ಕೈಗಾರಿಕಾ ಸ್ಥಾಪನೆಗೆ ಉತ್ತೇಜನ ನೀಡುವುದರೊಂದಿಗೆ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿ ಕರೆ

ಉಡುಪಿ : ಜಿಲ್ಲೆಯಲ್ಲಿ ಹೆಚ್ಚು ಹೆಚ್ಚು ಕೈಗಾರಿಕಾ ಘಟಕಗಳನ್ನು ಸ್ಥಾಪಿಸುವುದರೊಂದಿಗೆ ಸ್ಥಳೀಯರಿಗೆ ಉದ್ಯೋಗ ಅವಕಾಶಗಳು ಲಭಿಸುವಂತೆ ಮಾಡಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಅಧಿಕಾರಿಗಳಿಗೆ ಸಲಹೆ ನೀಡಿದರು.

ಅವರು ಜೂ. 26ರಂದು ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೈಗಾರಿಕಾ ಸ್ಪಂದನ ಸಮಿತಿ, ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ, ರಫ್ತು ಉತ್ತೇಜನ ಸಮಿತಿ ಸಭೆ ಹಾಗೂ ಪ್ರಧಾನಮಂತ್ರಿ ಉದ್ಯೋಗ ಸೃಜನ ಯೋಜನೆಯ ಡಿ.ಎಲ್.ಎಂ.ಸಿ. ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಕೈಗಾರಿಕಾ ಘಟಕಗಳನ್ನು ಪ್ರಾರಂಭಿಸಲು ಮುಂದೆ ಬರುವ ಉದ್ಯಮಿಗಳಿಗೆ ಅಗತ್ಯವಿರುವ ಮಾಹಿತಿ ನೀಡಬೇಕು. ಅವರಿಗೆ ಸಕಲ ರೀತಿಯ ಮೂಲ ಸೌಕರ್ಯವುಳ್ಳ ಕೈಗಾರಿಕಾ ಪ್ರದೇಶಗಳನ್ನು ನಿರ್ಮಿಸಬೇಕು. ಹೆಚ್ಚು ಕೈಗಾರಿಕೆಗಳು ಸ್ಥಾಪನೆಯಾದಲ್ಲಿ ಜಿಲ್ಲೆಯ ಜನತೆಗೆ ಉದ್ಯೋಗಾವಕಾಶಗಳು ಲಭಿಸುತ್ತವೆ ಎಂದು ಡಿಸಿ ಹೇಳಿದರು.

ಹೆಬ್ರಿ ತಾಲೂಕಿನ ಶಿವಪುರದಲ್ಲಿ 74. 84 ಎಕ್ರೆ, ಕೆರೆಬೆಟ್ಟುವಿನಲ್ಲಿ 38. 75 ಎಕ್ರೆ, ಕಾರ್ಕಳದ ನಿಟ್ಟೆಯಲ್ಲಿ 50. 42 ಎಕ್ರೆ ಹಾಗೂ ಬ್ರಹ್ಮಾವರ ತಾಲೂಕಿನ ಉಪ್ಪೂರು 101. 19 ಎಕ್ರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ ನಿರ್ಮಾಣ ಮಾಡಲು ಭೂ ಸ್ವಾಧೀನ ಸೇರಿದಂತೆ ಇತರ ಪ್ರಕ್ರಿಯೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಡಿಸಿ ಸೂಚನೆ ನೀಡಿದರು.

