ಪೊಲೀಸರಿಗೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದ ಮುಂಬೈನ ಗ್ಯಾಂಗ್‌ಸ್ಟರ್ ಅನುಜ್ ಪಾಟೀಲ್
ಉಡುಪಿ : ಮುದರಂಗಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ವೇಳೆ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿ ಕರೆತರುವ ಸಂದರ್ಭದಲ್ಲಿ ಪೊಲೀಸರು ಗುಂಡು ಹಾರಿಸಿದ ಪೊಲೀಸರ ಮೇಲೆ ಹಲ್ಲೆ ನಡೆಸಿ, ಪಿಎಸ್ಐಯವರ ಪಿಸ್ತೂಲ್ ಕಸಿದು ಗುಂಡು ಹಾರಿಸಿದ ಆರೋಪಿಗೆ ಪೊಲೀಸರು ಆತ್ಮರಕ್ಷಣೆಗಾಗಿ ಕಾಲಿಗೆ ಗುಂಡು ಹಾರಿಸಿರುವ ಘಟನೆ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆ. 24ರಂದು ಬೆಳಿಗ್ಗೆ ನಡೆದಿದೆ.
ಮುಂಬೈ ಮೂಲದ ಕುಖ್ಯಾತ ಗ್ಯಾಂಗ್ಸ್ಟರ್ ಅನುಜ್ ಪಾಟೀಲ್ (35) ಗುಂಡೇಟಿಗೆ ಒಳಗಾದ ಆರೋಪಿ, ಆತನನ್ನು ಚಿಕಿತ್ಸೆಗಾಗಿ ಉಡುಪಿಯ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿದೆ.

ಆ. 7ರಂದು ಕಾಪು ತಾಲೂಕಿನ ಮುದರಂಗಡಿ ಸೇಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್ನಲ್ಲಿ ಪ್ರಿನ್ಸ್ ಎಂಟರ್ಪ್ರೈಸಸ್ ಮಾಲಕ ಡೇವಿಡ್ ಡಿಸೋಜಾ ಅವರನ್ನು ಮೋಟಾರ್ ಸೈಕಲ್‌ನಲ್ಲಿ ಬಂದಿದ್ದ ದುಷ್ಕರ್ಮಿಗಳ ಪೈಕಿ ಸಹಸವಾರ ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದ. ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿತ್ತು.
ಪ್ರಕರಣದ ತನಿಖೆಯ ಭಾಗವಾಗಿ ಕುಂದಾಪುರ ಪೊಲೀಸ್ ಠಾಣೆಯ ಪಿಎಸ್ಐ ನಂಜ ನಾಯಕ್, ಕೊಲ್ಲೂರು ಠಾಣೆಯ ಪಿಎಸ್ಐ ವಿನಯ್ ಹಾಗೂ ಸಿಬ್ಬಂದಿ ತಂಡವು ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ, ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಮೂವರು ಶೂಟರ್‌ಗಳನ್ನು ಕಳುಹಿಸಿದ ಆರೋಪದ ಮೇಲೆ ಮುಂಬೈನ ಗ್ಯಾಂಗ್‌ಸ್ಟರ್ ಅನುಜ್ ಪಾಟೀಲ್‌ನನ್ನು ಬೆಳಗ್ಗೆ 6ರಿಂದ 6.30ರ ನಡುವೆ ಬಂಧಿಸಿತ್ತು. ಆತನನ್ನು ಕರೆತರುತ್ತಿದ್ದ ವೇಳೆ ಹೆಬ್ರಿ ನಾಡ್ಪಾಲಿನಲ್ಲಿ ಮೂತ್ರ ವಿಸರ್ಜನೆಗೆ ವಾಹನ ನಿಲ್ಲಿಸುವಂತೆ ಹೇಳಿದ್ದ. ವಾಹನ ನಿಲ್ಲಿಸಿ ಕೆಳಗಿಳಿಸಿದಾಗ ಅನುಜ್ ಪಾಟೀಲ್ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ, ಕೊಲ್ಲೂರು ಪಿಎಸ್ಐ ವಿನಯ್ ಅವರ ಆಯುಧವನ್ನು ಕಸಿದುಕೊಂಡು ಪೊಲೀಸರತ್ತ ಗುಂಡು ಹಾರಿಸಿದ್ದಾನೆ ಎಂದು ತಿಳಿದು ಬಂದಿದೆ. ಈ ವೇಳೆ ಆತ್ಮರಕ್ಷಣೆಗಾಗಿ ಕುಂದಾಪುರ ಪಿಎಸ್ಐ ನಂಜ ನಾಯಕ್ ಅವರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಗುಂಡೇಟಿನಿಂದ ಗಾಯಗೊಂಡ ಅನುಜ್ ಪಾಟೀಲ್‌ನನ್ನು ಉಡುಪಿಯ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಮೋಹನ್, ಕಾನ್ಸ್‌ಟೇಬಲ್ ಶ್ಯಾಮ್ ಗಾಯಗೊಂಡಿದ್ದಾರೆ.
4 ರಾಜ್ಯಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಕ್ರಿಮಿನಲ್
ಪೊಲೀಸರ ಮಾಹಿತಿ ಪ್ರಕಾರ, ಅನುಜ್ ಪಾಟೀಲ್ ಮುಂಬೈನಲ್ಲಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, 2017ರಿಂದ ತಲೆಮರೆಸಿಕೊಂಡಿದ್ದ. ಆತನ ವಿರುದ್ಧ ಮಹಾರಾಷ್ಟ್ರದಲ್ಲಿ MCOCA ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಆರೋಪಿಯ ವಿರುದ್ಧ ಒಟ್ಟು 11 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 10 ಪ್ರಕರಣಗಳು Arms Act ಅಡಿ ದಾಖಲಾಗಿವೆ. ಮಹಾರಾಷ್ಟ್ರದಲ್ಲಿ ನಾಲ್ಕು, ಗುಜರಾತ್ನಲ್ಲಿ ಐದು, ದಮನ್ ಮತ್ತು ದಿಯುನಲ್ಲಿ ಒಂದು ಹಾಗೂ ಕರ್ನಾಟಕದಲ್ಲಿ ಒಂದು ಪ್ರಕರಣ ದಾಖಲಾಗಿರುವುದಾಗಿ ಮಾಹಿತಿ ಲಭ್ಯವಾಗಿದೆ.
ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ 9 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಮೊದಲ ಆರೋಪಿ ರಾಜು, ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರ್ಕಾರಿ ನೌಕರರ ಮೇಲೆ ನಡೆದ ಕೊಲೆ ಯತ್ನ ಪ್ರಕರಣದಲ್ಲಿ ಗಾಯಗೊಂಡಿದ್ದು, ಅಜ್ಜರಕಾಡು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇನ್ನಷ್ಟು ಆರೋಪಿಗಳ ಬಂಧನ ಹಾಗೂ ಕೃತ್ಯದ ಹಿಂದಿರುವ ಜಾಲದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.






































































