ಯುವಜನರು ಉದ್ಯೋಗವನ್ನರಸಿ ವಲಸೆ ಹೋಗುವುದನ್ನು ತಪ್ಪಿಸಲು ನೆರವಾಗಲಿದೆ ಈ ಯೋಜನೆ
ಬೆಂಗಳೂರು: ಕರ್ನಾಟಕದ ಹಿಂದುಳಿದ ಜಿಲ್ಲೆಗಳಲ್ಲಿ ಸಮತೋಲಿತ ಪ್ರಾದೇಶಿಕ ಅಭಿವೃದ್ಧಿ, ಸ್ಥಳೀಯ ಉದ್ಯೋಗ ಸೃಷ್ಟಿಗೆ ಉತ್ತೇಜನ ನೀಡುವ ಸಲುವಾಗಿ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನೂತನ ‘ಉದ್ಯೋಗ ನಿಧಿ’ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಕಲಬುರಗಿ, ಬೀದರ್, ರಾಯಚೂರು, ಯಾದಗಿರಿ ಹಾಗೂ ಬಾಗಲಕೋಟೆ ಸೇರಿದಂತೆ ರಾಜ್ಯದ 11 ಕಡಿಮೆ ಅಭಿವೃದ್ಧಿ ಹೊಂದಿರುವ ಜಿಲ್ಲೆಗಳಲ್ಲಿ ಒಟ್ಟು 1 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಹೊಂದಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯದ ಹಿಂದುಳಿದ ಜಿಲ್ಲೆಗಳಲ್ಲಿಯೇ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಮೂಲಕ ಅಲ್ಲಿನ ಉದ್ಯೋಗ ಅರಸಿ ಯುವಜನರು ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಡೆಯುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರ ವಾರ್ಷಿಕ 305 ಕೋಟಿ ರೂ. ಅನುದಾನ ಮೀಸಲಿಡಲಿದೆ. ಯೋಜನೆಯಡಿ ಅರ್ಹ MSMEಗಳು ಹಾಗೂ ಕೈಗಾರಿಕಾ ಸಂಸ್ಥೆಗಳು ನೇಮಕ ಮಾಡಿಕೊಳ್ಳುವ ಪ್ರತಿ ಹೆಚ್ಚುವರಿ ಹೊಸ ಉದ್ಯೋಗಿಗೆ ತಿಂಗಳಿಗೆ ₹2,500ರಂತೆ ಗರಿಷ್ಠ 24 ತಿಂಗಳವರೆಗೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹಧನ ನೀಡಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.































