ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಉಪನ್ಯಾಸಕರನ್ನು ನೇಮಿಸುವಂತೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ – ತಹಶೀಲ್ದಾರರಿಗೆ ಮನವಿ

ಕಾರ್ಕಳ : 2025-26ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಯಂ ಉಪನ್ಯಾಸಕರ ಮತ್ತು ಅರ್ಹ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳುವಂತೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತು ಆ. 26ರಂದು ಕಾರ್ಕಳ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಬಳಿಕ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

ಉಪತಹಶೀಲ್ದಾರ್‌ ಮಂಜುನಾಥ್‌ ಅವರಿಗೆ ಮನವಿ ಸಲ್ಲಿಕೆ

ಮನವಿಯಲ್ಲೇನಿದೆ ?
ಕರ್ನಾಟಕ ರಾಜ್ಯದಲ್ಲಿ ಕಾಲೇಜು ಶಿಕ್ಷಣ ಇಲಾಖೆ ಅಡಿಯಲ್ಲಿ ಬರುವ 432 ಪದವಿ ಕಾಲೇಜುಗಳಲ್ಲಿ 6,000 ಕಾಯಂ ಉಪನ್ಯಾಸಕರಲ್ಲಿ 3000ಕ್ಕಿಂತ ಹೆಚ್ಚು ಉಪನ್ಯಾಸಕರು ಈಗಾಗಲೇ ನಿವೃತ್ತಿ ಪಡೆದಿದ್ದು, ಇನ್ನು ಕೇವಲ 3000 ಖಾಯಂ ಉಪನ್ಯಾಸಕರೊಂದಿಗೆ 12,000 ಅತಿಥಿ ಉಪನ್ಯಾಸಕರ ಸೇವಾ ನೆರವಿನಿಂದ ಪದವಿ ತರಗತಿಗಳು ಜರುಗುತ್ತಿರುವುದು ನಮಗೆಲ್ಲರಿಗೂ ತಿಳಿದಿರುವ ಸತ್ಯ. ಕರ್ನಾಟಕದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ಪಡೆಯುವುದು ವಿದ್ಯಾರ್ಥಿಗಳ ಹಕ್ಕು ಮುಂದುವರೆದು ಗುಣಮಟ್ಟದ ಶಿಕ್ಷಣ ನೀಡುವಿಕೆಯ ಖಾತರಿಪಡಿಸಿಕೊಳ್ಳುವುದು ಘನ ಸರ್ಕಾರದ ಕರ್ತವ್ಯ. ಆದರೆ, ತಮ್ಮ ಕರ್ತವ್ಯ ಪ್ರಜ್ಞೆಯನ್ನು ಮರೆತಂತಿರುವ ಘನ ಸರ್ಕಾರಗಳು ಪದವಿ ಹಂತದಲ್ಲಿ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಖಾಯಂ ಉಪನ್ಯಾಸಕರ/ಅರ್ಹ ಉಪನ್ಯಾಸಕರ ನೇಮಕಾತಿಯಲ್ಲಿ ದೃಢವಾದ ನಿಲುವು ತೆಗೆದುಕೊಳ್ಳದಿರುವುದು ಕಳವಳಕಾರಿಯಾದ ಸಂಗತಿ.

2025-26ನೇ ಸಾಲಿನಲ್ಲಿ ಖಾಲಿ ಇರುವ 12000 ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, 55,000 ಅರ್ಜಿಗಳು ಸಲ್ಲಿಕೆ ಆಗಿರುತ್ತವೆ. ಈಗಾಗಲೇ ನಮ್ಮ ಎಲ್ಲಾ ವಿಶ್ವವಿದ್ಯಾಲಯಗಳ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಇಲ್ಲಿಯವರೆಗೆ ಅತಿಥಿ ಉಪನ್ಯಾಸಕರ ನೇಮಕಾತಿ ಆಗದೆ ಇರುವ ಕಾರಣ ವಿದ್ಯಾರ್ಥಿಗಳಿಗೆ ಸರಿಯಾದ ರೀತಿಯ ತರಗತಿಗಳು ನಡೆಯುತ್ತಿಲ್ಲ. ರಾಜ್ಯದ ಪದವಿ ಕಾಲೇಜುಗಳಿಗೆ ಖಾಯಂ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳುವಷ್ಟು ಯೋಗ್ಯತೆ ರಾಜ್ಯ ಸರ್ಕಾರಕ್ಕೆ ಇಲ್ಲದಿದ್ದರೂ ಕನಿಷ್ಠ ಪಕ್ಷ ಅರ್ಹ ಅತಿಥಿ ಉಪನ್ಯಾಸಕರ ನೇಮಕಾತಿಗೆ ತಕ್ಷಣ ಕ್ರಮ ವಹಿಸಬೇಕೆಂದು ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ.