ಜಿಲ್ಲೆಯಲ್ಲಿ 2023-24 ನೇ ಸಾಲಿನಲ್ಲಿ 2496.23 ಕೋಟಿ ರೂ. ವಹಿವಾಟು ಆಗಿತ್ತು. ಆದರೆ 2024-25 ನೇ ಸಾಲಿನಲ್ಲಿ 1930.33 ಕೋಟಿ ರೂ. ಆಗಿದೆ. ಪ್ರಗತಿ ವರ್ಷದಿಂದ ವರ್ಷಕ್ಕೆ ಹೆಚ್ಚು ಆಗಬೇಕು. ಆದರೆ ಕಳೆದ ಸಾಲಿನಲ್ಲಿ ಕಡಿಮೆಯಾಗಿದೆ. 2023-24 ನೇ ಸಾಲಿನಲ್ಲಿ ಮೀನು ಉತ್ಪನ್ನಗಳು 107989.57 ಮೆ.ಟನ್‌ನಷ್ಟು ರಫ್ತಾಗಿ 1726.25 ಕೋಟಿ ರೂ. ವಹಿವಾಟು ಆಗಿತ್ತು. 2024-25 ನೇ ಸಾಲಿನಲ್ಲಿ ಕೇವಲ 76531.09 ಮೆ.ಟನ್ ನಷ್ಟು ರಫ್ತಾಗಿ 1084.79 ಕೋಟಿ ರೂ. ವಹಿವಾಟು ಆಗಿದೆ. ಪ್ರಸಕ್ತ ಸಾಲಿನಲ್ಲಿ ರಫ್ತು ಪ್ರಮಾಣ ಇನ್ನಷ್ಟು ಹೆಚ್ಚಬೇಕು. ಉದ್ದಿಮೆದಾರರಿಗೆ ಮೀನುಗಾರಿಕಾ ಇಲಾಖೆಯವರು ಎಲ್ಲ ರೀತಿಯ ಸಹಕಾರ ನೀಡಿ, ರಫ್ತಿನ ಪ್ರಮಾಣ ಹೆಚ್ಚಿಸಲು ಮುಂದಾಗಬೇಕು ಎಂದರು.

ಡಾ. ಸರೋಜಿನಿ ಮಹಿಷಿ ವರದಿ ಅನ್ವಯ ಕೈಗಾರಿಕಾ ಘಟಕಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ಅವಕಾಶ ಕಲ್ಪಿಸಬೇಕು. ಜಿಲ್ಲೆಯ ಕೈಗಾರಿಕೆಗಳಲ್ಲಿ ಡಿ ವರ್ಗದ ಹುದ್ದೆಗಳಿಗೆ ಯಾವುದೇ ರೀತಿಯ ವಿದ್ಯಾರ್ಹತೆ ಇಲ್ಲದಿದ್ದರೂ ಸಹ ನೇಮಕ ಮಾಡಿಕೊಳ್ಳಬೇಕು. ಆದರೆ, ಇದು ನಿರೀಕ್ಷಿತ ಮಟ್ಟದಲ್ಲಿ ಆಗುತ್ತಿಲ್ಲ. ಈ ಬಗ್ಗೆ ಕೈಗಾರಿಕೆಗಳ ಮಾಲೀಕರು ಹೆಚ್ಚು ಜಾಹೀರಾತು ಪಡಿಸಿ, ನೇಮಕಾತಿಯನ್ನು ಹೆಚ್ಚಿಸುವ ಪ್ರಯತ್ನ ಮಾಡಬೇಕು ಎಂದು ಡಿಸಿ ಹೇಳಿದರು.

ಕೈಗಾರಿಕೆಗಳನ್ನು ಸ್ಥಾಪಿಸಲು ಬರುವ ಅರ್ಜಿಗಳನ್ನು ಬ್ಯಾಂಕ್ ಅಧಿಕಾರಿಗಳು ನಿಯಮಾನುಸಾರ ವಿಲೇವಾರಿ ಮಾಡಬೇಕು ಎಂದ ಡಿಸಿಯವರು ಹೊಸದಾಗಿ ಸಣ್ಣ ಕೈಗಾರಿಕಾ ಘಟಕಗಳ ಸ್ಥಾಪನೆಗೆ ಉತ್ತೇಜಿಸಬೇಕು ಎಂದರು.

ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ. ನಾಯಕ್, ಸಣ್ಣ ಕೈಗಾರಿಕಾ ಸಂಘದ ಜಿಲ್ಲಾ ಅಧ್ಯಕ್ಷ ಹರೀಶ್ ಕುಂದರ್, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಸೀತಾರಾಮ ಶೆಟ್ಟಿ, ಕೃಷಿ ಇಲಾಖೆಯ ಉಪನಿರ್ದೇಶಕ ಚಂದ್ರಶೇಖರ್ ನಾಯ್ಕ್, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು, ಜಿಲ್ಲೆಯ ಸಣ್ಣ ಕೈಗಾರಿಕಾ ಉದ್ದಿಮೆದಾರರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.























































































































error: Content is protected !!
Scroll to Top