ಬೆಂಗಳೂರು : ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ. ಮತ್ತೊಂದೆಡೆ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ವಂತ ಬಲದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.
ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ದೇವೇಗೌಡ, ನಾವು ಲೋಕಸಭೆ, ವಿಧಾನಸಭೆ ಮತ್ತು ಪರಿಷತ್ತಿನ ಚುನಾವಣೆಗಳಲ್ಲಿ ಬಿಜೆಪಿ ಮೈತ್ರಿಯೊಂದಿಗೆ ಸ್ಪರ್ಧಿಸಲಿದ್ದೇವೆ. ಬಿಜೆಪಿ ರಾಜ್ಯಾಧ್ಯಕ್ಷರು ಹೇಳಿರುವ ವಿಚಾರದ ಬಗ್ಗೆ ನಾನು ಯಾವುದೇ ಪ್ರಶ್ನೆಗಳನ್ನು ಎತ್ತುವುದಿಲ್ಲ. ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿಯೂ ಜೆಡಿಎಸ್ ಸ್ವಂತ ಬಲದ ಮೇಲೆ ಸ್ಪರ್ಧಿಸಲಿದೆ ಎಂದು ಹೇಳಿದ್ದಾರೆ.
4 ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಅಧಿಕಾರ ಹಿಡಿದ ಕೂಡಲೇ ಬಿಜೆಪಿ ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯುವ ಲೆಕ್ಕಾಚಾರಕ್ಕೆ ಇಳಿದಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ವಂತ ಬಲದ ಮೇಲೆ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಈ ಬೆಳವಣಿಗೆಗಳು, ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಲ್ಲಿ ಗೊಂದಲ, ಬಿರುಕು ಹೆಚ್ಚಾಗುತ್ತಿದೆಯಾ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿಯೂ ಮೈತ್ರಿಯಾಗಿ ವಿಪಕ್ಷಗಳು ಕ್ರಾಂತಿ ಮಾಡಿಲ್ಲ. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸ್ವಂತ ಬಲದ ಬಗ್ಗೆ ಮಾತನಾಡಿದ್ದಾರೆ. ಜೆಡಿಎಸ್ ಸಹ ಸ್ವಂತ ಬಲದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಎದುರಿಸುವ ಘೋಷಣೆ ಮಾಡಿದೆ. ಇದು ಮುಂದೆ ಯಾವ ಮಟ್ಟಕ್ಕೆ ತಲುಪಲಿದೆ ಎಂಬುದನ್ನು ಕಾದುನೋಡಬೇಕಿದೆ























































































