ಕರ್ನಾಟಕ ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಭಕ್ರು ನೇಮಕ

ಬೆಂಗಳೂರು : ಕರ್ನಾಟಕ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ವಿಭು ಭಕ್ರು ಅವರನ್ನು ನೇಮಿಸಿ ಕೇಂದ್ರ ಸರಕಾರ ಸೋಮವಾರ (ಜುಲೈ.14) ಆದೇಶ ಹೊರಡಿಸಿದೆ. ಪ್ರಸ್ತುತ ನ್ಯಾಯಮೂರ್ತಿ ಕಾಮೇಶ್ವರ್ ರಾವ್ ಅವರು ದೆಹಲಿ ಹೈಕೋರ್ಟ್‌ಗೆ ವರ್ಗಾವಣೆಯಾಗಿದ್ದಾರೆ. ವಿಭು ಬಖ್ರು ಅವರು ಈ ಹಿಂದೆ ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದರು.

ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ನ್ಯಾ. ಭಕ್ರು ಅವರು 1966ರಲ್ಲಿ ನಾಗ್ಪುರದಲ್ಲಿ ಜನಿಸಿದರು. ಅವರು ದೆಹಲಿಯ ಮಥುರಾ ರಸ್ತೆಯಲ್ಲಿರುವ ದೆಹಲಿ ಪಬ್ಲಿಕ್‌ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದು, 1987ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ವಾಣಿಜ್ಯ ವಿಷಯದಲ್ಲಿ ಪದವಿ ಪಡೆದಿದ್ದಾರೆ. 1989ರಲ್ಲಿ ಚಾರ್ಟರ್ಡ್‌ ಅಕೌಂಟೆಂಟ್‌ ಆಗಿಯೂ ಅರ್ಹತೆ ಪಡೆದಿದ್ದರು. ಆನಂತರ 1990ರಲ್ಲಿ ಎಲ್‌ಎಲ್‌ಬಿ ಪದವಿ ಪಡೆದು, ಅದೇ ವರ್ಷ ದೆಹಲಿ ವಕೀಲರ ಪರಿಷತ್‌ನಲ್ಲಿ ವಕೀಲರಾಗಿ ನೋಂದಣಿ ಮಾಡಿಸಿದ್ದರು. 2011ರಲ್ಲಿ ಹಿರಿಯ ವಕೀಲರಾಗಿ ಅವರು ಪದೋನ್ನತಿ ಪಡೆದಿದ್ದರು. 2013ರ ಏಪ್ರಿಲ್‌ 17ರಂದು ದೆಹಲಿ ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡ ಅವರು 2015ರ ಮಾರ್ಚ್‌ 18ರಂದು ಕಾಯಂಗೊಂಡಿದ್ದರು.

ಕರ್ನಾಟಕ ಹೈಕೋರ್ಟ್​ ಮಾತ್ರವಲ್ಲದೆ, ಮಧ್ಯಪ್ರದೇಶ, ಜಾರ್ಖಂಡ್, ಗುವಾಹಟಿ ಮತ್ತು ಪಟನಾ ಹೈಕೋರ್ಟ್‌ಗಳಿಗೆ ನೂತನ ಮುಖ್ಯ ನ್ಯಾಯಮೂರ್ತಿಗಳ (ಸಿಜೆ) ನೇಮಕಕ್ಕೆ ಕೇಂದ್ರ ಸರಕಾರ ಅನುಮೋದನೆ ನೀಡಿದೆ.









































error: Content is protected !!
Scroll to Top