ಪ್ರಧಾನಿ ಮೋದಿ, ಗಡ್ಕರಿ, ಕೋಟಾ ಶ್ರೀನಿವಾಸ್ ಪೂಜಾರಿಗೆ ಕೃತಜ್ಞತೆ ಸಲ್ಲಿಸಿದ ಸುನೀಲ್ ಕುಮಾರ್
ಕಾರ್ಕಳ: ಆಗುಂಬೆ ಘಾಟ್ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ರೂ. 18 ಕೋಟಿ ಅನುದಾನ ಬಿಡುಗಡೆಯಾಗಿರುವ ಬಗ್ಗೆ ಶಾಸಕ ಸುನೀಲ್ ಕುಮಾರ್ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಫೇಸ್‌ಬುಕ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಉತ್ತರ ಕರ್ನಾಟಕದ ಸಂಪರ್ಕ ಸೇತು ಆಗಿರುವ ಆಗುಂಬೆ ಘಾಟಿಯ ಆಯ್ದ ಭಾಗಗಳಲ್ಲಿ ಕಾಂಕ್ರೀಟ್ ತಡೆಗೋಡೆ ಸಹಿತ ಆಗುಂಬೆಯಿಂದ ಹೆಬ್ರಿ ಪೇಟೆ ತನಕ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ರಾಷ್ಟ್ರೀಯ ಹೆದ್ದಾರಿ ವತಿಯಿಂದ 18 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಆಗುಂಬೆ ಘಾಟ್ ರಸ್ತೆ ಅಭಿವೃದ್ಧಿ ಸೇರಿದಂತೆ ಕೆಲವೊಂದು ತಿರುವುಗಳಲ್ಲಿ ವಾಹನಗಳ ಸುಗಮ ಸಂಚಾರದ ಹಿತ ದೃಷ್ಟಿಯಿಂದ ಸದರಿ ರಸ್ತೆ ಅಭಿವೃದ್ಧಿಗೆ ಈ ಹಿಂದೆ ಮಾನ್ಯ ಸಂಸದರ ಮುಖಾಂತರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಅದರಂತೆ ಕೇಂದ್ರ ಸರ್ಕಾರವು ರಾಷ್ಟ್ರೀಯ ಹೆದ್ದಾರಿ ವತಿಯಿಂದ ರೂಪಾಯಿ 18 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಈ ಹಿನ್ನೆಲೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಸಾರಿಗೆ ಸಚಿವ ನಿತಿನ್ ಗಡ್ಕರಿ ಹಾಗೂ ಅನುದಾನ ಬಿಡುಗಡೆಗೆ ವಿಶೇಷ ಮುತುವರ್ಜಿ ವಹಿಸಿದ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಧನ್ಯವಾದಗಳನ್ನು ಸುನೀಲ್ ಕುಮಾರ್ ತಿಳಿಸಿದ್ದಾರೆ.































