ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಣೆಯಾಗಲಿ – ಸುನಿಲ್ ಕುಮಾರ್
ಕಾರ್ಕಳ : ರಾಜ್ಯ ಸರಕಾರ ಸೆ. 18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಿದೆ. ಆದರೆ, ಈ ಸಭೆ ಕೇವಲ ಔಪಚಾರಿಕತೆ ಹಾಗೂ ಘೋಷಣೆಗೆ ಸೀಮಿತವಾಗಬಾರದು. ಕರಾವಳಿ ಜನರ ದಶಕಗಳ ಭಾವನಾತ್ಮಕ ಹಾಗೂ ನ್ಯಾಯಯುತ ಬೇಡಿಕೆಯಾದ ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ನಿರ್ಧಾರವನ್ನು ಈ ಸಂಪುಟ ಸಭೆಯಲ್ಲಿ ಸರಕಾರ ಘೋಷಿಸಲೇಬೇಕು ಎಂದು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಆಗ್ರಹಿಸಿದರು.
ಮೋಹನ್ ಆಳ್ವ ಸಮಿತಿ ವರದಿ ಅನುಷ್ಠಾನಗೊಳಿಸಿ
ತುಳು ಕೇವಲ ಒಂದು ಭಾಷೆಯಲ್ಲ, ಅದು ಕರಾವಳಿಯ ಆಚಾರ, ವಿಚಾರ, ದೈವಾರಾಧನೆ ಮತ್ತು ಸಂಸ್ಕೃತಿಯ ಜೀವಾಳ. ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ತುಳುವಿಗೆ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ಸಾಧ್ಯಾಸಾಧ್ಯತೆಗಳ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಡಾ. ಎಂ. ಮೋಹನ್ ಆಳ್ವ ಅವರ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಲಾಗಿತ್ತು. ಈ ಸಮಿತಿ ಸಮಗ್ರವಾಗಿ ಅಧ್ಯಯನ ನಡೆಸಿ, ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡಲು ಕಾನೂನಾತ್ಮಕವಾಗಿ ಹಾಗೂ ಸಾಂವಿಧಾನಿಕವಾಗಿ ಯಾವುದೇ ಅಡೆತಡೆಗಳಿಲ್ಲ ಎಂಬುದನ್ನು ಸ್ಪಷ್ಟಪಡಿಸಿ ಸರ್ಕಾರಕ್ಕೆ ವರದಿಯನ್ನೂ ಸಲ್ಲಿಸಿದೆ. ನಮ್ಮ ಸರ್ಕಾರ ಈ ಬಗ್ಗೆ ಅಧಿಕೃತ ಘೋಷಣೆ ಮಾಡುವ ಹಂತದಲ್ಲಿದ್ದಾಗಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದರಿಂದ ಸಾಧ್ಯವಾಗಲಿಲ್ಲ.
ಈ ವಿಚಾರಕ್ಕೆ ಸಂಬಂಧಪಟ್ಟಂತೆ ಆಡಳಿತಾತ್ಮಕವಾಗಿ ಎಲ್ಲಾ ಸಿದ್ಧತೆಗಳು ಈಗಾಗಲೇ ಪೂರ್ಣಗೊಂಡಿವೆ. ಈಗ ಚೆಂಡು ರಾಜ್ಯ ಸರ್ಕಾರದ ಅಂಗಳದಲ್ಲಿದೆ. ಸೆಪ್ಟೆಂಬರ್ 18ರ ಸಂಪುಟ ಸಭೆಯಲ್ಲಿ ಮೋಹನ್ ಆಳ್ವ ಸಮಿತಿಯ ವರದಿಯನ್ನು ಅನುಷ್ಠಾನಗೊಳಿಸಿ, ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ನಿರ್ಧಾರಕ್ಕಾಗಿ ತುಳು ನಾಡಿನ ಜನತೆ ಕಾಯುತ್ತಿದ್ದಾರೆ ಎಂದು ಸುನಿಲ್ ಕುಮಾರ್ ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದಾರೆ.




























