ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ಹೈದರಾಬಾದ್ : ಶುಕ್ರವಾರ ಬೆಳಗಿನ ಜಾವ ಹೈದರಾಬಾದ್‌ನಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ವೋಲ್ವೋ ಬಸ್ ಕರ್ನೂಲ್ ಜಿಲ್ಲೆಯ ಚಿನ್ನ ಟೆಕುರು ಗ್ರಾಮದ ಬಳಿ ಬೈಕ್‌ಗೆ ಡಿಕ್ಕಿ ಹೊಡೆದು ಬೆಂಕಿ ಹತ್ತಿಕೊಂಡಿದೆ. ಪರಿಣಾಮವಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.
ಬೈಕ್‌ನಲ್ಲಿದ್ದ ವ್ಯಕ್ತಿಯನ್ನು ಶಿವಶಂಕರ್ ಎಂದು ಗುರುತಿಸಲಾಗಿದೆ. ಬಸ್ಸು ಮತ್ತು ಬೈಕ್ ಒಂದೇ ದಿಕ್ಕಿನಲ್ಲಿ ಪ್ರಯಾಣಿಸುತ್ತಿತ್ತು. ವೇಗವಾಗಿ ಬರುತ್ತಿದ್ದ ಬಸ್ಸು ಮೊದಲು ಹಿಂಬದಿಯಿಂದ ಬೈಕಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಕೆಳಗಡೆ ಬಿದ್ದಿದೆ. ಬೈಕ್ ಕೆಳಗಡೆ ಬಿದ್ದರೂ ಚಾಲಕ ಬಸ್ಸನ್ನು ವೇಗವಾಗಿ ಚಲಾಯಿಸಿದ್ದಾನೆ. ಕೆಳಭಾಗದಲ್ಲಿ ಸಿಲುಕಿಕೊಂಡಿದ್ದ ಬೈಕನ್ನು ಬಸ್ಸು 300 ಮೀ. ದೂರದವರೆಗೆ ಎಳೆದುಕೊಂಡು ಹೋಗಿದೆ. ಈ ವೇಳೆ ಬೈಕಿನಲ್ಲಿದ್ದ ಪೆಟ್ರೋಲ್ ಕೆಳಕ್ಕೆ ಚೆಲ್ಲಿದೆ. ರಸ್ತೆಯಲ್ಲಿ ಬೈಕನ್ನು ಎಳೆದುಕೊಂಡು ಹೋಗಿದ್ದರಿಂದ ಘರ್ಷಣೆಯಿಂದಾಗಿ ಕಿಡಿ ಹೊತ್ತಿದೆ. ಬೆಂಕಿಯ ಕಿಡಿ ಡೀಸೆಲ್ ಟ್ಯಾಂಕ್ ಮೇಲೆ ಚಿಮ್ಮಿದೆ. ಟ್ಯಾಂಕ್‌ಗೆ ಕಿಡಿ ಚಿಮ್ಮಿದ ಕೂಡಲೇ ಹೊತ್ತಿಕೊಂಡು ಟ್ಯಾಂಕ್ ಸ್ಫೋಟಗೊಂಡಿದೆ. ಸ್ಫೋಟದ ರಭಸಕ್ಕೆ ಡೀಸೆಲ್ ಮೇಲುಗಡೆ ಹಾರಿದ್ದರಿಂದ ಸುಲಭವಾಗಿ ಬೆಂಕಿ ಹರಡಿ ಕ್ಷಣಮಾತ್ರದಲ್ಲಿ ಬಸ್ಸು ಧಗಧಗಿಸಿದೆ ಎಂದು ವರದಿಯಾಗಿದೆ.

ಬೆಂಗಳೂರು ಮತ್ತು ಹೈದರಾಬಾದ್ ಮಧ್ಯೆ 575 ಕಿ.ಮೀ ಅಂತರವಿರುವುದರಿಂದ ಇಬ್ಬರು ಚಾಲಕರು ಬಸ್ಸಿನಲ್ಲಿದ್ದರು. ಸಾಧಾರಣವಾಗಿ ದೀರ್ಘ ಪ್ರಯಾಣಕ್ಕೆ ಇಬ್ಬರು ಚಾಲಕರನ್ನು ನಿಯೋಜಿಸಲಾಗುತ್ತದೆ. ದುರಂತ ನಡೆದ ಬಳಿಕ ಬಸ್ಸು ಚಾಲನೆ ಮಾಡುತ್ತಿದ್ದ ಚಾಲಕ ಪರಾರಿಯಾಗಿದ್ದರೆ ಮತ್ತೊಬ್ಬ ಚಾಲಕನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಸ್ಲೀಪರ್ ಕೋಚ್ ಬಸ್ಸುಗಳ ಮಲಗುವ ಜಾಗಗಳನ್ನು ಮರದ ಪ್ಲೈವುಡ್ ಬಳಸಿ ಸಿದ್ಧಪಡಿಸುತ್ತಾರೆ. ಇದರ ಮೇಲೆ ಕಿರು ಹಾಸಿಗೆ ಇರುತ್ತದೆ. ಮರ, ಹಾಸಿಗೆ ಎರಡೂ ಬೆಂಕಿ ತಗುಲಿದ ಕೂಡಲೇ ಜ್ವಾಲೆ ಮತ್ತಷ್ಟು ಹೆಚ್ಚಾಗಿದೆ.
ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ತಂಡವು ಆಗಮಿಸಿ ತನಿಖೆ ನಡೆಸುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಾಂತ್ ತಿಳಿಸಿದ್ದಾರೆ.
2 ಲಕ್ಷ ರೂ. ಪರಿಹಾರ ಘೋಷಣೆ
ಘಟನೆ ಬಗ್ಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಪ್ರಾಣ ಕಳೆದುಕೊಂಡಿರುವವರ ಕುಟುಂಬಕ್ಕೆ 2 ಲಕ್ಷ ರೂ. ಹಾಗೂ ಗಾಯಗೊಂಡಿರುವವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ. ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ಹಾರೈಸಿದ್ದಾರೆ.






























































