ನ. 28 : ಪ್ರಧಾನಿ ಉಡುಪಿ ಭೇಟಿ – ಸೂಕ್ತ ಸುರಕ್ಷತಾ ಕ್ರಮ ವಹಿಸುವಂತೆ ಡಿಸಿ ಸೂಚನೆ

ಉಡುಪಿ : ಪ್ರಧಾನ ಮಂತ್ರಿಯವರು ನ. 28 ರಂದು ಉಡುಪಿಗೆ ಭೇಟಿ ನೀಡುವ ಸಂದರ್ಭದಲ್ಲಿ ಸರಕಾರದ ನಿಯಮಾನುಸಾರ ಶಿಷ್ಟಾಚಾರ ಪಾಲಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅವರು ನ. 24ರಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಧಾನಿ ಉಡುಪಿ ಭೇಟಿ ಸಂದರ್ಭದಲ್ಲಿ ಜಿಲ್ಲಾಡಳಿತದ ವತಿಯಿಂದ ಸೂಕ್ತ ಶಿಷ್ಟಾಚಾರವನ್ನು ಪಾಲಿಸುವ ಸಲುವಾಗಿ ಆಯೋಜಿಸಲಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನ. 28ರಂದು ಆದಿ ಉಡುಪಿಯ ಹೆಲಿಪ್ಯಾಡ್‌ನಿಂದ ಕರಾವಳಿ ಬೈಪಾಸ್, ಸಿಟಿ ಬಸ್ ನಿಲ್ದಾಣ, ಕಲ್ಸಂಕ ಮಾರ್ಗವಾಗಿ ಶ್ರೀಕೃಷ್ಠನ ಮಠಕ್ಕೆ ಭೇಟಿ ನೀಡಿ, ಲಕ್ಷ ಕಂಠ ಗೀತಾ ಕಾರ್ಯಕ್ರಮ-ಗೀತೋತ್ಸವದಲ್ಲಿ ಭಾಗವಹಿಸಲಿರುವರು. ಭೇಟಿ ಸಂದರ್ಭದಲ್ಲಿ ಭದ್ರತೆಗೆ ಅಗತ್ಯವಿರುವ ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಿಸಿಟಿವಿ ಅಳವಡಿಕೆ
ಭದ್ರತೆಗೆ ಅನುಕೂಲವಾಗುವಂತೆ ಕಾರ್ಯಕ್ರಮ ನಡೆಯುವ ಸ್ಥಳ, ರಸ್ತೆ, ಮತ್ತಿತರ ಕಡೆಗಳಲ್ಲಿ ಸಿ.ಸಿ.ಟಿವಿ ಅಳವಡಿಸಬೇಕು. ಅನಧಿಕೃತ ಬ್ಯಾನರ್, ಬಂಟಿಂಗ್ಸ್‌ ಈ ಕೂಡಲೇ ತೆರವುಗೊಳಿಸಬೇಕು ಎಂದ ಅವರು, ಕಾರ್ಯಕ್ರಮಕ್ಕೆ ಕೇಂದ್ರ ಹಾಗೂ ರಾಜ್ಯ ಸಚಿವರು ಆಗಮಿಸುವ ನಿರೀಕ್ಷೆಯಿದ್ದು, ಅವರ ಸುರಕ್ಷತೆಗೂ ಸಹ ಒತ್ತು ನೀಡಬೇಕು ಎಂದರು.

ಪ್ರಧಾನಮಂತ್ರಿಗಳು ಹೆಲಿಪ್ಯಾಡ್‌ನಿಂದ ಕೃಷ್ಣ ಮಠಕ್ಕೆ ಚಲಿಸುವ ರಸ್ತೆಯ ಎರಡೂ ಬದಿಯಲ್ಲಿ ಬ್ಯಾರಿಕೇಡ್ ಅಳವಡಿಸಿ, ಪೊಲೀಸರನ್ನು ನಿಯೋಜನೆಗೊಳಿಸಬೇಕು. ಕೋಲುಗಳನ್ನೊಳಗೊಂಡತೆ ಬಾವುಟಗಳನ್ನು ಪ್ರದರ್ಶಿಸುವುದನ್ನು ನಿಷೇಧಿಸಲಾಗಿದೆ ಎಂದು ಡಿಸಿ ಹೇಳಿದರು.

