ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಮುಂದಿನ ಎರಡು ದಿನಗಳ ಕಾಲ ವಿವಿಧ ಜಿಲ್ಲೆಗಳಿಗೆ ಹವಾಮಾನ ಇಲಾಖೆ (IMD) ಮಳೆ ಅಲರ್ಟ್ ಘೋಷಿಸಿದೆ.
ಇಂದಿನ ಮಳೆ ಮುನ್ಸೂಚನೆ
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಇಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿರುವುದರಿಂದ ಆರೆಂಜ್ ಅಲರ್ಟ್ ಜಾರಿಗೊಳಿಸಲಾಗಿದೆ. ಇದರೊಂದಿಗೆ ಮಲೆನಾಡು ಭಾಗದ ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೂ ಭಾರಿ ಮಳೆಯ ಮುನ್ನೆಚ್ಚರಿಕೆಯಾಗಿ ಆರೆಂಜ್ ಅಲರ್ಟ್ ನೀಡಲಾಗಿದೆ.
ಬೆಳಗಾವಿ ಮತ್ತು ಹಾಸನ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ನಾಳೆಯ ಮಳೆ ಮುನ್ಸೂಚನೆ
ನಾಳೆ (ಮಂಗಳವಾರ) ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆಯ ಪ್ರಮಾಣ ತುಸು ತಗ್ಗಲಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡಿನ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನೀಡಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಎಲ್ಲಿ ಎಷ್ಟು ಮಳೆಯಾಗಿದೆ.?
ಭಾನುವಾರ ಬೆಳಗ್ಗೆ 8:30 ರಿಂದ ಸೋಮವಾರ ಬೆಳಗ್ಗೆ 7:30 ರವರೆಗೆ 50 ಮಿ.ಮೀ ಗಿಂತ ಹೆಚ್ಚು ಮಳೆಯ ದಾಖಲಿಸಿದ ಟೆಲಿಮೆಟ್ರಿಕ್ ಮಳೆಮಾಪನ ಕೇಂದ್ರಗಳ ವಿವರಗಳು. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಪ್ರಕಟಿಸಿದೆ.

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ನಿಲ್ಕೋಡ್‌ನಲ್ಲಿ 159 ಮಿ.ಮೀ, ಹೊಸನಗರ ತಾಲೂಕಿನ ಕರಿಮನೆ 150.5 ಮಿ.ಮೀ, ಜೋಯಿಡಾದಲ್ಲಿ 150 ಮಿ.ಮೀ. ಮಳೆಯಾಗಿದೆ.



























