ಉಡುಪಿ : ಪ್ರಸ್ತುತ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೀಟ್ ವೇವ್ (ಶಾಖದ ಹೊಡೆತ) ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿದೆ. ಹೀಗಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಕೆಲವೊಂದು ಸಲಹೆ ಪಾಲಿಸುವಂತೆ ತಿಳಿಸಿದೆ.
ಅತಿ ಹೆಚ್ಚು ತಾಪಮಾನದಿಂದಾಗುವ ಅನಾರೋಗ್ಯವನ್ನು ತಡೆಗಟ್ಟಲು ಸಾರ್ವಜನಿಕರು ಸಾಧ್ಯವಾದಷ್ಟು ಗರಿಷ್ಠ ತಾಪಮಾನದ ಅವಧಿಯಾದ ಮಧ್ಯಾಹ್ನ 12 ರಿಂದ 3ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಬೇಕು. ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಬೇಕು. ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ಹತ್ತಿ ಬಟ್ಟೆಗಳನ್ನು ಧರಿಸಬೇಕು. ಬಿಸಿಲಿನಲ್ಲಿ ಹೋಗುವಾಗ ರಕ್ಷಣೆಗಾಗಿ ಕನ್ನಡಕ, ಛತ್ರಿ/ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸಬೇಕು ಎಂದು ತಿಳಿಸಿದೆ.
ಹೊರಗಿನ ಉಷ್ಣತೆಯು ಹೆಚ್ಚಿರುವಾಗ ಅಂದರೆ ಮಧ್ಯಾಹ್ನ 12 ರಿಂದ 3ರವರೆಗೆ ಶ್ರಮದಾಯಕ ಚಟುವಟಿಕೆಗಳನ್ನು ಆದಷ್ಟು ತಪ್ಪಿಸಬೇಕು. ಅಪರಾಹ್ನ 11 ಗಂಟೆಯಿಂದ ಸಂಜೆ 4 ಗಂಟೆಯ ಅವಧಿಯಲ್ಲಿ ಹೊರಾಂಗಣ ಸಭೆಗಳು, ಚಟುವಟಿಕೆಗಳು ನಡೆಯುವ ಪ್ರದೇಶದಲ್ಲಿ ಸಾರ್ವಜನಿಕರಿಗೆ ಬಿಸಿಲಿನಿಂದ ರಕ್ಷಣೆಯನ್ನು ನೀಡಲು ಅಗತ್ಯ ಶಾಮಿಯಾನ/ಪೆಂಡಾಲ್ ವ್ಯವಸ್ಥೆ ಮಾಡಬೇಕು. ಉತ್ತಮ ಗಾಳಿಯಾಡುವ ವ್ಯವಸ್ಥೆ ಹಾಗೂ ಸಭಿಕರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಬೇಕು. ಪ್ರಯಾಣಿಸುವಾಗ ನೀರನ್ನು ಜೊತೆಯಲ್ಲಿ ಕೊಂಡೊಯ್ಯಬೇಕು. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕರ್ಬೋನೇಟೆಡ್ ತಂಪು ಪಾನೀಯಗಳನ್ನು ಸೇವಿಸಬಾರದು. ಸಾಧ್ಯವಾದಷ್ಟು ಬಿಸಿ ಆಹಾರವನ್ನು ಸೇವಿಸಬೇಕು. ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡಬಾರದು. ಅನಾರೋಗ್ಯ ಅನಿಸಿದ್ದಲ್ಲಿ ತಕ್ಷಣ ವೈದ್ಯರನ್ನು ಭೇಟಿ ಮಾಡಿ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಿದೆ.
ನಿಂಬೆ ನೀರು, ಮಜ್ಜಿಗೆ ಮುಂತಾದ ಮನೆಯಲ್ಲಿ ತಯಾರಿಸಿದ ಪಾನೀಯಗಳು ಮತ್ತು ಓ.ಆರ್.ಎಸ್ ಅನ್ನು ಬಳಸಬೇಕು. ಋತುಮಾನದಲ್ಲಿ ಲಭ್ಯವಿರುವ ಹಾಗೂ ಹೆಚ್ಚಿನ ನೀರಿನ ಅಂಶವನ್ನು ಹೊಂದಿರುವ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್ ಹಣ್ಣುಗಳನ್ನು, ತರಕಾರಿ, ಸೊಪ್ಪು, ಎಳನೀರುಗಳನ್ನು ಹೆಚ್ಚಾಗಿ ಸೇವಿಸಬೇಕು. ಸಾಕು ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ, ಅವುಗಳಿಗೆ ಕುಡಿಯಲು ಸಾಕಷ್ಟು ನೀರು ಒದಗಿಸಬೇಕು. ಮನೆಯನ್ನು ತಂಪಾಗಿರಿಸಲು ಪರದೆ, ಶಟರ್ ಅಥವಾ ಸನ್ಶೇಡ್ಗಳನ್ನು ಬಳಸಬೇಕು ಎಂದು ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.
ಶಾಖದ ಹೊಡೆತದಿಂದ ಆರೋಗ್ಯ ಕಾಪಾಡಿಕೊಳ್ಳುವಂತೆ ಸಲಹೆ ನೀಡಿದ ವಿಪತ್ತು ನಿರ್ವಹಣಾ ಪ್ರಾಧಿಕಾರ






























































