ಪಡುಬಿದ್ರಿ ಮಾರ್ಗವಾಗಿ ಪ್ರಯಾಣ – ಬಿಗಿ ಪೊಲೀಸ್ ಬಂದೋಬಸ್ತ್
ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಹಾಗೂ ಖ್ಯಾತ ನಟ ವಿಜಯ್ ಅವರು ಶುಕ್ರವಾರ ಮಧ್ಯಾಹ್ನ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ದೆಹಲಿಯಿಂದ ಮಂಗಳೂರಿಗೆ ಬಂದಿಳಿದ ವಿಜಯ್ ಅವರನ್ನು ಅಧಿಕಾರಿಗಳು ಹಾಗೂ ಭದ್ರತಾ ಸಿಬ್ಬಂದಿ ಸ್ವಾಗತಿಸಿದರು.
ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಕರ್ನಾಟಕಕ್ಕೆ ಇದೇ ಮೊದಲ ಅಧಿಕೃತ ಭೇಟಿ ನೀಡಿರುವ ವಿಜಯ್, ಮಂಗಳೂರಿನಿಂದ ಪಡುಬಿದಿರೆ ರಸ್ತೆ ಮಾರ್ಗವಾಗಿ ಉಡುಪಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಸ್ಥಾನಕ್ಕೆ ತೆರಳಿದರು. ವಿಜಯ್ ಅವರ ಭೇಟಿ ಹಿನ್ನೆಲೆಯಲ್ಲಿ ಮಂಗಳೂರು ವಿಮಾನ ನಿಲ್ದಾಣದಿಂದ ಕೊಲ್ಲೂರುವರೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನ – ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಖಂಡಿಸಿ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲು ಮುಂದಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಬಲಾಯಿಪಾದೆಯಲ್ಲಿ ಕರವೇ ಉಡುಪಿ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನಕ್ಕೆ ಸಿದ್ಧತೆ ನಡೆಸಿದ್ದರು. ಆದರೆ ಮುಖ್ಯಮಂತ್ರಿ ವಿಜಯ್ ಅವರ ವಾಹನ ಸಂಚಾರಕ್ಕೂ ಮುನ್ನವೇ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದು ಪ್ರತಿಭಟನೆಗೆ ಅವಕಾಶ ನೀಡಲಿಲ್ಲ.



































