ಕಾರ್ಕಳ : ಸೇವಾ ಪಾಕ್ಷಿಕದ ಭಾಗವಾಗಿ ಬಿಜೆಪಿ ಕಾರ್ಯಕರ್ತರು ಸಮಾಜಮುಖಿ ಚಟುವಟಿಕೆ, ಆರೋಗ್ಯ ಶಿಬಿರಗಳನ್ನು ಹಮ್ಮಿಕೊಂಡಿರುವುದು ಪ್ರಶಂಸನೀಯ. ಆರೋಗ್ಯ ಶಿಬಿರಗಳಿಂದ ಸ್ವಾಸ್ಥ್ಯ ಜಾಗೃತಿ ಮೂಡಿಸಲು ಸಹಕಾರಿಯಾಗುವುದು ಎಂದು ಶಾಸಕ ವಿ. ಸುನಿಲ್ ಕುಮಾರ್ ಅಭಿಪ್ರಾಯಪಟ್ಟರು.
ಅವರು ಅ. 5ರಂದು ಬಿಜೆಪಿ ಕಾರ್ಕಳ ಮಂಡಲದ ವತಿಯಿಂದ ದೇರಳಕಟ್ಟೆಯ ಜಸ್ಟೀಸ್ ಕೆ. ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ಸಹಯೋಗದಲ್ಲಿ ಬಜಗೋಳಿಯ ತುಡಾರ್ ಕಾಂಪ್ಲೆಕ್ಸ್ ಶ್ರೀಸಾಯಿ ಸಭಾಭವನದಲ್ಲಿ ಆರೋಗ್ಯ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ಬಿಜೆಪಿ ಮಂಡಲ ಅಧ್ಯಕ್ಷ ನವೀನ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮಹಾವೀರ್ ಹೆಗ್ಡೆ, ಕೆ. ಎಸ್. ಹೆಗ್ಡೆ ಆಸ್ಪತ್ರೆಯ ವೈದ್ಯಾಧಿಕಾರಿ ಸಂಚಿತಾ ಶೆಣೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಿಬಿರದಲ್ಲಿ 250ಕ್ಕೂ ಹೆಚ್ಚು ಮಂದಿ ಭಾಗವಹಿಸಿ ಉಚಿತ ಆರೋಗ್ಯ ತಪಾಸಣೆಯ ಸೌಲಭ್ಯವನ್ನು ಸದುಪಯೋಗಿಸಿಕೊಂಡರು. ಶಿಬಿರದಲ್ಲಿ ಸಾಮಾನ್ಯ ಆರೋಗ್ಯ ತಪಾಸಣೆ, ರಕ್ತದೊತ್ತಡ ಮತ್ತು ಮಧುಮೇಹ ಪರೀಕ್ಷೆ, ಕಣ್ಣಿನ ತಜ್ಞರು, ಎಲುಬು ಮತ್ತು ಕೀಲು ತಜ್ಞರು, ಚರ್ಮರೋಗ ತಜ್ಞರು, ಕಿವಿ-ಮೂಗು-ಗಂಟಲು ತಜ್ಞರಿಂದ ತಪಾಸಣೆ, ಇಸಿಜಿ ತಪಾಸಣೆ ಸೇರಿದಂತೆ ವಿವಿಧ ವಿಭಾಗಗಳ ವೈದ್ಯರು ಸೇವೆ ನೀಡಿದರು.

ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ಬೋಳ, ಕಾರ್ಯದರ್ಶಿ ಹರ್ಷವರ್ಧನ್ ನಿಟ್ಟೆ, ಮಹಿಳಾ ಮೋರ್ಚಾದ ಅಧ್ಯಕ್ಷೆ ವಿನಯಾ ಡಿ. ಬಂಗೇರ, ಮಿಯ್ಯಾರು ಶಕ್ತಿ ಕೇಂದ್ರದ ಅಧ್ಯಕ್ಷ ಪ್ರಕಾಶ್ ಬಲಿಪ, ಪ್ರಧಾನ ಕಾರ್ಯದರ್ಶಿಗಳಾದ ಸುಮಿತ್ ನಲ್ಲೂರು, ರಜತ್ ಮುಡಾರು, ಮುಡಾರು ಗ್ರಾಮ ಸಮಿತಿ ಅಧ್ಯಕ್ಷ ಸುರೇಶ್ ಸಾಲಿಯಾನ್, ಮಿಯ್ಯಾರು ಗ್ರಾಮ ಸಮಿತಿ ಅಧ್ಯಕ್ಷ ಶರಣ್ ಕೆ. ಶೆಟ್ಟಿ, ನಲ್ಲೂರು ಗ್ರಾಮ ಸಮಿತಿ ಅಧ್ಯಕ್ಷ ಪವನ್ ಜೈನ್, ಮಾಳ ಗ್ರಾಮ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜೇಶ್ ನಾಯ್ಕ್, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
















