ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಒದಗಿಸುವಂತೆ ಸಚಿವ ಯು.ಟಿ. ಖಾದರ್‌ ಗೆ ಮನವಿ ಮಾಡಿದ ಸುನಿಲ್‌ ಕುಮಾರ್‌

ಕಾರ್ಕಳ : ಕಾರ್ಕಳ ತಾಲೂಕು ಆಸ್ಪತ್ರೆಯ ಅಭಿವೃದ್ಧಿಗಾಗಿ, ಪ್ರಾಕೃತಿಕ ವಿಕೋಪದಿಂದ ಹಾನಿಗೊಳಗಾದ ಗ್ರಾಮೀಣ ಹಾಗೂ ಪುರಸಭಾ ವ್ಯಾಪ್ತಿಯ ರಸ್ತೆಗಳು, ಶಿಥಿಲಗೊಂಡಿರುವ ಶಾಲಾ ಕಾಲೇಜು ಕಟ್ಟಡಗಳ ಅಭಿವೃದ್ಧಿಗೆ ತುರ್ತು ಅನುದಾನ ಒದಗಿಸುವಂತೆ ಕಾರ್ಕಳ ಶಾಸಕ ವಿ. ಸುನಿಲ್‌ ಕುಮಾರ್‌ ಅವರು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ ಅವರಿಗೆ ಮನವಿ ಸಲ್ಲಿಸಿದರು.
ಆ. 8ರಂದು ತಾಲೂಕು ಕಚೇರಿಯಲ್ಲಿ ಮಳೆ ಹಾನಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡ ಸಚಿವ ಯು.ಟಿ. ಖಾದರ್‌ ಅವರಿಗೆ ಶಾಸಕರು ಮನವಿ ಸಲ್ಲಿಸಿದರು. ಕಾರ್ಕಳ ತಾಲೂಕು ಆಸ್ಪತ್ರೆಗೆ ನಿತ್ಯ ನೂರಾರು ಮಂದಿ ರೋಗಿಗಳು ಬರುತ್ತಿದ್ದಾರೆ. ಇಲ್ಲಿ ತಜ್ಞ ವೈದ್ಯರ ಹಾಗೂ ಅಗತ್ಯ ವೈದ್ಯಕೀಯ ಸೌಲಭ್ಯಗಳ ಕೊರತೆಯಿದೆ. ಇದರಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ ಎಂದರು. ಗರ್ಭಿಣಿಯರು ಹಾಗೂ ತಾಯಿ-ಮಗುವಿನ ಆರೋಗ್ಯಕ್ಕೆ ಸಂಬಂಧಿಸಿದ ಪರೀಕ್ಷೆ, ಚಿಕಿತ್ಸೆ ದೊರೆಯುವಂತಾಗಬೇಕು. ಕಾರ್ಕಳ ತಾಲೂಕು ಆಸ್ಪತ್ರೆಯನ್ನು ಅಗತ್ಯ ತಜ್ಞ ವೈದ್ಯರು ಮತ್ತು ಮೂಲಭೂತ ಸೌಕರ್ಯಗಳೊಂದಿಗೆ ಮೇಲ್ದರ್ಜೆಗೇರಿಸಲು ಸರಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ವಿ. ಸುನಿಲ್‌ ಕುಮಾರ್‌ ಅವರು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಹೆಬ್ರಿ ಆಸ್ಪತ್ರೆ ಮೇಲ್ದರ್ಜೆಗೇರಿಸಿ
ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರವನ್ನು 30 ಹಾಸಿಗೆಗಳಿಂದ 100 ಹಾಸಿಗೆಗೆ ಮೇಲ್ದರ್ಜೆಗೇರಿಸಿ ತಾಲೂಕು ಆಸ್ಪತ್ರೆಯನ್ನಾಗಿ ಮಾಡಬೇಕಿದೆ. ಹೆಬ್ರಿ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಭಾಗದ ಜನರಿಗೆ ಸ್ಥಳೀಯವಾಗಿಯೇ ಉತ್ತಮ ಆರೋಗ್ಯ ಸೇವೆ ದೊರೆಯುವಂತೆ ಮಾಡುವಲ್ಲಿ ಅಗತ್ಯ ತಜ್ಞ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ನಿಯೋಜಿಸುವಂತೆ ಶಾಸಕ ವಿ. ಸುನಿಲ್‌ ಕುಮಾರ್‌ ಅವರು ಸಚಿವ ಯು.ಟಿ. ಖಾದರ್‌ ಅವರಿಗೆ ಮನವಿ ಮಾಡಿದ್ದಾರೆ.

ವಿಶೇಷ ಅನುದಾನ ನೀಡಿ
ಅತಿಯಾದ ಮಳೆ ಹಾಗೂ ಪ್ರಾಕೃತಿಕ ವಿಕೋಪದಿಂದ ಕಾರ್ಕಳ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮೀಣ ಪ್ರದೇಶಗಳಲ್ಲಿ ಸೇತುವೆಗಳು, ಗ್ರಾಮೀಣ ಸಂಪರ್ಕ ರಸ್ತೆಗಳು ಸೇರಿದಂತೆ ಸಾರ್ವಜನಿಕ ಮೂಲಸೌಕರ್ಯಗಳಿಗೆ ಹಾನಿಯಾಗಿದೆ. ಹಲವು ಕಡೆಗಳಲ್ಲಿ ಮನೆಗಳು ಹಾಗೂ ಕೃಷಿ ಪ್ರದೇಶಗಳಿಗೂ ಹಾನಿಯಾಗಿದೆ. ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳ ಸುಗಮ, ಸುರಕ್ಷಿತ ಸಂಚಾರಕ್ಕೆ ಅಡಚಣೆಯಾಗುತ್ತಿದ್ದು, ಹಾನಿಗೊಳಗಾದ ರಸ್ತೆ ಮತ್ತು ಸೇತುವೆಗಳನ್ನು, ಶಾಲಾ ಕಾಲೇಜು ಕಟ್ಟಡಗಳನ್ನು ತುರ್ತಾಗಿ ದುರಸ್ತಿ ಅಥವಾ ಪುನರ್‌ನಿರ್ಮಾಣಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಸುನಿಲ್‌ ಕುಮಾರ್‌ ಮನವಿಯಲ್ಲಿ ವಿನಂತಿಸಿದ್ದಾರೆ.





























error: Content is protected !!
Scroll to Top