ಗೋವಾ ನೈಟ್‌ ಕ್ಲಬ್‌ನಲ್ಲಿ ಅಗ್ನಿ ದುರಂತ – 25 ಪ್ರವಾಸಿಗರು ಸಜೀವ ದಹನ

ಪಣಜಿ : ಉತ್ತರ ಗೋವಾದ ಅರ್ಪೋರಾದ ರೋಮಿಯೋ ಲೇನ್‌ನಲ್ಲಿರುವ ಫೇಮಸ್‌ ನೈಟ್‌ ಕ್ಲಬ್‌ನಲ್ಲಿ ತಡರಾತ್ರಿ ಅಗ್ನಿ ದುರಂತ ಸಂಭವಿಸಿದ್ದು, 25 ಪ್ರವಾಸಿಗರು ದಾರುಣ ಸಾವಿಗೀಡಾಗಿದ್ದಾರೆ. ಸುಮಾರು 50 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನ ಗೋವಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ, 3-4 ಮಂದಿ ಮಾತ್ರ ಪ್ರವಾಸಿಗರಾಗಿದ್ದರು ಉಳಿದವರು ಕ್ಲಬ್‌ನ ಸಿಬ್ಬಂದಿಯೇ ಆಗಿದ್ದಾರೆ ಎನ್ನಲಾಗಿದೆ.

ಘಟನೆ ಕುರಿತು ಮಾಹಿತಿ ನೀಡಿರುವ ಪೊಲೀಸರು, ತಡರಾತ್ರಿ 1 ಗಂಟೆ ಸುಮಾರಿಗೆ ಕ್ಲಬ್‌ ಮುಚ್ಚಲು ಎಲ್ಲಾ ಸಿದ್ಧತೆ ಮಾಡಿಕೊಳ್ಳುತ್ತಿದ್ದರು ಅಷ್ಟರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಅಡುಗೆ ಮನೆಯ ಬಳಿ ಗ್ಯಾಸ್‌ ಸಿಲಿಂಡರ್‌ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿದ್ದೆ ಅನ್ನೋ ಶಂಕೆಯಿದೆ. ಸ್ಫೋಟದ ತೀವ್ರತೆಗೆ ಕೆಲವೇ ಸೆಕೆಂಡುಗಳಲ್ಲಿ ಇಡೀ ಕಟ್ಟಡಕ್ಕೆ ಬೆಂಕಿ ಕೆನ್ನಾಲಿಗೆ ಚಾಚಿಕೊಂಡಿದೆ. ಕ್ಲಬ್‌ನ ಒಳಗಿದ್ದವರಿಗೆ ತಪ್ಪಿಸಿಕೊಳ್ಳಲು ಸಮಯಾವಕಾಶವಿತ್ತು. ಆದಾಗ್ಯೂ ದುರಂತ ಸಂಭವಿಸಿದೆ. ಮೇಲ್ನೋಟಕ್ಕೆ ಸಿಲಿಂಡರ್‌ ಸ್ಫೋಟಗೊಂಡಿರುವ ಶಂಕೆ ವ್ಯಕ್ತವಾಗಿದೆ. ಆದ್ರೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕು ಎಂದು ತಿಳಿಸಿದ್ದಾರೆ. ಸದ್ಯ ಶವಗಳನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಗಾಯಾಳುಗಳ ವಿವರ ಕಲೆಹಾಕುತ್ತಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

2 ಲಕ್ಷ ರೂ. ಪರಿಹಾರ ಘೋಷಣೆ
ಪ್ರಧಾನಿ ಮೋದಿ ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

ಈ ಕುರಿತು PMO ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಉತ್ತರ ಗೋವಾದ ಅರ್ಪೋರಾದ ರೋಮಿಯೋ ಲೇನ್‌ನಲ್ಲಿರುವ ಫೇಮಸ್ ನೈಟ್ ಕ್ಲಬ್‌ನಲ್ಲಿ ತಡರಾತ್ರಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ 2 ಲಕ್ಷ ರೂ. ಹಾಗೂ ಗಾಯಳುಗಳಿಗೆ 50 ಸಾವಿರ ರೂ. ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಪರಿಸ್ಥಿತಿಯ ಬಗ್ಗೆ ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಜಿ ಅವರೊಂದಿಗೆ ಮಾತನಾಡಿದ್ದೇನೆ. ರಾಜ್ಯ ಸರ್ಕಾರವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯ ನೀಡುತ್ತಿದೆ ಎಂದು ಬರೆದುಕೊಂಡಿದ್ದಾರೆ





























































































































error: Content is protected !!
Scroll to Top