ಬೆಂಗಳೂರು : ಪುತ್ರಿಗೆ ಸರಕಾರಿ ಉದ್ಯೋಗ ಕೊಡಿಸುವ ನಿಟ್ಟಿನಲ್ಲಿ ಸುಳ್ಳು ಆದಾಯ ಪ್ರಮಾಣ ಪತ್ರ ಸಲ್ಲಿಸಿ ಅಧಿಕಾರದ ದುರುಪಯೋಗ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ (kpsc) ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ. ಈ ಕುರಿತು ಸೋಮವಾರ ಬೆಳಿಗ್ಗೆ ರಾಜ್ಯಪಾಲರು ಆದೇಶ ಹೊರಡಿಸಿ ಶಿವಶಂಕರಪ್ಪ ವಿರುದ್ಧದ ಆರೋಪಗಳ ಬಗ್ಗೆ ತನಿಖೆ ನಡೆಸಲು ಶಿಫಾರಸು ಮಾಡಿರುತ್ತಾರೆ.
ತನಿಖೆ ಪೂರ್ಣಗೊಳ್ಳುವವರೆಗೆ ಅಥವಾ ಮುಂದಿನ ಆದೇಶದವರೆಗೆ ಕೆಪಿಎಸ್‌ಸಿಯ ಹಿರಿಯ ಸದಸ್ಯರು ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಶಿವಶಂಕರಪ್ಪ ಅವರ ಪುತ್ರಿ ಸುಮಾ ಎಸ್. ಸಾಹುಕಾರ್ ವಿರುದ್ಧವೂ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ವೇಳೆ ನಕಲಿ ಆದಾಯ ಮತ್ತು ಜಾತಿ ಪ್ರಮಾಣಪತ್ರ ಸಲ್ಲಿಸಿರುವ ಆರೋಪದ ಮೇಲೆ ಪ್ರಕರಣ ದಾಖಲಾಗಿದ್ದು, ದಾಖಲೆಗಳ ಪರಿಶೀಲನೆ ವೇಳೆ ಅಕ್ರಮ ಬೆಳಕಿಗೆ ಬಂದಿತ್ತು.







































































