ಗೃಹಲಕ್ಷ್ಮೀ ಯೋಜನೆಯಡಿ ಜಿಲ್ಲೆಯಲ್ಲಿ 870.83 ಕೋಟಿ ರೂ. ಹಣ ಪಾವತಿ
ಉಡುಪಿ : 2024 -25 ನೇ ಆರ್ಥಿಕ ವರ್ಷದಲ್ಲಿ ನಮ್ಮ ರಾಜ್ಯವು ದೇಶದಲ್ಲಿಯೇ ಅತಿ ಹೆಚ್ಚು ತಲಾ ಆದಾಯ ಹೊಂದಿರುವ ರಾಜ್ಯವಾಗಿ ಹೊರಹೊಮ್ಮಿದೆ. ರಾಜ್ಯ ಸರಕಾರವು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವ ದೃಷ್ಠಿಯಿಂದ ವಿತ್ತೀಯ ನಿರ್ವಹಣೆಯಲ್ಲಿ ತನ್ನ ಕಾರ್ಯಕ್ಷಮತೆಯನ್ನು ತೋರಿಸಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಅಜ್ಜರಕಾಡಿನಲ್ಲಿರುವ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೇರವೇರಿಸಿ ಬಳಿಕ ಮಾತನಾಡಿದರು.

ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿರುವುದು ರಾಜ್ಯದ ಅರ್ಥ ವ್ಯವಸ್ಥೆ ಆರೋಗ್ಯವಂತವಾಗಿದೆ ಎಂಬುದಕ್ಕೆ ಸ್ಪಷ್ಟ ಉದಾಹರಣೆಯಾಗಿದೆ ಎಂದರು.
ಸ್ವಾತಂತ್ರ್ಯ ಹೋರಾಟದ ನಾಯಕತ್ವವನ್ನು ವಹಿಸಿ, ಜಗತ್ತಿನ ಚರಿತ್ರೆಯಲ್ಲಿ ಮೊದಲ ಬಾರಿಗೆ ಅಹಿಂಸೆಯ ಮೂಲಕ ಸ್ವಾತಂತ್ರ್ಯವನ್ನು ತಂದುಕೊಟ್ಟ ಮಹಾತ್ಮ ಗಾಂಧೀಜಿಯವರು ಉಡುಪಿಗೆ ಆಗಮಿಸಿ, ಅಜ್ಜರಕಾಡಿನಲ್ಲಿ ದೇಶ ಪ್ರೇಮಿಗಳ ಹೋರಾಟಕ್ಕೆ ಕರೆ ನೀಡಿದ್ದು ಮರೆಯಲಾಗದ ಘಟನೆ. ಅದರ ಸ್ಮಾರಕವೂ ಈ ನೆಲದಲ್ಲಿ ಇಂದು ಚಿರಸ್ಥಾಯಿಯಾಗಿದೆ. ಜಾತಿ-ಮತ ಭೇದವಿಲ್ಲದೇ ಉಡುಪಿ ಜಿಲ್ಲೆಯ ಜನರು ಸ್ವಾತಂತ್ರ್ಯ ಹೋರಾಟದಲ್ಲಿ ಗಾಂಧೀಜಿಯಂತಹ ನಾಯಕರ ಕರೆಗೆ ಓಗೊಟ್ಟು ಭಾಗವಹಿಸಿರುವುದು ಸದಾ ಮರೆಯಲಾಗದ ಐತಿಹಾಸಿಕ ಘಟನೆ ಎಂದು ಸಚಿವರು ಸ್ಮರಿಸಿದರು.
ಮಾಸಿಕ ಪಿಂಚಣಿ ಯೋಜನೆಗಳನ್ನು ಡಿಬಿಟಿ ವ್ಯಾಪ್ತಿಗೆ ತರುವುದರೊಂದಿಗೆ ಪ್ರತಿ ಮಾಹೆ ರಾಜ್ಯದಲ್ಲಿ ಅಂದಾಜು 82.57 ಲಕ್ಷ ಫಲಾನುಭವಿಗಳಿಗೆ ಆಧಾರ್ ಆಧಾರಿತ ಪಿಂಚಣಿ ವ್ಯವಸ್ಥೆ ಯೋಜನೆಯಡಿ ನೇರವಾಗಿ ಜಮೆ ಮಾಡಲಾಗುತ್ತಿದೆ. ನೈಸರ್ಗಿಕ ವಿಕೋಪಗಳಿಂದ ತತ್ತರಿಸಿದ ರೈತರಿಗೆ ಕ್ಷಿಪ್ರ, ಪಾರದರ್ಶಕ ಹಾಗೂ ನಿಖರವಾದ ಪರಿಹಾರವನ್ನು ನೀಡುವ ನಿಟ್ಟಿನಲ್ಲಿ ಪರಿಹಾರ ತಂತ್ರಾಂಶವನ್ನು ಉನ್ನತೀಕರಿಸಿ, ಯಾವುದೇ ಮಧ್ಯವರ್ತಿಗಳಿಲ್ಲದೇ ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ಪರಿಹಾರವನ್ನು ಜಮಾ ಮಾಡಲಾಗುತ್ತಿದೆ ಎಂದು ಹೇಳಿದರು.
