ಕಾರ್ಕಳ : ತಾಲೂಕಿನಾದ್ಯಂತ ಕಳೆದ ಎರಡು ವಾರಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ಕೆಲ ಪ್ರದೇಶಗಳಲ್ಲಿ ಭೂಕುಸಿತ ಉಂಟಾಗಿರುವ ಬಗ್ಗೆ ವರದಿಯಾಗಿದೆ. ರೆಂಜಾಳ ಗ್ರಾಮದ ಹೆಡ್ಮೆ ಹರಿಪ್ರಸಾದ್ ಎಂಬವರ ಮನೆಯ ಸಮೀಪ ಭೂಕುಸಿತ ಸಂಭವಿಸಿದ್ದು, ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ತಹಶೀಲ್ದಾರ್ ಪ್ರದೀಪ್ ಆರ್. ಆ.4ರಂದು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅನಾಹುತವನ್ನು ತಪ್ಪಿಸುವ ಮುನ್ನೆಚ್ಚರಿಕೆ ಕ್ರಮವಾಗಿ ಸಂತ್ರಸ್ತ ಕುಟುಂಬದ ಸದಸ್ಯರನ್ನು ಸುರಕ್ಷತೆಯ ದೃಷ್ಟಿಯಿಂದ ಸಮೀಪದ ಸರಕಾರಿ ಶಾಲೆಯಲ್ಲಿ ತಾತ್ಕಾಲಿಕವಾಗಿ ವಾಸಿಸಲು ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಪರಿಸ್ಥಿತಿಯನ್ನು ಪರಿಶೀಲಿಸಿ, ಸ್ಥಳೀಯರೊಂದಿಗೆ ಚರ್ಚೆ ನಡೆಸಿ ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಕಲ್ಪಿಸಲು ಅಧಿಕಾರಿಗಳಿಗೆ ಸೂಚಿಸಿದರು. ಆ.5ರಂದು (ಇಂದು) ಸ್ಥಳಕ್ಕೆ ಭೂ ವಿಜ್ಞಾನಿಗಳು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂದರ್ಭ ಕಂದಾಯ ನಿರೀಕ್ಷಕ ರಿಯಾಜ್ ಹಾಗೂ ಗ್ರಾಮ ಆಡಳಿತಾಧಿಕಾರಿ ಆದರ್ಶ್ ಉಪಸ್ಥಿತರಿದ್ದರು.
