ಇದೇ ಸಂದರ್ಭದಲ್ಲಿ ವಿಶೇಷವಾಗಿ ಗಮನಿಸಬೇಕಾದ ಅಂಶವೆಂದರೆ ಸರ್ಕಾರಿ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಬಡ-ಮಧ್ಯಮ ವರ್ಗದ ಅಥವಾ ಕೂಲಿ ಕಾರ್ಮಿಕರ ಮಕ್ಕಳು, ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಯ ಸುಧಾರಣೆಗೆ ಸರಕಾರಿ ಪದವಿ ಕ್ಯಾಂಪಸ್‌ಗಳಲ್ಲಿ ಸಮರ್ಪಕ ಗುಣಮಟ್ಟದ ಶಿಕ್ಷಣ ನೀಡುವುದು ಕಾಲೇಜು ಶಿಕ್ಷಣ ಇಲಾಖೆ ಹಾಗೂ ಸರ್ಕಾರಗಳ ಜವಾಬ್ದಾರಿ ಆಗಿರುತ್ತದೆ. ಒಟ್ಟಾರೆಯಾಗಿ ಗಮನಿಸುವುದಾದರೆ, ರಾಜ್ಯದ ಪದವಿ ಕಾಲೇಜುಗಳಲ್ಲಿ ಖಾಯಂ ಪ್ರಾಂಶುಪಾಲರ ನೇಮಕಾತಿವಿಲ್ಲದೆ, ಖಾಯಂ ಉಪನ್ಯಾಸಕರ ನೇಮಕಾತಿವಿಲ್ಲದೆ, ಕನಿಷ್ಠ ಪಕ್ಷ ಅರ್ಹ ಅತಿಥಿ ಉಪನ್ಯಾಸಕರು ಇಲ್ಲದೆ ಸಂಪೂರ್ಣ ಶೈಕ್ಷಣಿಕ ವ್ಯವಸ್ಥೆಯೇ ಬುಡ ಮೇಲಾಗಿರುವ ಸಂದರ್ಭದಲ್ಲಿ, ವಿಶ್ವವಿದ್ಯಾಲಯಗಳಿಂದ ಹೊರ ಬರುತ್ತಿರುವ ಪದವೀಧರರ ಭವಿಷ್ಯ ಅತಂತ್ರವಾಗಿದೆ ಹಾಗೂ ಇನ್ನು ಕೆಲವೇ ವರ್ಷಗಳಲ್ಲಿ ಸರ್ಕಾರಿ ಪದವಿ ಕಾಲೇಜುಗಳನ್ನು ಸಂಪೂರ್ಣವಾಗಿ ನಿರ್ನಾಮ ಮಾಡಲು ಸರ್ಕಾರ ಪಣ ತೊಟ್ಟಂತಿರುವುದು ಈ ನಾಡಿನ ಶೈಕ್ಷಣಿಕ ವ್ಯವಸ್ಥೆಗೆ ಒದಗಿದ ದುರ್ದೈವ ಪರಿಸ್ಥಿತಿ. ಆದ್ದರಿಂದ ಪದವಿ ಶಿಕ್ಷಣವನ್ನು ಬಲಪಡಿಸಿ. ಶೈಕ್ಷಣಿಕ ಕ್ಷೇತ್ರವನ್ನು ಆದ್ಯತಾ ವಲಯವೆಂದು ಪರಿಗಣಿಸಿ, ಅಗತ್ಯ ಕ್ರಮಗಳನ್ನು ಕೈಗೊಂಡು ರಾಜ್ಯದ ವಿದ್ಯಾರ್ಥಿಗಳ ಹಿತ ಕಾಯಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ.

ಬೇಡಿಕೆಗಳು:
ಈಗಾಗಲೇ 20,000ಕ್ಕಿಂತ ಹೆಚ್ಚು ಅರ್ಹ ಅಭ್ಯರ್ಥಿಗಳು ಯುಜಿಸಿ ನಿಯಮಾವಳಿ ಅನ್ವಯ ಅರ್ಹತೆ ಪಡೆದು ಸರ್ಕಾರಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಲು ತಯಾರಿದ್ದಾರೆ. ಆದ್ದರಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಎಲ್ಲಾ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು.

ಪ್ರತಿ ವರ್ಷ ಅತಿಥಿ ಉಪನ್ಯಾಸಕರ ನೇಮಕಾತಿ ಸಂದರ್ಭದಲ್ಲಿ ಹಲವಾರು ಕಾರಣಗಳಿಗೆ ವಿಳಂಬ ಧೋರಣೆ ಅನುಸರಿಸುತ್ತಿರುವುದು ಗೊಂದಲಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು.

ಪದವಿ ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದನ್ನು ಕಾತರಿಪಡಿಸಿಕೊಳ್ಳುವ ದೃಷ್ಟಿಯಿಂದ ಯುಜಿಸಿ ನಿಯಮಾವಳಿ ಅನ್ವಯ ಅರ್ಹತೆ ಪಡೆದ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲು ಸರ್ಕಾರ ಆಸಕ್ತಿ ವಹಿಸಬೇಕು.

ಸರ್ಕಾರಿ ಕಾಲೇಜುಗಳ ಮೂಲಭೂತ ಸೌಲಭ್ಯಕ್ಕೆ ಹೆಚ್ಚಿನ ಅನುದಾನ ಒದಗಿಸಬೇಕು ಹಾಗೂ ಪ್ರಯೋಗಾಲಯ ಸಲಕರಣೆಗಳು, ಕಂಪ್ಯೂಟರ್ ಇನ್ನಿತರ ಮೂಲಭೂತ ಸೌಲಭ್ಯವನ್ನು ಒದಗಿಸಬೇಕು.

ಪ್ರತಿಭಟನೆಯಲ್ಲಿ ಎಬಿವಿಬಿ ಮಂಗಳೂರು ವಿಭಾಗದ ಸಂಚಾಲಕ ಸುಮಿತ್‌ ಶೆಟ್ಟಿ, ಉಡುಪಿ ಜಿಲ್ಲಾ ಸಂಚಾಲಕ ಶ್ರೇಯಸ್‌ ಅಂಚನ್‌, ಕಾರ್ಕಳ ತಾಲೂಕು ಸಂಚಾಲಕ ಸುಶಾನ್‌ ಹಾಗೂ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.























































































































error: Content is protected !!
Scroll to Top