾಲಗಾರರಿಗೆ ಗೃಹ ಸಾಲಗಳು, ವಾಹನದ ಮೇಲಿನ ಸಾಲಗಳು ಕಡಿಮೆ ಬಡ್ಡಿ ದರದಲ್ಲಿ ಸಿಗಲಿದೆ. ಆಟೊ ಮೋಬೈಲ್, ಕಾರ್ಪೊರೇಟ್ ಸಾಲಗಳ ಮೇಲಿನ ಮರುಪಾವತಿ ಕಂತುಗಳಲ್ಲಿಯೂ ಇಳಿಕೆಯಾಗುವ ನಿರೀಕ್ಷೆ ಇದೆ.
ರೆಪೊ ದರದಲ್ಲಿ ಶೇ 0.25ರಷ್ಟು ಇಳಿಕೆ ಆಗಬಹುದು ಎಂದು ತಜ್ಞರು ನಿರೀಕ್ಷಿಸಿದ್ದರು. ನಿರೀಕ್ಷೆಗೂ ಮೀರಿ ಶೇ 0.50ರಷ್ಟು ಇಳಿಕೆ ಮಾಡಲಾಗಿದೆ. ಜಿಡಿಪಿಯು 4 ವರ್ಷದ ಕನಿಷ್ಠ ಮಟ್ಟ ಶೇ 6.5ಕ್ಕೆ ಕುಸಿದಿದ್ದ ಹಿನ್ನೆಲೆಯಲ್ಲಿ ಈ ಉತ್ತೇಜನ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿ ತಿಳಿಸಿದೆ.

ರೆಪೋ ರೇಟ್
ವಾಣಿಜ್ಯ ಬ್ಯಾಂಕ್‌ಗಳು ರಿಸರ್ವ್ ಬ್ಯಾಂಕ್‍ನಿಂದ ಪಡೆಯುವ ಅಲ್ಪಾವಧಿ ಸಾಲದ ಮೇಲಿನ ಬಡ್ಡಿ ದರಕ್ಕೆ ರೆಪೋ ದರ ಎನ್ನುತ್ತಾರೆ. ರೆಪೋ ದರ ಕಡಿಮೆಯಾದರೆ ಬ್ಯಾಂಕ್‌ಗಳು ಕಡಿಮೆ ಬಡ್ಡಿ ದರದಲ್ಲಿ ಹೆಚ್ಚಿನ ಹಣವನ್ನು ಪಡೆಯಬಹುದು. ಬ್ಯಾಂಕ್‍ಗಳು ತಮ್ಮಲ್ಲಿ ಹಣದ ಕೊರತೆಯಾದಾಗ ಆರ್‌ಬಿಐನಿಂದ ಹಣ ಪಡೆಯುತ್ತಿರುತ್ತವೆ. ರೆಪೋ ರೇಟ್ ಜಾಸ್ತಿ ಇದ್ದರೆ ಬ್ಯಾಂಕ್‌ಗಳು ಸಾಲದ ಮೇಲಿನ ಬಡ್ಡಿ ದರವನ್ನು ಏರಿಕೆ ಮಾಡುತ್ತದೆ. ಇದರಿಂದ ವಾಹನ ಸಾಲ, ಗೃಹ ಸಾಲ್ಯ ಸೇರಿದಂತೆ ಇತ್ಯಾದಿ ಸಾಲಗಳ ಬಡ್ಡಿ ದರ ಏರುತ್ತದೆ.







































