ಧರ್ಮಸ್ಥಳದಲ್ಲಿ ಹೆಣ್ಣು ಮಕ್ಕಳ ಮೇಲೆ ನಡೆದ ಅತ್ಯಾಚಾರ-ಕೊಲೆ ಬಗ್ಗೆ ಮಾಹಿತಿಯಿದೆ ಎಂದ ವ್ಯಕ್ತಿ – ವಕೀಲರಿಬ್ಬರ ಪತ್ರ ವೈರಲ್

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಕೊಲೆಗಳು ಮತ್ತು ಅತ್ಯಾಚಾರ ಪ್ರಕರಣಗಳ ಬಗ್ಗೆ ವ್ಯಕ್ತಿಯೊಬ್ಬ ಧರ್ಮಸ್ಥಳ ಠಾಣೆಗೆ ಬಂದು ಮಾಹಿತಿ ನೀಡಲು ತಯಾರಿದ್ದೇನೆಂದು ತಮ್ಮಲ್ಲಿ ಹೇಳಿರುವುದಾಗಿ ವಕೀಲರಿಬ್ಬರ ಹೆಸರಿನಲ್ಲಿರುವ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಬೆಂಗಳೂರಿನ ವಕೀಲರಾದ ಓಜಸ್ವಿ ಗೌಡ ಮತ್ತು ಸಚಿನ್ ಎಸ್. ದೇಶಪಾಂಡೆ ಎಂಬವರ ಹೆಸರಿನಲ್ಲಿರುವ ಈ ಪತ್ರದಲ್ಲಿ, ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಹಲವಾರು ಹತ್ಯೆ ಮತ್ತು ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ ಮತ್ತು ಕೊಲೆಗಳನ್ನು ಮುಚ್ಚಿಹಾಕುವ ಸಲುವಾಗಿ, ಮೃತದೇಹಗಳನ್ನು ಹೂತು ಹಾಕಿದ್ದ ವ್ಯಕ್ತಿಯೊಬ್ಬ ತನ್ನ ಪಾಪಪ್ರಜ್ಞೆಯನ್ನು ಪರಿಹರಿಸಿಕೊಳ್ಳಲು ಧರ್ಮಸ್ಥಳ ಪೊಲೀಸ್ ಠಾಣೆಗೆ ಕೂಡಲೇ ಹಾಜರಾಗಿ ಶರಣಾಗುವ ನಿರ್ಧಾರ ಮಾಡಿರುತ್ತಾನೆ ಮತ್ತು ತಾನು ಹೂತು ಹಾಕಿರುವ ಮೃತದೇಹಗಳನ್ನು ಪೋಲೀಸರ ಸಮ್ಮುಖದಲ್ಲಿ ಹೊರತೆಗೆಯುವ ನಿರ್ಧಾರ ಮಾಡಿರುತ್ತಾನೆ. ಇತ್ತೀಚೆಗೆ ಹೊರತೆಗೆದ ಕಳೇಬರವೊಂದುನ್ನು ಪೋಲೀಸರಿಗೆ ಒಪ್ಪಿಸುವುದಾಗಿ ಹೇಳಿದ್ದಾನೆ ಎಂದು ಉಲ್ಲೇಖಿಸಲಾಗಿದೆ. ಸಾರ್ವಜನಿಕರ ಮಾಹಿತಿಗಾಗಿ ಎಂದು ಬರೆಯಲಾಗಿರುವ ಈ ಪತ್ರ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ದ.ಕ. ಎಸ್‌ಪಿ ಸ್ಪಷ್ಟನೆ
ಧರ್ಮಸ್ಥಳ ಪೊಲೀಸರು ಈ ಪತ್ರದ ನೈಜತೆಯನ್ನು ಪರಿಶೀಲಿಸಲು ಅದರಲ್ಲಿ ಉಲ್ಲೇಖಿಸಿದ್ದ ಬೆಂಗಳೂರಿನ ವಕೀಲರಾದ ಓಜಸ್ವಿ ಗೌಡ ಮತ್ತು ಸಚಿನ್ ಎಸ್. ದೇಶಪಾಂಡೆ ಎಂಬವರನ್ನು ಸಂಪರ್ಕಿಸಿ ಮಾಹಿತಿ ಕಲೆ ಹಾಕಿದ್ದಾರೆ. ವ್ಯಕ್ತಿಯೋರ್ವ ತಮ್ಮ ಬಳಿ ಬಂದು ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ತನಗೆ ಮಾಹಿತಿಯಿರುವುದಾಗಿಯೂ, ತಾನು ಧರ್ಮಸ್ಥಳ ಪೊಲೀಸ್ ಠಾಣೆಗೆ ಶರಣಾಗಿ ಮಾಹಿತಿ ನೀಡಲು ಸಿದ್ಧನಿರುವುದಾಗಿ ತಿಳಿಸಿದ್ದಾನೆ ಎಂದು ವಕೀಲರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ ಆ ವ್ಯಕ್ತಿಗೆ ಅಗತ್ಯ ಕಾನೂನು ಸುರಕ್ಷತೆಯನ್ನು ಕಲ್ಪಿಸಿದ ಬಳಿಕ ಹಾಜರುಪಡಿಸುವುದಾಗಿ ವಕೀಲರು ಹೇಳಿರುವುದಾಗಿ ಎಸ್ಪಿ ತಿಳಿಸಿದ್ದಾರೆ.
ಸಂಬಂಧಪಟ್ಟ ಆ ವ್ಯಕ್ತಿ ಠಾಣೆಗೆ ಹಾಜರಾಗಿ ಮಾಹಿತಿ ನೀಡಿದಲ್ಲಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟಪಡಿಸಿದ್ದಾರೆ.























































error: Content is protected !!
Scroll to Top