ಸೆ. 22ರಿಂದ ಅ. 7ರವರೆಗೆ ಮರು ಜಾತಿಗಣತಿಗೆ ನಿರ್ಧರಿಸಿದ ರಾಜ್ಯ ಸರಕಾರ

ಬೆಂಗಳೂರು : ಕಾಂತರಾಜು ಆಯೋಗ ಜಾತಿಗಣತಿ ವರದಿಗೆ ಪ್ರಬಲ ವಿರೋಧ ವ್ಯಕ್ತವಾದ ಬೆನ್ನಲ್ಲೇ ಕಾಂಗ್ರೆಸ್​ ಹೈಕಮಾಂಡ್ ಮರು ಜಾತಿಗಣತಿ ವರದಿ ಮಾಡುವಂತೆ ಸಿಎಂ ಸಿದ್ದರಾಮಯ್ಯಗೆ ಸೂಚನೆ ನೀಡಿತ್ತು. ಇದೀಗ ಸೆಪ್ಪೆಂಬರ್‌ 22ರಿಂದ ಮರು ಜಾತಿಗಣತಿ ಮಾಡಲು ರಾಜ್ಯ ಸರಕಾರ ನಿರ್ಧರಿಸಿದೆ.

ಇಂದು ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಜಾತಿ ಜನಗಣತಿ ಮರು ಸಮೀಕ್ಷೆಯ ಬಗ್ಗೆ ಚರ್ಚೆ ಮಾಡಿದ್ದಾರೆ. ಸೆಪ್ಟಂಬರ್ 22ರಿಂದ ಅಕ್ಟೋಬರ್ 7ರವರೆಗೆ 15 ದಿನಗಳ ಕಾಲ ಸಮೀಕ್ಷೆ ನಡೆಸುವ ನಿರ್ಧರಿಸಲಾಗಿದ್ದು, ಅಕ್ಟೋಬರ್ ಕೊನೆಯ ಒಳಗಾಗಿ ಸಮೀಕ್ಷೆ ವರದಿಯನ್ನು ಸಲ್ಲಿಸಬೇಕು ಎಂದು ಸಿದ್ದರಾಮಯ್ಯ ಸೂಚಿಸಿದ್ದಾರೆ. ಈ ಸಂಬಂಧ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜುಲೈ 24ರಂದು ಅಧಿಸೂಚನೆ ಹೊರಡಿಸಲಿದೆ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ಹೊಸ ಸಮೀಕ್ಷೆ ನಡೆಯಲಿದ್ದು, ಸಮೀಕ್ಷೆ ಮಾದರಿ, ರೂಪರೇಷೆ, ಕಾಲಾವಧಿ ಬಗ್ಗೆ ನಾಳೆ ಪ್ರಕಟವಾಗಲಿದೆ ಎಂದು ವರದಿಯಾಗಿದೆ.

ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹಾಗೂ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮದುಸೂದನ್ ನಾಯಕ್ ಅವರಿಂದ ಮಾಹಿತಿ ಪಡೆದ ಸಿಎಂ ಮರು ಜಾತಿಗಣತಿಯಲ್ಲಿ ಯಾವುದೇ ಲೋಪದೋಷವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ವೈಜ್ಞಾನಿಕವಾಗಿ ಜಾತಿಗಣತಿ ಮಾಡುವಂತೆ ಹಾಗೂ ಮಾನವ ಸಂಪನ್ಮೂಲ ಜೊತೆಗೆ ಆಧುನಿಕ ತಂತ್ರಜ್ಞಾನ ಬಳಕೆಯ ಬಗ್ಗೆ ಸೂಚನೆ ನೀಡಿರುವ ಅವರು, ತರಬೇತಿ ಸೇರಿದಂತೆ ಸಮೀಕ್ಷೆಗೆ ಪೂರ್ವಭಾವಿ ಸಿದ್ಧತೆಗಳನ್ನು ಈಗಲೇ ಆರಂಭಿಸಬೇಕು. ಸಮೀಕ್ಷೆ ಅತ್ಯಂತ ಸಮರ್ಪಕವಾಗಿ ನಡೆಯಬೇಕು. ಸಮೀಕ್ಷೆ ಕುರಿತು ಯಾವುದೇ ದೂರುಗಳಿಗೆ ಆಸ್ಪದವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸಮೀಕ್ಷೆಯಿಂದ ಯಾರೂ ಹೊರಗುಳಿಯದಂತೆ ಖಾತ್ರಿಪಡಿಸುವಂತೆ ತಿಳಿಸಿದ್ದಾರೆ.

ಜಾತಿ ತಾರತಮ್ಯ ನಿವಾರಣೆ ಮಾಡುವುದು ಗಣತಿಯ ಮುಖ್ಯ ಉದ್ದೇಶ ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರತಿಯೊಬ್ಬರ ಆರ್ಥಿಕ ಪರಿಸ್ಥಿತಿ, ಜಮೀನು ಇದೆಯೇ ಇಲ್ಲವೇ ಸೇರಿದಂತೆ ಸಮಗ್ರ ಸಮೀಕ್ಷೆ ನಡೆಯಬೇಕು. ಈ ಸಮೀಕ್ಷೆ ವರದಿ ಬಜೆಟ್ ಸಿದ್ಧಪಡಿಸುವ ವೇಳೆ ಆಧಾರವಾಗಲಿದೆ. ಈ ಬಾರಿಯ ಸಮೀಕ್ಷೆ ದೇಶದಲ್ಲೇ ಮಾದರಿ ಸಮೀಕ್ಷೆಯಾಗಬೇಕು ಎಂದು ಹೇಳಿದರು.









































































































error: Content is protected !!
Scroll to Top