ಉಡುಪಿ : ರೈತರಿಗೆ ದರ್ಖಾಸ್ನಲ್ಲಿ ಮಂಜೂರಾದ ಭೂಮಿಗಳ ಪೋಡಿ ಮಾಡುವ ಕಾರ್ಯವನ್ನು ಮಳೆಗಾಲ ಮುಗಿದ ಕೂಡಲೇ ಪ್ರಾರಂಭಿಸಬೇಕೆಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಕಂದಾಯ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಅವರು ಜು. 30ರಂದು ಮಣಿಪಾಲ ರಜತಾದ್ರಿಯ ಸಭಾಂಗಣದಲ್ಲಿ ಕಂದಾಯ ಇಲಾಖೆಯ ವಿವಿಧ ಯೋಜನೆಗಳ ಕುರಿತು ಉಡುಪಿ ಜಿಲ್ಲೆಯ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದರ್ಖಾಸ್ನಲ್ಲಿ ಕಳೆದ 20 ರಿಂದ 50 ವರ್ಷಗಳಲ್ಲಿ ಮಂಜೂರಾಗಿರುವ ಜಮೀನಿಗೆ ಪೋಡಿ ಮಾಡಿ ರೈತರಿಗೆ ಪಹಣಿ ನೀಡುವ ಕಾರ್ಯಗಳ ವಿಲೇವಾರಿ ನಿಗದಿತ ಪ್ರಮಾಣದಲ್ಲಿ ಆಗಿರುವುದಿಲ್ಲ. ಕಂದಾಯ ಇಲಾಖೆಯ ಕೆಳ ಹಂತದ ಗ್ರಾಮ ಲೆಕ್ಕಾಧಿಕಾರಿಗಳು, ರೆವೆನ್ಯೂ ಇನ್ ಸ್ಪೆಕ್ಟರ್ ಗಳು, ಕಂದಾಯ ಇಲಾಖೆಯ ಅಧಿಕಾರಿಗಳು, ತಹಶೀಲ್ದಾರರು ಸಭೆ ಕರೆದು ಪ್ರಗತಿ ಪರಿಶೀಲನೆ ಮಾಡಿ ಪೋಡಿ ಮಾಡುವ ಕಾರ್ಯದ ವೇಗವನ್ನು ಹೆಚ್ಚಿಸಬೇಕೆಂದು ಡಿಸಿಯವರಿಗೆ ತಿಳಿಸಿದ ಸಚಿವರು 10 ಸಾವಿರ ಮಂದಿಗೆ ಇದರ ಪ್ರಯೋಜನ ಮಾಡಿಕೊಡಬೇಕೆಂದರು.

ರೈತರಿಗೆ ತೊಂದರೆಯಾಗುತ್ತಿದೆ
ಪೌತಿ ಖಾತೆ ಮಾಡುವುದಕ್ಕೆ ಈಗಾಗಲೇ ರಾಜ್ಯದಲ್ಲಿ ಆರಂಭವಾಗಿದೆ. ಜಿಲ್ಲೆಯಲ್ಲೂ ಸಹ ಆರಂಭವಾಗಿದ್ದು, ಪ್ರಗತಿ ತುಂಬಾ ಕುಂಠಿತವಾಗಿದೆ. ಈ ಕಾರ್ಯದ ವೇಗವನ್ನು ಹೆಚ್ಚಿಸಬೇಕು. ಜಿಲ್ಲೆಯಲ್ಲಿ 2,92,000 ಜಮೀನಿನ ಪೌತಿ ಖಾತೆ ಮಾಡಬೇಕಿದೆ ಎಂದ ಅವರು, ಮೃತರ ಹೆಸರಿನಲ್ಲಿ ಜಮೀನಿನ ಖಾತೆಗಳು ಇದ್ದಲ್ಲಿ ಸರಕಾರದ ಸೌಲಭ್ಯಗಳು ಹಾಗೂ ಸಬ್ಸಿಡಿಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಇದರಿಂದ ರೈತರಿಗೆ ತೊಂದರೆ ಉಂಟಾಗುತ್ತಿದೆ. ಇವುಗಳನ್ನು ಆದ್ಯತೆಯ ಮೇಲೆ ಮಾಡಬೇಕು. ಜಿಲ್ಲಾಧಿಕಾರಿಗಳು ಪ್ರಗತಿಯನ್ನು ಹೆಚ್ಚಿಸಲು ಮುಂದಾಗಬೇಕು ಎಂದು ಸೂಚನೆ ನೀಡಿದರು.
ಪೂರ್ವ ಮುಂಗಾರಿನಲ್ಲಿ ಮಳೆ ಬರುವ ಸಂದರ್ಭದಲ್ಲಿ ಸಿಡಿಲು, ಗುಡುಗಿನಿಂದ ಪ್ರತಿ ವರ್ಷ ಸರಾಸರಿ 70 ಕ್ಕೂ ಹೆಚ್ಚು ಜನರು ರಾಜ್ಯದಲ್ಲಿ ಸಾವಗೀಡಾಗುತ್ತಿದ್ದಾರೆ. ಕಾರಣ ಸಿಡಿಲು ಬಡಿಯುವಾಗ ಎಲ್ಲಿ ಆಶ್ರಯ ಪಡೆಯಬೇಕು ಎಂಬ ಮಾಹಿತಿ ಇರುವುದಿಲ್ಲ. ಪಂಚಾಯತ್ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿಗಳು ಮಾಹಿತಿ ನೀಡುವಂತಹ ಕಾರ್ಯ ಮಾಡಬೇಕು. ಮಳೆಗಾಲದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದರು.
