ಉಡುಪಿ : ಗೌರವಧನವನ್ನು 10 ಸಾವಿರ ರೂ.ಗೆ ಏರಿಕೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಉಡುಪಿ ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿತು. ಬಳಿಕ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ. ಅವರಿಗೆ ಅಹವಾಲು ಸಲ್ಲಿಸಿದರು.
2025 ಜೂನ್-ಜುಲೈನಲ್ಲಿ ಕೇಂದ್ರ ಸರಕಾರ ಹೆಚ್ಚಿಸಿದ ಪ್ರೋತ್ಸಾಹಧನವನ್ನು ರಾಜ್ಯದಲ್ಲಿ ಜಾರಿಗೊಳಿಸಬೇಕು. ಮಾಸಿಕ ಕನಿಷ್ಠ 10 ಸಾವಿರ ರೂ. ಗ್ಯಾರಂಟಿಯನ್ನು ಈ ವರ್ಷದ ಎಪ್ರಿಲ್ ನಿಂದ ಅನ್ವಯವಾಗುವಂತೆ ಪಾವತಿಸಬೇಕು. ಜನಸಂಖ್ಯೆಯ ಮಿತಿ ಹೆಚ್ಚಿಸುವುದನ್ನು ಕೈಬಿಡಬೇಕು ಹಾಗೂ ಯಾವುದೇ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು. ಆಶಾ ಕಾರ್ಯಕರ್ತೆಯರ ಅವೈಜ್ಞಾನಿಕ ಕಾರ್ಯನಿರ್ವಹಣೆ ಮೌಲ್ಯಮಾಪನ ನಿಲ್ಲಿಸಬೇಕು.
ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರಿಸಬೇಕು. ನಿವೃತ್ತ ಆಶಾ ಕಾರ್ಯಕರ್ತರಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ನಿವೃತ್ತಿ ವೇತನ ನೀಡಬೇಕು. ನಗರ ಆಶಾ ಕಾರ್ಯಕರ್ತರಿಗೆ 2 ಸಾವಿರ ರೂ. ಗೌರವಧನ ಹೆಚ್ಚಿಸಬೇಕು. 2025 ಮಾರ್ಚ್ ರಾಜ್ಯ ಬಜೆಟ್ ನಲ್ಲಿ ಎಲ್ಲಾ ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ 1 ಸಾವಿರ ರೂ. ಪ್ರೋತ್ಸಾಹಧನ ಹೆಚ್ಚಳ ಮಾಡಿದಂತೆಯೇ ಆಶಾ ಕಾರ್ಯಕರ್ತೆಯರಿಗೂ ಹೆಚ್ಚಳ ಮಾಡಬೇಕು ಎಂದು ಅಹವಾಲಿನಲ್ಲಿ ಆಗ್ರಹಿಸಲಾಗಿದೆ.
ಧರಣಿಯಲ್ಲಿ ಎಐಯುಟಿಯುಸಿ ರಾಜ್ಯ ಉಪಾಧ್ಯಕ್ಷ ಕೆ.ವಿ. ಭಟ್, ಜಿಲ್ಲಾ ಉಸ್ತುವಾರಿ ಹರಿಣಿ, ಸಂಘದ ಉಡುಪಿ ಜಿಲ್ಲಾಧ್ಯಕ್ಷೆ ಸುಹಾಸಿನಿ, ಕಾರ್ಯದರ್ಶಿ ಉಮಾ ಕೆ.ಎಸ್., ಕಾರ್ಕಳ ತಾಲೂಕು ಅಧ್ಯಕ್ಷೆ ಯಶೋಧಾ, ಕುಂದಾಪುರ ತಾಲೂಕು ಅಧ್ಯಕ್ಷೆ ಭಾರತಿ ವಂಡ್ಲೆ, ಉಡುಪಿ ತಾಲೂಕು ಅಧ್ಯಕ್ಷೆ ಶಾಂಭಾವಿ ಕುಲಾಲ್ ಮೊದಲಾದವರು ಉಪಸ್ಥಿತರಿದ್ದರು.
ವಿವಿಧ ಬೇಡಿಕೆ ಈಡೇರಿಕೆಗಾಗಿ ಜಿಲ್ಲಾಧಿಕಾರಿ ಕಚೇರಿ ಬಳಿ ಆಶಾ ಕಾರ್ಯಕರ್ತರ ಪ್ರತಿಭಟನೆ




























































