ದಾಖಲಾತಿ ಆಂದೋಲನ ಕೈಗೊಳ್ಳುವಂತೆ ಎಸ್‌ಡಿಎಂಸಿ ಸದಸ್ಯರಲ್ಲಿ ಶಿಕ್ಷಣ ಸಚಿವರ ಮನವಿ

ಬೆಂಗಳೂರು : ಸರಕಾರಿ ಶಾಲೆಗಳ ದಾಖಲಾತಿ ವೃದ್ಧಿಸುವ ನಿಟ್ಟಿನಲ್ಲಿ ಆಂದೋಲನ ಕೈಗೊಳ್ಳುವಂತೆ ಶಿಕ್ಷಣ ಸಚಿವ ಎಸ್. ಮಧು‌ ಬಂಗಾರಪ್ಪ ಅವರು ಎಸ್‌ಡಿಎಂಸಿ ಸದಸ್ಯರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಶೈಕ್ಷಣಿಕ ಪ್ರಗತಿಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಸರಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಭವಿಷ್ಯ ಉಜ್ವಲಗೊಳಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದವರು ಮನವಿಯಲ್ಲಿ ತಿಳಿಸಿದ್ದಾರೆ.

ಸುಧಾರಣಾ ಕ್ರಮಗಳು
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾಜ್ಯ ಸರಕಾರವು ಹಲವಾರು ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಿದೆ. ಪ್ರಮುಖವಾಗಿ ಮೂಲಭೂತ ಸೌಕರ್ಯಗಳ ವಿಸ್ತರಣೆ, ಶಿಕ್ಷಕರ ಮತ್ತು ಅತಿಥಿ ಶಿಕ್ಷಕರ ನೇಮಕಾತಿ, ಪರೀಕ್ಷಾ ಪದ್ಧತಿಯಲ್ಲಿ ಸುಧಾರಣೆ, ಪೂರ್ವ ಪ್ರಾಥಮಿಕ ತರಗತಿಗಳ ಪ್ರಾರಂಭ, ದ್ವಿಭಾಷಾ ಮಾಧ್ಯಮದ ಅನುಷ್ಠಾನ, ಕರ್ನಾಟಕ ಪಬ್ಲಿಕ್ ಶಾಲೆಗಳ ಪ್ರಾರಂಭ, ಉಚಿತ NEET & CET ತರಬೇತಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದೆ. ಸರಕಾರದ ಇಂತಹ ಹತ್ತು ಹಲವಾರು ಕಾರ್ಯಕ್ರಮಗಳಿಂದ ಸರಕಾರಿ ಶಾಲೆಗಳ ಕುರಿತು ಪೋಷಕರ ಅಭಿಪ್ರಾಯ ಬದಲಾಗುತ್ತಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಇನ್ನು ಹೆಚ್ಚಿನ ಸುಧಾರಣೆಗಳನ್ನು ತರಲು ಪ್ರೇರೇಪಣೆಯಾಗಿದೆ ಎಂದವರು ತಿಳಿಸಿದ್ದಾರೆ.

ನಮ್ಮ ಶಾಲೆ ನಮ್ಮ ಜವಾಬ್ದಾರಿ
ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದ ಮೂಲಕ ಶಾಲೆಗಳಲ್ಲಿ ಹಳೆಯ ವಿದ್ಯಾರ್ಥಿಗಳ ವಾಟ್ಸಾಪ್‌ (Whatsapp) ಗ್ರೂಪ್‌ಗಳನ್ನು ರಚಿಸಿ, ಅವರನ್ನು ಶಾಲಾಭಿವೃದ್ಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮನವಿ ಮಾಡಿಕೊಳ್ಳಲಾಗಿತ್ತು. ಸರಕಾರಿ ಶಾಲೆ, ಕಾಲೇಜುಗಳಲ್ಲಿ ದಾಖಲಾತಿಯನ್ನು ಹೆಚ್ಚಿಸಿ, ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಮಹಾ ಪೋಷಕರ ಸಭೆಯನ್ನು ಏರ್ಪಡಿಸಿದಾಗ ಉತ್ತಮ ಸ್ಪಂದನೆ ದೊರೆಕಿತ್ತು ಎಂದ ಸಚಿವರು ಸರಕಾರಿ ಶಾಲೆಗಳಿಗೆ ಅತ್ಯಂತ ಪ್ರತಿಭಾನ್ವಿತ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದರು.

2026-27ನೇ ಶೈಕ್ಷಣಿಕ ಸಾಲಿಗೆ ಈಗಿನಿಂದಲೇ ದಾಖಲಾತಿ ಆಂದೋಲನ ಕಾರ್ಯಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ, ಇಲಾಖೆಯ ಅಧಿಕಾರಿಗಳಿಗೆ ಹಾಗೂ ಶಿಕ್ಷಕರಿಗೆ ಕೋರಲಾಗಿದೆ. ಎಸ್‌ಡಿಎಂಸಿ ಸದಸ್ಯರೂ ಶಿಕ್ಷಕರ ಮತ್ತು ಹಳೆ ವಿದ್ಯಾರ್ಥಿಗಳ ಸಹಕಾರದೊಂದಿಗೆ ತಮ್ಮ ಗ್ರಾಮಗಳಲ್ಲಿನ ಮನೆ ಮನೆಗೆ ಭೇಟಿ ನೀಡಿ ಮಕ್ಕಳನ್ನು ಸರಕಾರಿ ಶಾಲೆಗಳಿಗೆ ದಾಖಲಿಸುವ ನಿಟ್ಟಿನಲ್ಲಿ ದಾಖಲಾತಿ ಆಂದೋಲನವನ್ನು ಕೈಗೊಳ್ಳಲು ಈ ಮೂಲಕ ತಮ್ಮಲ್ಲಿ ಮನವಿ ಮಾಡಿಕೊಳ್ಳುವುದಾಗಿ ಸಚಿವರು ತಿಳಿಸಿದರು.

































































































error: Content is protected !!
Scroll to Top