ಕಾರ್ಕಳ : ಬೆಳ್ಮಣ್ ಪೆರಳ್‌ಪಾದೆ ಎಂಬಲ್ಲಿ ಕಾರು ಪಾದಚಾರಿಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ನ. 5ರ ಸಂಜೆ ನಡೆದಿತ್ತು. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಪಾದಚಾರಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯೆಯೇ ಮೃತಪಟ್ಟಿದ್ದಾರೆ.
ಬೆಳ್ಮಣ್ ಗ್ರಾಮದ ಅರಣ್ಯ ಇಲಾಖೆಯ ಕಚೇರಿ ಬಳಿ ಹಾದು ಹೋಗಿರುವ ಕಾರ್ಕಳ-ಪಡುಬಿದ್ರೆ ರಾಜ್ಯ ಹೆದ್ದಾರಿಯಲ್ಲಿ ನಿಟ್ಟೆ ವಿದ್ಯಾಸಂಸ್ಥೆಯ ಐವರು ವಿದ್ಯಾರ್ಥಿಗಳು ಕಾರನ್ನು ಪಡುಬಿದ್ರೆ ಕಡೆಗೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬೆಳ್ಮಣ್ ಸಾಂತೂರು ಕೊಪ್ಪಲ ನಿವಾಸಿ ಸುರೇಶ್ (65) ಅವರಿಗೆ ಹಿಂದಿನಿಂದ ಡಿಕ್ಕಿ ಹೊಡೆದು ನಂತರ ಕಾರನ್ನು ಒಮ್ಮೆಲೆ ರಸ್ತೆಯ ಬಲಬದಿಗೆ ತಿರುಗಿಸಿ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮವಾಗಿ ಕಾರು ಮಗುಚಿ ಬಿದ್ದಿದ್ದು, ಅಪಘಾತದ ರಭಸಕ್ಕೆ ಸುರೇಶ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತಪಟ್ಟಿರುತ್ತಾರೆ. ಕಾರಿನಲ್ಲಿದ್ದ ಐವರು ವಿದ್ಯಾರ್ಥಿಗಳೂ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.




























































