ಮಂಗಳೂರು: ಕರಾವಳಿ ಮತ್ತು ಮಲೆನಾಡು ಭಾಗದ ಜನರ ದಶಕಗಳ ಬೇಡಿಕೆಯಾದ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವಂತೆ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಮಂಗಳೂರು ವಕೀಲರ ಸಂಘ ಹಾಗೂ ಈ ಭಾಗದ ಜನಪ್ರತಿನಿಧಿಗಳು ಈ ಬಗ್ಗೆ ನಿರಂತರವಾಗಿ ನಡೆಸುತ್ತಿರುವ ಹೋರಾಟಕ್ಕೆ ಸ್ಪೀಕರ್ ಬೆಂಬಲ ಸೂಚಿಸಿದ್ದು, ನ್ಯಾಯದಾನ ಪ್ರಕ್ರಿಯೆಯನ್ನು ಜನಸಾಮಾನ್ಯರ ಹೊಸ್ತಿಲಿಗೆ ತಲುಪಿಸುವ ನಿಟ್ಟಿನಲ್ಲಿ ಈ ಕ್ರಮ ಅನಿವಾರ್ಯ ಎಂದು ಅವರು ಪ್ರತಿಪಾದಿಸಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳ ವ್ಯಾಪ್ತಿಗೆ ಅನುಕೂಲವಾಗುವಂತೆ ಮಂಗಳೂರಿನಲ್ಲಿ ಪೀಠ ಸ್ಥಾಪಿಸುವುದು ಅಗತ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಈ ಜಿಲ್ಲೆಗಳು ಶಿಕ್ಷಣ, ಆರೋಗ್ಯ, ಬ್ಯಾಂಕಿಂಗ್ ಮತ್ತು ಕೈಗಾರಿಕಾ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದ್ದು, ಸಹಜವಾಗಿಯೇ ಕಾನೂನು ಪ್ರಕ್ರಿಯೆಗಳ ಸಂಖ್ಯೆಯೂ ಹೆಚ್ಚಿದೆ. ಪ್ರಸ್ತುತ ಈ ಭಾಗದ ಜನರು ಸಣ್ಣಪುಟ್ಟ ಪ್ರಕರಣಗಳಿಗೂ ನೂರಾರು ಕಿಲೋಮೀಟರ್ ದೂರದ ಬೆಂಗಳೂರಿಗೆ ಅಲೆಯಬೇಕಾದ ಅನಿವಾರ್ಯತೆ ಇದೆ. ಇದು ಕೇವಲ ಸಮಯದ ವ್ಯಯವಷ್ಟೇ ಅಲ್ಲದೆ, ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆಯನ್ನೂ ಹೊರಿಸುತ್ತಿದೆ ಎಂದು ಖಾದರ್ ಆತಂಕ ವ್ಯಕ್ತಪಡಿಸಿದ್ದಾರೆ.
ಭೌಗೋಳಿಕ ದೃಷ್ಟಿಯಿಂದಲೂ ಮಂಗಳೂರು ಈ ಐದು ಜಿಲ್ಲೆಗಳಿಗೆ ಕೇಂದ್ರಬಿಂದುವಾಗಿದ್ದು, ಇಲ್ಲಿ ಮೂಲಸೌಕರ್ಯಗಳ ಲಭ್ಯತೆಯೂ ಇದೆ. ಧಾರವಾಡ ಮತ್ತು ಕಲಬುರಗಿಯಲ್ಲಿ ಈಗಾಗಲೇ ಹೈಕೋರ್ಟ್ ಪೀಠಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಅದೇ ಮಾದರಿಯಲ್ಲಿ ಮಂಗಳೂರಿನಲ್ಲೂ ಪೀಠ ಸ್ಥಾಪನೆಯಾದಲ್ಲಿ ಕರಾವಳಿ ಮತ್ತು ಮಲೆನಾಡು ಭಾಗದ ಕಕ್ಷಿದಾರರಿಗೆ ಹಾಗೂ ವಕೀಲರಿಗೆ ಹೆಚ್ಚಿನ ಅನುಕೂಲವಾಗಲಿದೆ. ಆದ್ದರಿಂದ ನ್ಯಾಯಾಂಗದ ವಿಕೇಂದ್ರೀಕರಣದ ದೃಷ್ಟಿಯಿಂದ ಮುಖ್ಯ ನ್ಯಾಯಮೂರ್ತಿಗಳು ಈ ಪ್ರಸ್ತಾವನೆಯನ್ನು ಗಂಭೀರವಾಗಿ ಪರಿಗಣಿಸಿ ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಸ್ಪೀಕರ್ ಪತ್ರದ ಮೂಲಕ ಕೋರಿದ್ದಾರೆ.
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಸ್ಪೀಕರ್ ಯು.ಟಿ. ಖಾದರ್ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಪತ್ರ















































