ಅಜೆಕಾರು ಜ್ಞಾನಸುಧಾದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ

ಕಾರ್ಕಳ : ಅಜೆಕಾರು ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಪದ್ಮನಗರದಲ್ಲಿ ದೇಶಭಕ್ತಿ, ಸಂಭ್ರಮ ಹಾಗೂ ಸಡಗರದ ವಾತಾವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಅಜೆಕಾರಿನ ಪ್ರಸಿದ್ಧ ವೈದ್ಯರು ಹಾಗೂ ಉಡುಪಿ ಜಿಲ್ಲಾ ಪಂಚಾಯಿತಿಯ ಮಾಜಿ ಉಪಾಧ್ಯಕ್ಷ ಡಾ. ಸಂತೋಷ್ ಕುಮಾರ್ ಶೆಟ್ಟಿ ಅವರು ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು. ಬಳಿಕ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ದೇಶ ಪ್ರೇಮವೆಂಬುದು ಕೇವಲ ಮಾತುಗಳಲ್ಲಿ ಸೀಮಿತವಾಗದೆ, ನಮ್ಮ ನಡೆ-ನುಡಿಗಳಲ್ಲೂ ಪ್ರತಿಬಿಂಬಿಸಬೇಕು. ಪ್ರತಿಯೊಬ್ಬರೂ ದೇಶಪ್ರೇಮದೊಂದಿಗೆ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ಉತ್ತಮ ಸತ್ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಕರೆ ನೀಡಿದರು.

ಅಜೆಕಾರು ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿ ಅವರು ತಮ್ಮ ಪ್ರೇರಣಾದಾಯಕ ನುಡಿಗಳ ಮೂಲಕ ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಹಾಗೂ ರಾಷ್ಟ್ರಾಭಿಮಾನದ ಕಿಚ್ಚು ಹೊತ್ತಿಸಿ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ಸ್ಮರಿಸುತ್ತಾ, ದೇಶದ ಪ್ರಗತಿಯಲ್ಲಿ ಯುವಜನತೆಯ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲ ಸಂತೋಷ್, ಉಪಪ್ರಾಂಶುಪಾಲೆ ಆರತಿ, ಸಾರ್ವಜನಿಕ ಸಂಪರ್ಕಾಧಿಕಾರಿ ರಾಮಚಂದ್ರ ನೆಲ್ಲಿಕಾರ್, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆಗಳು, ನೃತ್ಯ, ಭಾಷಣ ಸೇರಿದಂತೆ ವಿವಿಧ ಮನಮೋಹಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು.
ಶಿಕ್ಷಕಿ ಆಶಾ ಜ್ಯೋತಿ ಹಾಗೂ ವಿದ್ಯಾರ್ಥಿನಿ ಫಾತಿಮಾ ಶಲ್ಬಿಯಾ ಕಾರ್ಯಕ್ರಮ ನಿರೂಪಿಸಿದರು.





























































































































error: Content is protected !!
Scroll to Top