ಮೊಬೈಲ್ ಬಿಡಿ – ಪುಸ್ತಕ ಹಿಡಿ : ಸ್ವಾತಂತ್ರ್ಯೋತ್ಸವದಲ್ಲಿ ಸಿಎಂ ಕರೆ

ಬೆಂಗಳೂರು : ನಾವೆಲ್ಲರೂ ಗಮನಿಸಿರುವ ಹಾಗೆ ನಮ್ಮ ಹೊಸ ತಲೆಮಾರು ಮೊಬೈಲ್ ಫೋನ್, ಇಂಟರ್ನೆಟ್ ಮುಂತಾದವುಗಳ ಭರಾಟೆಯಲ್ಲಿ ವಿಪರೀತ ತಲ್ಲಣಗಳನ್ನು ಎದುರಿಸುತ್ತಿದೆ. ಖಿನ್ನತೆ, ಆತಂಕ, ವಿನಾಕಾರಣ ಸಿಟ್ಟು, ದ್ವೇಷ ಮುಂತಾದ ಭಾವನೆಗಳಲ್ಲಿ ಸಿಲುಕಿ ಸಂಕಷ್ಟ ಪಡುತ್ತಿದೆ. ಈ ಸಾಮಾಜಿಕ ಸಮಸ್ಯೆಯನ್ನು ಹೋಗಲಾಡಿಸಲು ನಾವೆಲ್ಲರೂ ಸೇರಿ ಹೊಸ ದಾರಿಗಳನ್ನು ಹುಡುಕಿಕೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ನಾವು ಮೊಬೈಲ್ ಬಿಡಿ – ಪುಸ್ತಕ ಹಿಡಿ ಮತ್ತು ಓದು ಕರ್ನಾಟಕ ಎಂಬ ಕಾರ್ಯಕ್ರಮವನ್ನು ರೂಪಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮಾಣಿಕ್ ಷಾ ಮೈದಾನದಲ್ಲಿ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಬ್ರಿಟೀಷ್ ಸಾಮ್ರಾಜ್ಯಶಾಹಿ ಆಳ್ವಿಕೆಯನ್ನು ಕಿತ್ತೆಸೆದು ಧೈರ್ಯ, ತ್ಯಾಗ, ಸ್ವರಾಜ್ಯದ ಸಂಕೇತ ಮತ್ತು ಸಮಸ್ತ ಶಕ್ತಿಯಾದ ತ್ರಿವರ್ಣ ಧ್ವಜವನ್ನು ಸಂಭ್ರಮದಿಂದ ಹಾರಿಸಲಾಯಿತು. ದೇಶವನ್ನು ದಾಸ್ಯದಿಂದ ಬಿಡುಗಡೆಗೊಳಿಸಲು ನಡೆದ ದೀರ್ಘಕಾಲದ ಹೋರಾಟದಲ್ಲಿ ಭಾಗವಹಿಸಿದ್ದ ಮಹಾತ್ಮ ಗಾಂಧೀಜಿ, ಸರ್ದಾರ್ ವಲ್ಲಭಭಾಯಿ ಪಟೇಲ್, ಮೌಲಾನಾ ಅಬುಲ್ ಕಲಾಂ ಆಜಾದ್, ಜವಾಹರ್ ಲಾಲ್ ನೆಹರು, ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್ ಮುಂತಾದ ಎಲ್ಲಾ ಅಮರ ವೀರರನ್ನು ಧನ್ಯತಾಭಾವದಿಂದ ಸ್ಮರಿಸೋಣ ಎಂದರು.

ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿತ್ತು. ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ದೋಂಡಿಯಾ ವಾಘ, ಹಲಗಲಿಯ ವೀರ ಬೇಡರು, ಮೈಲಾರ ಮಹಾದೇವಪ್ಪ, ಬೂದಿ ಬಸಪ್ಪ ನಾಯಕ ಮುಂತಾದವರು ಹಾಗೂ ಶ್ರೀರಂಗಪಟ್ಟಣ, ಸುರಪುರ, ಕಿತ್ತೂರು, ಈಸೂರು, ವಿಧುರಾಶ್ವತ್ಥ, ಶಿವಪುರ, ಅಂಕೋಲ ಮುಂತಾದ ಸ್ಥಳಗಳು ಬ್ರಿಟೀಷರನ್ನು ನಡುಗಿಸಿದ್ದವು. ಲಕ್ಷಾಂತರ ಜನರು ಸಕ್ರಿಯವಾಗಿ ಭಾಗವಹಿಸಿದ್ದರಲ್ಲದೆ ಸಾವಿರಾರು ಜನರು ಜೀವ ತ್ಯಾಗ ಮಾಡಿದ್ದಾರೆ. ಅವರೆಲ್ಲರನ್ನೂ ಕೃತಜ್ಞತಾ ಪೂರ್ವಕವಾಗಿ ಗೌರವಿಸೋಣ ಎಂದರು.





























































































































error: Content is protected !!
Scroll to Top