ಪ್ರಧಾನಿ ಭೇಟಿ ಸಂದರ್ಭದಲ್ಲಿ ನಿರಂತರ ವಿದ್ಯುಚ್ಛಕ್ತಿ ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ರಸ್ತೆ ಕಾಮಗಾರಿ ಸೇರಿದಂತೆ ಕಾಮಗಾರಿಗಳನ್ನು ಕೈಗೊಳ್ಳಲು ಶೇಖರಿಸಿರುವ ಜಲ್ಲಿ ಸೇರಿದಂತೆ ಮತ್ತಿತರ ವಸ್ತುಗಳನ್ನು ತೆರವುಗೊಳಿಸುವುದರೊಂದಿಗೆ ನಗರವನ್ನು ಶುಚಿತ್ವವಾಗಿರುವಂತೆ ಕ್ರಮ ವಹಿಸಬೇಕು ಎಂದು ಪೌರಾಯುಕ್ತರು ಹಾಗೂ ಮೆಸ್ಕಾಂ ಇಲಾಖೆಯ ಅಧಿಕಾರಿಗಳಿಗೆ ಡಿಸಿ ಸೂಚನೆ ನೀಡಿದರು.

ಕಾರ್ಯಕ್ರಮಕ್ಕೆ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸುವ ಜನರ ವಾಹನಗಳ ಸಂಚಾರ ಮಾರ್ಗ, ಅವುಗಳ ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಮತ್ತಿತರ ಮೂಲ ಸೌಕರ್ಯಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು ಎಂದ ಅವರು, ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಅಗ್ನಿಶಾಮಕ ವಾಹನವನ್ನು ನಿಯೋಜಿಸಬೇಕು ಎಂದರು. ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗುವ ರೀತಿಯಲ್ಲಿ ರಸ್ತೆ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಆದ್ಯತೆಯ ಮೇಲೆ ಕೈಗೊಳ್ಳಬೇಕು. ಸುಸಜ್ಜಿತ ಪಾರ್ಕಿಂಗ್ ವ್ಯವಸ್ಥೆ ಜೊತೆಗೆ ಪ್ರಯಾಣಿಕರಿಗೆ ಬದಲಿ ಮಾರ್ಗ ಅನುಸರಿಸುವ ಬಗ್ಗೆ ಹಾಗೂ ಜನ ದಟ್ಟಣೆ ನಿಯಂತ್ರಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಪ್ರಧಾನಿ ಭೇಟಿ ಸಂದರ್ಭದಲ್ಲಿ ಜಿಲ್ಲಾಡಳಿತದೊಂದಿಗೆ ಇತರೆ ಇಲಾಖೆಗಳು ಸಮನ್ವಯದಿಂದ ಪೂರ್ಣ ಪ್ರಮಾಣದಲ್ಲಿ ಸಹಕಾರ ನೀಡಬೇಕು ಎಂದರು. ತುಳುನಾಡು ಜಾನಪದ ಕಲೆ, ಹುಲಿ ವೇಷ ಕುಣಿತ, ಯಕ್ಷಗಾನ, ಡೊಳ್ಳು ಕುಣಿತ ಸೇರಿದಂತೆ ಸಂಪ್ರದಾಯ ವಾದ್ಯಗಳ ಪ್ರದರ್ಶನ ನಡೆಯಲಿದೆ ಎಂದರು.
ಸಭೆಯಲ್ಲಿ ಶಾಸಕರಾದ ಯಶ್‌ಪಾಲ್ ಎ. ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್. ಕಾದ್ರೋಳ್ಳಿ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.



































































































error: Content is protected !!
Scroll to Top