ಎ. 23, 24 : ಸಿಇಟಿ ಪರೀಕ್ಷೆ – ಜಿಲ್ಲೆಯಲ್ಲಿ 8746 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

ಉಡುಪಿ : ಎಪ್ರಿಲ್ 23 ಮತ್ತು 24ರಂದು ಜಿಲ್ಲೆಯಲ್ಲಿ ನಡೆಯಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ವಿದ್ಯಾರ್ಥಿ ಸ್ನೇಹಿಯಾಗಿ ಸುವ್ಯವಸ್ಥಿತವಾಗಿ ನಡೆಸಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅವರು ಎ. 21ರಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 2026ನೇ ನಾಲಿನ ಸಿಇಟಿ ಪರೀಕ್ಷೆ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ -2 ರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗಾಗಿ ಎ. 23 ಮತ್ತು 24 ರಂದು ಜಿಲ್ಲೆಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಯು ನಡೆಯಲಿದ್ದು, ಪ್ರವೇಶಾತಿ ಪಡೆದ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಪರೀಕ್ಷೆಯಲ್ಲಿ ಹಾಜರಾಗಿ ಗೊಂದಲವಿಲ್ಲದ ರೀತಿಯಲ್ಲಿ ಪರೀಕ್ಷೆಯನ್ನು ಎದುರಿಸಲು ವಿದ್ಯಾರ್ಥಿಗಳಿಗೆ ಅನುವು ಮಾಡಿಕೊಡುವುದರೊಂದಿಗೆ ಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡಬೇಕು ಎಂದರು.

ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕಿನ 23 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 8746 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದಕ್ಕಾಗಿ ಉಡುಪಿಯಲ್ಲಿ 11, ಕಾರ್ಕಳ 5 ಹಾಗೂ ಕುಂದಾಪುರದಲ್ಲಿ 7 ಸೇರಿದಂತೆ ಒಟ್ಟು 23 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ ಎಂದರು.
ಪರೀಕ್ಷೆ ಆರಂಭವಾಗುವ ಎರಡೂವರೆ ಗಂಟೆ ಮೊದಲೇ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ವಿದ್ಯಾರ್ಥಿಗಳ ಪರಿಶೋಧನೆ ಕಾರ್ಯವನ್ನು ಗೊಂದಲಗಳಿಗೆ ಅವಕಾಶವಿಲ್ಲದಂತೆ ನಡೆಸಿ, ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗಳಿಗೆ ತೆರಳಲು ಅನುವು ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.

ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಓ.ಆರ್.ಎಸ್ ಪ್ಯಾಕೇಟ್ ಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ದಾಸ್ತಾನು ಇಟ್ಟುಕೊಳ್ಳುವಂತೆಯೂ ಡಿಸಿ ತಿಳಿಸಿದರು. ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲಿ ಗಡಿಯಾರದ ವ್ಯವಸ್ಥೆಯನ್ನು ಮಾಡಬೇಕು. ಬೇಸಿಗೆ ಕಾಲದ ಹಿನ್ನೆಲೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದ ಡಿಸಿಯವರು ಪರೀಕ್ಷಾ ದಿನದಂದು ಹಾಗೂ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತಯಾರಾಗಲು ಅನುಕೂಲವಾಗುವಂತೆ ವಿದ್ಯುತ್ ಸಂಪರ್ಕ ವ್ಯತ್ಯಯವಾಗದಂತೆ ಎಚ್ಚರವಹಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾವನ್ನು ಕಡ್ಡಾಯವಾಗಿ ಅಳವಡಿಸಬೇಕು. ವೆಬ್‌ಕಾಸ್ಟಿಂಗ್ ಸಹ ನಡೆಯಲಿದೆ ಎಂದ ಡಿಸಿಯವರು, ಸಿಇಟಿ ಪರೀಕ್ಷೆ ಕುರಿತ ಪ್ರಶ್ನೆಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳನ್ನು ಖಜಾನೆಯಲ್ಲಿ ಸೂಕ್ತ ಪೊಲೀಸ್ ಭದ್ರತೆಯಲ್ಲಿಡುವಂತೆ, ಖಜಾನೆಗಳಲ್ಲಿ ಸಿಸಿಟಿವಿ ವ್ಯವಸ್ಥೆ ಅಳವಡಿಸುವಂತೆ ಸೂಚಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಎ.ಎಸ್.ಪಿ ಸುಧಾಕರ್ ನಾಯಕ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಉದಯ್ ಕುಮಾರ್ ಶೆಟ್ಟಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಾರುತಿ, ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲೆಯ ವಿವಿಧ ಕಾಲೇಜು ಪ್ರಾಂಶುಪಾಲರು, ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.





























































































error: Content is protected !!
Scroll to Top