ಮೈಸೂರು : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆ ಪ್ರಕರಣಗಳ ಆರೋಪಗಳ ಕುರಿತ ತನಿಖೆಗೆ ವಿಶೇಷ ತನಿಖಾ ತಂಡ (SIT) ರಚಿಸಬೇಕೆಂಬ ವಕೀಲರ ನಿಯೋಗದ ಮನವಿ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಸದ್ಯಕ್ಕೆ ಎಸ್‌ಐಟಿ ರಚನೆ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಯಾರೋ ಹೇಳಿದರೆಂದು ಎಸ್‌ಐಟಿ ರಚನೆ ಮಾಡಲು ಆಗುವುದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆ ಬಳಿಕ ಅಗತ್ಯವಿದ್ದಲ್ಲಿ ಎಸ್‌ಐಟಿ ರಚನೆ ಮಾಡ್ತೀವಿ. ನಮಗೆ ಯಾರಿಂದಲೂ ಒತ್ತಡ ಬಂದಿಲ್ಲ. ಒತ್ತಡ ಬಂದರೂ ನಾವು ಕೇರ್ ಮಾಡೋದಿಲ್ಲ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಧರ್ಮಸ್ಥಳ ಗ್ರಾಮದ ಅರಣ್ಯ ಪ್ರದೇಶಗಳಲ್ಲಿ ಅಕ್ರಮವಾಗಿ ಹಲವು ಶವಗಳನ್ನು ಹೂತಿಡಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ವ್ಯಕ್ತಿಯೋರ್ವ ತಾನೇ ಶವ ಹೂತಿಟ್ಟುದ್ದು ಎಂದು ಪೊಲೀಸರ ಬಳಿ ಒಪ್ಪಿಕೊಂಡಿದ್ದಾರೆ. ಈ ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಕರಣದ ತನಿಖೆಗೆ ಎಸ್‌ಐಟಿ ತಂಡ ರಚಿಸಬೇಕು ಎಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಸೇರಿದಂತೆ ಅನೇಕ ವಕೀಲರು ಸಿಎಂಗೆ ಮನವಿ ಸಲ್ಲಿಸಿದ್ದರು.



