ಡಿಜಿಟಲೀಕರಣ
ಕರ್ನಾಟಕ ಭೂದಾಖಲೆಗಳು ದಶಕಗಳಿಂದ ಕಗ್ಗಂಟಿನಲ್ಲಿದ್ದು, ಜನರು ತಾಲೂಕು ಕಚೇರಿಗೆ ಅಲೆಯಬೇಕಿತ್ತು. ಇದಕ್ಕೆ ಪರಿಹಾರವಾಗಿ ಎಲ್ಲಾ ದಾಖಲೆಗಳನ್ನು ಡಿಜಿಟಲೀಕರಣ ಮಾಡುವುದರೊಂದಿಗೆ ಸುರಕ್ಷಿತಗೊಳಿಸಲಾಗುತ್ತಿದೆ. ಚುನಾವಣೆಯ ಸಂದರ್ಭದಲ್ಲಿ ಘೋಷಿಸಿದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಮುಂದುವರೆಸಿಕೊಂಡು ಹೋಗುತ್ತಿರುವ ನಮ್ಮ ಸರಕಾರದ ಕಾರ್ಯವೈಖರಿಗೆ ದೇಶ-ವಿದೇಶಗಳ ತಜ್ಞರಿಂದ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.
870.83 ಕೋಟಿ ರೂ.
ಬಡತನ ನಿವಾರಣೆಗೆ ನೇರ ನಗದು ನೀಡುವ ಗೃಹಲಕ್ಷ್ಮೀ ಯೋಜನೆ ಅಡಿಯಲ್ಲಿ ರಾಜ್ಯದಾದ್ಯಂತ 1.23 ಕೋಟಿ ರೂ. ಫಲಾನುಭವಿಗಳಿಗೆ ಈವರೆಗೆ 47,400 ಕೋಟಿ ರೂ. ಗಳಷ್ಟು ಜಮಾ ಮಾಡಲಾಗಿದೆ. ಜಿಲ್ಲೆಯಲ್ಲಿ 2,25,131 ಫಲಾನುಭವಿಗಳಿಗೆ 870.83 ಕೋಟಿ ರೂ. ಹಣ ಸಂದಾಯ ಮಾಡಲಾಗಿದೆ. ಅಕ್ಕ ಕೋ-ಆಪರೇಟಿವ್ ಸೊಸೈಟಿಗಳನ್ನು ಸ್ಥಾಪಿಸುವುದರೊಂದಿಗೆ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳನ್ನು ಸದಸ್ಯರನ್ನಾಗಿಸಲಾಗುತ್ತಿದೆ ಎಂದು ಹೇಳಿದರು.
ಶಾಲಾ ಮಕ್ಕಳಿಗೆ ವರ್ಷಕ್ಕೊಮ್ಮೆ ಇಲಾಖೆಯಿಂದಲೇ ಆರೋಗ್ಯ ತಪಾಸಣೆ ನಡೆಸಲು ತೀರ್ಮಾನಿಸಲಾಗಿದೆ. ಅಂಗನವಾಡಿಗಳಲ್ಲಿ ಎಲ್.ಕೆ.ಜಿ., ಯು.ಕೆ.ಜಿ. ನಡೆಸಲು 10 ಸಾವಿರ ಅಂಗನವಾಡಿ ಕೇಂದ್ರಗಳನ್ನು ಗುರುತಿಸಲಾಗಿದ್ದು, 4 ರಿಂದ 5 ಸಾವಿರ ಅಂಗನವಾಡಿಗಳಲ್ಲಿ ಸದ್ಯದಲ್ಲಿಯೇ ತರಗತಿಗಳನ್ನು ಆರಂಭಿಸಲಾಗುವುದು. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಎಲ್ಲ ಕೇಂದ್ರಗಳಿಗೆ ವಿಸ್ತರಿಸಲಾಗುವುದು ಎಂದರು.
ಪ್ರಸಕ್ತ ಸಾಲಿನಲ್ಲಿ ಪಶ್ಚಿಮ ವಾಹಿನಿ ಯೋಜನೆಯಡಿ ಜಿಲ್ಲೆಯಲ್ಲಿ 151 ಕೋಟಿ ವೆಚ್ಚದಲ್ಲಿ ಉಪ್ಪು ನೀರು ತಡೆ ಅಣೆಕಟ್ಟು ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಇದರಿಂದ ಸುಮಾರು 192.52 ಹೆಕ್ಟೇರ್ ರೈತರ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಒದಗಲಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕೋಮು ಹಿಂಸೆ ನಿಗ್ರಹಕ್ಕಾಗಿ ವಿಶೇಷ ಕಾರ್ಯಪಡೆ ರಚನೆ ಮಾಡಲಾಗಿದೆ.
ಉಡುಪಿ ನಗರಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿದ್ದು, ಪರಿಶೀಲನಾ ಹಂತದಲ್ಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಜಿ.ಪಂ. ಸಿಇಒ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಗದ್ಯಾಳ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕೊಡವೂರು, ಸೈನಿಕರ ವೇದಿಕೆಯ ಅಧ್ಯಕ್ಷ ಕರ್ನಲ್ ರೋಡಿಗ್ರೆಸ್, ಗಣಪಯ್ಯ ಸೇರಿಗಾರ್, ಸುಂದರ ಬಂಗೇರ, ದಯಾನಂದ ಪೂಜಾರಿ, ಗಣೇಶ್ ರಾವ್, ಮಾಜಿ ಸೈನಿಕರ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪರಮಶಿವ, ಮಾಜಿ ಸೈನಿಕರುಗಳು, ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
























