ಮಂಗಳೂರು : ಮಧ್ಯರಾತ್ರಿ ವೇಳೆ ಆರ್ಎಸ್ಎಸ್ ನಾಯಕರೊಬ್ಬರ ಮನೆಗೆ ಪೊಲೀಸರು ಭೇಟಿ ನೀಡಿ ಫೋಟೊ ತೆಗೆಸಿಕೊಂಡು ಜಿಪಿಎಸ್ ಅಪ್‌ಲೋಡ್ ಮಾಡಿದ್ದ ಪ್ರಕರಣ ಇದೀಗ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಎಸ್ಪಿ ಅರುಣ್ಗೆ ಕರ್ನಾಟಕ ಹೈಕೋರ್ಟ್ ನೊಟೀಸ್ ಜಾರಿ ಮಾಡಿದೆ.
ಯು. ಜಿ. ರಾಧಾ ಅವರ ಮನೆ ಮೇಲೆ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಜಿಲ್ಲಾ ಎಸ್ಪಿ ಡಾ. ಅರುಣ್ ಕುಮಾರ್‌ಗೆ ಕಾರಣ ಕೇಳಿ ನೋಟಿಸ್ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ದಾಖಲೆ ಸಲ್ಲಿಸಬೇಕು. ಅಷ್ಟೇ ಅಲ್ಲದೇ ಕಾನೂನು ಹೊರತಾಗಿ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ತಾಕೀತು ಮಾಡಿದೆ.
ಜೂ. 1 ರಂದು ಉಪ್ಪಿನಂಗಡಿಯಲ್ಲಿರುವ ನನ್ನ ಮನೆಗೆ ಪೊಲೀಸರು ರಾತ್ರಿ ಬಂದಿದ್ದರು. ನನ್ನ ಮೇಲೆ ಯಾವುದೇ ಕ್ರಿಮಿನಲ್ ಪ್ರಕರಣ ಇಲ್ಲದೇ ಇದ್ದರೂ ಆರೋಪಿಯ ರೀತಿ ನನ್ನನ್ನು ಪೊಲೀಸರು ನಡೆಸಿಕೊಂಡಿದ್ದಾರೆ. ಇದರಿಂದ ನನ್ನ ಖಾಸಗಿತನ, ಚಾರಿತ್ರ್ಯಕ್ಕೆ ಧಕ್ಕೆಯಾಗಿದೆ. ವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ಪೊಲೀಸರು ವಿನಾ ಕಾರಣ ಕಸಿದಿದ್ದಾರೆ ಎಂದು ಆರೋಪಿಸಿ ಯು.ಜಿ.ರಾಧಾ ಹೈಕೋರ್ಟ್ ಮೊರೆ ಹೋಗಿದ್ದರು.

ವಿಚಾರಣೆ ನಡೆಸುವ ಮೂಲಕ ನನಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಲಾಗಿದೆ. ಹೀಗಾಗಿ ನನಗೆ 20 ಲಕ್ಷ ರು. ಮಾನನಷ್ಟ ಪರಿಹಾರ ನೀಡುವಂತೆ ಯು. ಜಿ. ರಾಧಾ ಹೈಕೋರ್ಟ್‌ಗೆ ದೂರು ನೀಡಿದ್ದರು. ದೂರುದಾರರ ಪರವಾಗಿ ನ್ಯಾಯವಾದಿ ಅರುಣ್ ಶ್ಯಾಮ್ ವಾದಿಸಿದ್ದರು. ನ್ಯಾ. ಸುನಿಲ್ ದತ್ ಯಾದವ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿ ಈಗ ದಕ್ಷಿಣ ಕನ್ನಡ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.
ಯು. ಜಿ. ರಾಧಾ ಅವರು ಈಗಾಗಲೇ ರಾಜ್ಯ ಪೊಲೀಸ್ ದೂರು ಪ್ರಾಧಿಕಾರ ಹಾಗೂ ರಾಷ್ಟ್ರೀಯ ಮಾನವ ಹಕ್ಕು ಆಯೋಗಕ್ಕೆ ಪ್ರತ್ಯೇಕ ದೂರು ನೀಡಿದ್ದಾರೆ. ಹಿಂದೂ ನಾಯಕರ ಮನೆಗಳಿಗೆ ಮಧ್ಯರಾತ್ರಿ ತೆರಳಿ ಫೋಟೋ ತೆಗೆದು ಜಿಪಿಎಸ್ ಅಪ್‌ಲೋಡ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಷ್ಟ್ರೀಯ ಮಾನವ ಹಕ್ಕು ಆಯೋಗ ಹಾಗೂ ರಾಜ್ಯ ಪೊಲೀಸ್ ದೂರು ಪ್ರಾಧಿಕಾರ ಜಿಲ್ಲಾ ಎಸ್‌ಪಿಗೆ ನೋಟಿಸ್ ಜಾರಿ ಮಾಡಿದೆ.





