ಚೆನ್ನೈ : ನಟಿ ತ್ರಿಷಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಮಂಗಳವಾರ ಅವರ ನಿವಾಸದಿಂದ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಆರೋಪದ ಕುರಿತು ತನಿಖೆ ಮುಂದುವರಿದಿದೆ. ಹೆಚ್ಚಿನ ವಿವರಗಳನ್ನು ಪೊಲೀಸರು ಇನ್ನೂ ಬಹಿರಂಗಪಡಿಸಿಲ್ಲ.
ಏನಿದು ವಿವಾದ?
ತಂಜಾವೂರಿನಲ್ಲಿ ಕಾವೇರಿ ನೀರಿನ ಬಿಕ್ಕಟ್ಟಿನ ಕುರಿತು ನಡೆದ ಡಿಎಂಕೆ ಪ್ರತಿಭಟನಾ ಸಭೆಯಲ್ಲಿ ಮಾತನಾಡುತ್ತಿದ್ದ ಉದಯನಿಧಿ ಸ್ಟಾಲಿನ್, ನಮ್ಮ ಮುಖ್ಯಮಂತ್ರಿ ಕಾವೇರಿ ನೀರಿನ ವಿಷಯದ ಬಗ್ಗೆ ಬಾಯಿ ತೆರೆಯುತ್ತಿಲ್ಲ. ಅವರ ಏಕೈಕ ಚಿಂತೆ ಡಿಎಂಕೆ ವಿರುದ್ಧ ಸುಳ್ಳು ಪ್ರಕರಣಗಳನ್ನು ಹೇಗೆ ಹಾಕುವುದು ಎಂಬುದು ಅಷ್ಟೇ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ವಿಜಯ್ ಸರ್ಕಾರವನ್ನು ಟೀಕಿಸುತ್ತಿದ್ದರು. ಇದೇ ವೇಳೆ ಜನಸಮೂಹದಿಂದ ʼತ್ರಿಷಾ… ತ್ರಿಷಾ…ʼ ಎಂಬ ಘೋಷಣೆಗಳು ಕೇಳಿಬಂದವು. ಅದಕ್ಕೆ ಪ್ರತಿಕ್ರಿಯಿಸಿದ ಉದಯನಿಧಿ, ನಗುಮುಖದೊಂದಿಗೆ ತಮಿಳಿನಲ್ಲಿ ದ್ವಂದ್ವಾರ್ಥ ಬರುವ ರೀತಿಯಲ್ಲಿ ʼಯಾವ ನೀರು ಬರುತ್ತದೋ ಇಲ್ಲವೋ, ಆ ನೀರು ಬರಲೇಬೇಕುʼ ಎಂದು ಹೇಳಿದರು. ಈ ಮಾತು ನಟಿ ತ್ರಿಷಾ ಅವರನ್ನು ಪರೋಕ್ಷವಾಗಿ ಗುರಿಯಾಗಿಸಿ, ಮಹಿಳೆಯನ್ನು ಅವಮಾನಿಸುವ ಹಾಗೂ ಅಶ್ಲೀಲ ಅರ್ಥ ನೀಡುವ ರೀತಿಯಲ್ಲಿದೆ ಎಂದು ಟಿವಿಕೆ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಆರೋಪಿಸಿವೆ.















