ಉಡುಪಿ : 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ನೀಡುವ ಉದ್ದೇಶದಿಂದ ಜೂ.28 ರಂದು ರಾಷ್ಟ್ರೀಯ ಲಸಿಕಾ ದಿನ (ಪಲ್ಸ್ ಪೋಲಿಯೋ) ಅಭಿಯಾನ ನಡೆಯಲಿದೆ.
ಭಾರತವು ಕಳೆದ 14 ವರ್ಷಗಳಿಗೂ ಮೇಲ್ಪಟ್ಟು ಪೋಲಿಯೊ ಮುಕ್ತ ರಾಷ್ಟ್ರವಾಗಿದ್ದರೂ, ಜಗತ್ತಿನ ಕೆಲವು ಭಾಗಗಳಲ್ಲಿ ಹಾಗೂ ಭಾರತದ ನೆರೆ ರಾಷ್ಟ್ರಗಳಲ್ಲಿ ವೈಲ್ಡ್ ಪೋಲಿಯೋ ವೈರಸ್ ಹರಡುವಿಕೆ ಇನ್ನೂ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಅಭಿಯಾನವನ್ನು ನಡೆಸಲಾಗುತ್ತಿದೆ. ಮೊದಲು ಜೂ. 28 ರಂದು ಪೋಲಿಯೋ ಬೂತ್‌ಗಳಲ್ಲಿ ಲಸಿಕೆ ನೀಡಲಾಗುವುದು. ನಂತರ 2-3 ದಿನಗಳಲ್ಲಿ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಲಸಿಕೆ ವಂಚಿತ ಮಕ್ಕಳಿಗೆ ಲಸಿಕೆ ಹಾಕಲಿದ್ದಾರೆ. ವಲಸಿಗ ಸಮುದಾಯದ ಮಕ್ಕಳು, ಹೆಚ್ಚು ಅಪಾಯದಂಚಿನಲ್ಲಿರುವ ಪ್ರದೇಶಗಳು ಹಾಗೂ ನಗರ ಪ್ರದೇಶದ ಕೊಳಗೇರಿ ಪ್ರದೇಶಗಳಲ್ಲಿ ವಾಸಿಸುವ ಮಕ್ಕಳಿಗೆ ವಿಶೇಷ ಆದ್ಯತೆ ನೀಡಲಾಗುತ್ತದೆ.
ಜಿಲ್ಲೆಯ 65,401 ಮಕ್ಕಳಿಗೆ ಪೋಲಿಯೊ ಲಸಿಕೆಯ ಗುರಿ – ಅಬೀದ್ ಗದ್ಯಾಳ
ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಅಭಿಯಾನದಲ್ಲಿ ಉಡುಪಿ ಜಿಲ್ಲೆಯ 0-5 ವರ್ಷದೊಳಗಿನ ಒಟ್ಟು 65,401 ಮಕ್ಕಳಿಗೆ ಲಸಿಕೆಯನ್ನು ನೀಡುವ ಗುರಿಯನ್ನು ಹಾಕಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಹೇಳಿದ್ದಾರೆ.
ಬುಧವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಜಿಲ್ಲಾ ಲಸಿಕಾ ಕಾರ್ಯಪಡೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಜಿಲ್ಲೆಯ ಯಾವುದೇ ಮಗು ಪೋಲಿಯೊ ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು ಎಂದವರು ಸೂಚಿಸಿದರು.

ಜೂ.28ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು ಜಿಲ್ಲೆ ಎಲ್ಲಾ 0-5 ವಷರ್ದೊಳಗಿನ ಮಕ್ಕಳಿಗೆ ಈ ಹಿಂದೆ ಲಸಿಕೆ ಹಾಕಿಸಿದ್ದರೂ ಜೂ.28ರಂದು ಪೋಲಿಯೋ ಲಸಿಕೆ ಹಾಕಿಸಬೇಕು ಎಂದರು.
ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಜಿಲ್ಲೆಯಲ್ಲಿ 0-5 ವರ್ಷ ದೊಳಗಿನ ಒಟ್ಟು 65,401 ಮಕ್ಕಳನ್ನು ಗುರುತಿಸಲಾಗಿದೆ. 19 ಟ್ರಾನ್ಸಿಟ್, 3 ಮೊಬೈಲ್ ತಂಡಗಳು ಸೇರಿದಂತೆ ಒಟ್ಟು 665 ಬೂತ್‌ಗಳು ಕಾರ್ಯ ನಿರ್ವಹಿಸಲಿವೆ. 2660 ಲಸಿಕಾ ಕಾರ್ಯಕರ್ತರು ಅಂದು ಕಾರ್ಯನಿರ್ವಹಿಸಲಿದ್ದು, 155 ಮಂದಿ ಮೇಲ್ವಿಚಾರಕ ರನ್ನು ಸಹಕಾರ್ಯಕ್ಕೆ ನೇಮಿಸಲಾಗಿದೆ ಎಂದರು.
























