ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಇಂದಿನಿಂದ ಭಾರಿ ಮಳೆ, ಗಾಳಿ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಕರಾವಳಿ ಭಾಗದ ಮಂಗಳೂರು, ಉಡುಪಿ, ಉತ್ತರಕನ್ನಡ ಜಿಲ್ಲೆ ಸೇರಿದಂತೆ ಶಿವಮೊಗ್ಗ, ಬೆಳಗಾವಿ, ಕಲಬುರಗಿ, ಬಾಗಲಕೋಟೆ, ಯಾದಗಿರಿ, ವಿಜಯಪುರ, ಬೀದರ್ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದೆ. ಕರಾವಳಿ ಕರ್ನಾಟಕದಲ್ಲಿ ಇಂದು ಭಾರಿ ಮಳೆ ಮತ್ತು ಬಲವಾದ ಗಾಳಿಯೊಂದಿಗೆ ಚಂಡಮಾರುತದ ಸಾಧ್ಯತೆಯಿದೆ. ಮಂಗಳೂರು ಮತ್ತು ಉಡುಪಿ ಸುತ್ತಮುತ್ತಲ ಪ್ರದೇಶಗಳಲ್ಲಿ ಗಂಟೆಗೆ 50ರಿಂದ 60 ಕಿ.ಮೀ ವೇಗದ ಗಾಳಿ ಮತ್ತು ಮಳೆ ಮುಂದುವರಿಯಲಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಕರ್ನಾಟಕದಾದ್ಯಂತ ಇಂದಿನಿಂದ 6 ದಿನಗಳ ಕಾಲ ಮಳೆ ಮುಂದುವರಿಯಲಿದ್ದು, ಭಾರೀ ಮಳೆಯಾಗುವ ಸಾಧ್ಯತೆಯಿದೆ.



























































