ಹುಬ್ಬಳ್ಳಿ-ಧಾರವಾಡ : ಧಾರವಾಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಮಧ್ಯೆ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಅಂಗನವಾಡಿ ಮತ್ತು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು ಜನರು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ. ಆದರೆ ಈ ಮೊದಲೇ ನಿಗದಿಯಾಗಿರುವ ಪಿಯುಸಿ ಪರೀಕ್ಷೆಗಳು ನಡೆಯಲಿವೆ ಎಂದು ಸ್ಪಷ್ಟಪಡಿಸಲಾಗಿದೆ.
ಮುಂದಿನ ಒಂದು ವಾರದ ಅವಧಿಗೆ ಬೆಂಗಳೂರು ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಉಡುಪಿಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಮುಂದಿನ ನಾಲ್ಕು ದಿನಗಳ ಅವಧಿಗೆ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.






























































