ಚಿತ್ರದುರ್ಗದಲ್ಲಿ ಬಸ್‌ಗೆ ಬೆಂಕಿ – 9 ಮಂದಿ ಬಲಿ

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಜವನಗೊಂಡನಹಳ್ಳಿ ಬಳಿ ಗುರುವಾರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತಕ್ಕೆ 9 ಮಂದಿ ಬಲಿಯಾಗಿದ್ದಾರೆ.

ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ‘ಸೀ ಬರ್ಡ್’ ಟ್ರಾವೆಲ್ಸ್‌ಗೆ ಸೇರಿದ ಖಾಸಗಿ ಸ್ಲೀಪರ್ ಕೋಚ್ ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ, ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಈ ದುರ್ಘಟನೆಯಲ್ಲಿ 9 ಮಂದಿ ಸಜೀವ ದಹನವಾಗಿದ್ದು, ಹಲವರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ಪೂರ್ವ ವಲಯದ ಐಜಿಪಿ ರವಿಕಾಂತೇಗೌಡ ಅವರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ನೀಡಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಬಸ್ (KA 01 AE 5217) ಸುಗಮವಾಗಿ ಸಂಚರಿಸುತ್ತಿತ್ತು. ಆದರೆ ಎದುರಿನಿಂದ ಬರುತ್ತಿದ್ದ ಕಂಟೇನರ್ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಡಿವೈಡರ್ ದಾಟಿ ಬಂದು ಬಸ್ಸಿನ ಡೀಸೆಲ್ ಟ್ಯಾಂಕ್‌ಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೆಂಕಿ ಕಿಡಿ ಉಂಟಾಗಿ ಕ್ಷಣಾರ್ಧದಲ್ಲಿ ಇಡೀ ಬಸ್ ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಿದೆ’ ಎಂದು ವಿವರಿಸಿದ್ದಾರೆ.

ಸದ್ಯದ ಮಾಹಿತಿ ಪ್ರಕಾರ ಲಾರಿ ಚಾಲಕ ಸೇರಿದಂತೆ ಒಟ್ಟು 9 ಮಂದಿ ಸಾವನ್ನಪ್ಪಿದ್ದಾರೆ. ಬೆಂಕಿಯ ತೀವ್ರತೆ ಎಷ್ಟಿತ್ತೆಂದರೆ ಮೃತ ದೇಹಗಳು ಗುರುತು ಹಿಡಿಯಲಾರದಷ್ಟು ಸುಟ್ಟು ಕರಕಲಾಗಿವೆ. ಬಸ್ಸಿನಿಂದ ಎಂಟು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಮೃತರ ಗುರುತು ಪತ್ತೆ ಹಚ್ಚುವುದು ಕಷ್ಟವಾಗಿರುವುದರಿಂದ ಬೆಂಗಳೂರಿನಿಂದ ವಿಧಿವಿಜ್ಞಾನ ಮತ್ತು ಡಿಎನ್‌ಎ (DNA) ತಂಡಗಳನ್ನು ಕರೆಸಲಾಗಿದೆ’ ಎಂದು ಐಜಿಪಿ ತಿಳಿಸಿದ್ದಾರೆ.

ಬಸ್ಸಿನಲ್ಲಿ ಬೆಂಗಳೂರಿನ ಮಾವಳ್ಳಿ ಭಾಗದ 7 ಮಂದಿ ಗೆಳೆಯರು ಗೋಕರ್ಣಕ್ಕೆ ಪ್ರವಾಸಕ್ಕೆ ಹೊರಟಿದ್ದರು. ದುರದೃಷ್ಟವಶಾತ್, ಈ ತಂಡದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 24 ವರ್ಷದ ಮಂಜುನಾಥ್ ಎಂಬುವವರು ಶೇ. 23ರಷ್ಟು ಸುಟ್ಟ ಗಾಯಗಳೊಂದಿಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಬರ್ನ್ ವಾರ್ಡ್‌ನಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅವರ ಹೊಟ್ಟೆಯ ಕೆಳಭಾಗ ಸಂಪೂರ್ಣ ಸುಟ್ಟು ಹೋಗಿದೆ ಎಂದು ಕುಟುಂಬಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.















































































































































































error: Content is protected !!
Scroll to Top