ಗಣೇಶ ಮೆರವಣಿಗೆ ವೇಳೆ ನುಗ್ಗಿದ ಟ್ರಕ್ – 8 ಮಂದಿ ಸಾವು

ಹಾಸನ : ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಕ್ಯಾಂಟರ್ ಟ್ರಕ್ ನುಗ್ಗಿದ ಪರಿಣಾಮ ಭೀಕರ ದುರಂತ ಸಂಭವಿಸಿದೆ. ಈ ದುರ್ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದು, ಇಪ್ಪತ್ತಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಹಾಸನದಿಂದ ಹೊಳೆನರಸೀಪುರ ಕಡೆಗೆ ವೇಗವಾಗಿ ಹೋಗುತ್ತಿದ್ದ ಟ್ರಕ್, ಮಾರ್ಗ ಮಧ್ಯದಲ್ಲಿ ಏಕಾಏಕಿ ರಸ್ತೆಗೆ ಅಡ್ಡ ಬಂದ ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದೆ. ನಿಯಂತ್ರಣ ಕಳೆದುಕೊಂಡ ಕ್ಯಾಂಟರ್ ಮೆರವಣಿಗೆಯಲ್ಲಿದ್ದ ಜನರ ಮೇಲೆ ನುಗ್ಗಿದೆ. ಘಟನೆಯ ತೀವ್ರತೆಗೆ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೀವ್ರ ಗಾಯಗೊಂಡಿದ್ದ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಗಾಯಗೊಂಡ 20ಕ್ಕೂ ಹೆಚ್ಚು ಜನರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಘಟನೆ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಈ ದುರ್ಘಟನೆಯು ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯಿಂದ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

5 ಲಕ್ಷ ರೂ. ಪರಿಹಾರ ಘೋಷಣೆ

ಘಟನೆಯಲ್ಲಿ ಮೃತಪಟ್ಟವರ ಕುಟಂಬಕ್ಕೆ 5 ಲಕ್ಷ ರೂ.‌ ಪರಿಹಾರವನ್ನು ರಾಜ್ಯ ಸರಕಾರ ಘೋಷಿಸಿದೆ.‌ ಅಲ್ಲದೆ ಗಾಯಗೊಂಡವರ ಚಿಕಿತ್ಸೆಯ ವೆಚ್ಚ ಭರಿಸುವುದಾಗಿ ತಿಳಿಸಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ಧರಾಮಯ್ಯ‌ ಅವರು ತೀವ್ರ ದುಃಖ‌ ವ್ಯಕ್ತಪಡಿಸಿದ್ದಾರೆ.















































































error: Content is protected !!
Scroll to Top