ಮನೆ ಮಂಜೂರುಗೊಳಿಸಿ
ಅತಿವೃಷ್ಟಿಯಿಂದ ಮನೆಗಳು ಪೂರ್ಣ ಪ್ರಮಾಣದಲ್ಲಿ ಹಾಳಾಗಿದ್ದಲ್ಲಿ ಆ ಕುಟುಂಬಕ್ಕೆ ಪರಿಹಾರದ ಅನುದಾನವನ್ನು ನೀಡುವುದರ ಜೊತೆಗೆ ದೇವರಾಜ ಅರಸು ವಸತಿ ಯೋಜನೆಯಡಿಯಲ್ಲಿ ಮನೆಯನ್ನು ಮಂಜೂರು ಮಾಡಬೇಕು. ಈ ರೀತಿ ಮಂಜೂರು ಮಾಡುವ ಅಧಿಕಾರ ಕಂದಾಯ ಇಲಾಖೆಗೆ ಇದೆ. ಇದನ್ನು ಅನುಷ್ಠಾನಗೊಳಿಸಬೇಕು ಎಂದು ಸಚಿವರು ಸೂಚಿಸಿದರು.
ಪ್ರಸ್ತಾವನೆ ಕಳುಹಿಸಿ
ಮಳೆಯಿಂದ ಹಾಳಾಗಿರುವ ರಸ್ತೆ ಗುಂಡಿ ಮುಚ್ಚುವ ಕಾರ್ಯ ಕೈಗೊಳ್ಳಬೇಕು. ಎನ್.ಡಿ.ಆರ್.ಎಫ್ ನಿಯಮಾವಳಿಯ ಪ್ರಕಾರ ಪ್ರಸ್ತಾವನೆಯನ್ನು ಸಲ್ಲಿಸಿದರೆ ಅನುಮೋದನೆ ನೀಡಲಾಗುವುದು. ಗುಂಡಿ ಮುಚ್ಚುವಂತಹ ಸಣ್ಣ ಪುಟ್ಟ ಕಾರ್ಯಗಳಿಗೆ ಹೆಚ್ಚು ಹೆಚ್ಚು ಅನುದಾನಬೇಕೆಂದು ಕೇಳಿದಲ್ಲಿ ಅನುಮತಿ ನೀಡುವುದು ಕಷ್ಟ. ಇವು ಎನ್.ಡಿ.ಆರ್.ಎಫ್ ನಿಯಮಾವಳಿಯ ಪ್ರಕಾರ ಮಾಡಿ ಜನರಿಗೆ ಅನುಕೂಲವಾಗುವಂತೆ ನೋಡಿಕೊಳ್ಳಬೇಕು ಎಂದರು.
9 ಮಂದಿಗೆ ಮಾತ್ರ ವಿತರಣೆಯಾಗಿದೆ
ಜಿಲ್ಲೆಯಲ್ಲಿ ಬಗರ್ ಹುಕುಂ ಅಡಿಯಲ್ಲಿ 687 ಜನರಿಗೆ ಹಕ್ಕುಪತ್ರಗಳನ್ನು ವಿತರಿಸುವ ಕಾರ್ಯವಾಗಬೇಕಾಗಿತ್ತು. ಆದರೆ ಇದುವರೆಗೆ ಕೇವಲ 9 ಜನರಿಗೆ ಮಾತ್ರ ವಿತರಿಸಲಾಗಿದೆ. ಆಗಸ್ಟ್ 15 ರೊಳಗಾಗಿ ಅರ್ಹರಿರುವ ಪ್ರತಿಯೊಬ್ಬರಿಗೂ ಹಕ್ಕುಪತ್ರ ವಿತರಿಸುವ ಕಾರ್ಯವಾಗಬೇಕೆಂದು ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು.
ಭೂ ಸುರಕ್ಷಾ ಯೋಜನೆಯಡಿ ಕಂದಾಯ ಇಲಾಖೆಯ ಭೂ ದಾಖಲೆಗಳನ್ನು ಗಣಕೀಕರಣಗೊಳಿಸುವ ಕಾರ್ಯವು ನೆರೆಯ ಜಿಲ್ಲೆಗೆ ಹೋಲಿಸಿದಲ್ಲಿ ಕಡಿಮೆ ಇದೆ. ದಾಖಲೆಗಳನ್ನು ಗಣಕೀಕರಿಸುವ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳಬೇಕು. ಇಲ್ಲ ಸಲ್ಲದ ಸಬೂಬು ಹೇಳುವುದು ಬೇಡವೆಂದ ಅವರು ಜಿಲ್ಲೆಯಲ್ಲಿ ಈಗಾಗಲೇ ಬಹುತೇಕ ಗ್ರಾಮ ಲೆಕ್ಕಿಗರಿಗೆ ಲ್ಯಾಪ್ ಟಾಪ್ ವಿತರಣೆಯನ್ನು ಮಾಡಲಾಗಿದೆ. ಗ್ರಾಮ ಲೆಕ್ಕಿಗರು ತಮ್ಮ ಪ್ರತಿಯೊಂದು ಕಾರ್ಯಗಳನ್ನು ಈಗಿನಿಂದಲೇ ಇ – ಆಫೀಸ್ ಮೂಲಕ ಮಾಡಬೇಕು ಎಂದರು.
ಸಭೆಯಲ್ಲಿ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಡಿ.ಎಫ್.ಓ. ಗಣಪತಿ, ವೈಲ್ಡ್ ಲೈಫ್ ಡಿ.ಎಫ್.ಓ. ಶಿವರಾಮ್ ಎಂ. ಬಾಬು, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.





































