ಸೈಂಟ್ ಆಗ್ನೆಸ್ ಕಾಲೇಜು ವಿರುದ್ಧ ಪ್ರತಿಭಟನೆ – ಎಬಿವಿಪಿ ವಿದ್ಯಾರ್ಥಿಗಳ ಹೋರಾಟಕ್ಕೆ ಬಿಜೆಪಿ ಯುವಮೋರ್ಚಾ ಬೆಂಬಲ : ರಾಕೇಶ್‌ ಶೆಟ್ಟಿ

ವಿದ್ಯಾರ್ಥಿಗಳ ಧಾರ್ಮಿಕ ಭಾವನೆ, ಆಚರಣೆಗೆ ಅವಕಾಶ ಕಲ್ಪಿಸಲು ಕಾಲೇಜು ಆಡಳಿತ ಮಂಡಳಿ ಮುಂದಾಗಲಿ

ಕಾರ್ಕಳ : ಮಂಗಳೂರು ದಸರಾ ಹಬ್ಬದ ಸಂದರ್ಭದಲ್ಲಿ ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಪರೀಕ್ಷೆಗಳನ್ನು ನಡೆಸಲು ನಿಗದಿಪಡಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ‌ ಮುಂದಾದಾಗ ಪೊಲೀಸರು ದೌರ್ಜನ್ಯ ನಡೆಸಿರುವುದು ಖಂಡನೀಯ ಎಂದು ಕಾರ್ಕಳ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ರಾಕೇಶ್‌ ಶೆಟ್ಟಿ ಕುಕ್ಕುಂದೂರು ಆಗ್ರಹಿಸಿದರು.
ಅ. 12ರಿಂದ 28ರವರೆಗೆ ಪರೀಕ್ಷೆಗಳನ್ನು ನಿಗದಿಪಡಿಸಿರುವುದರಿಂದ ದಸರಾ ಹಬ್ಬದ ಆಚರಣೆಯಲ್ಲಿ ಪಾಲ್ಗೊಳ್ಳಲು ತೊಂದರೆಯಾಗುತ್ತಿದೆ ಎಂಬುದು ವಿದ್ಯಾರ್ಥಿಗಳ ಅಳಲಾಗಿದೆ. ಈ ಹಿನ್ನೆಲೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಿರುತ್ತಾರೆ. ದಸರಾ ಕರಾವಳಿ ಭಾಗದ ಪ್ರಮುಖ ಧಾರ್ಮಿಕ ಹಾಗೂ ಸಾಂಸ್ಕೃತಿಕ ಹಬ್ಬವಾಗಿದೆ. ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜೊತೆಗೆ ಕುಟುಂಬದೊಂದಿಗೆ ಹಬ್ಬ ಆಚರಿಸುವ ಮತ್ತು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಅವಕಾಶವನ್ನೂ ಹೊಂದಿರಬೇಕು. ಆದ್ದರಿಂದ ವಿದ್ಯಾರ್ಥಿಗಳ ಮನವಿಯನ್ನು ಕಾಲೇಜು ಆಡಳಿತ ಮಂಡಳಿ ಗಂಭೀರವಾಗಿ ಪರಿಗಣಿಸಿ, ಪರೀಕ್ಷಾ ವೇಳಾಪಟ್ಟಿಯನ್ನು ಮರುಪರಿಶೀಲಿಸಬೇಕು ಎಂದು ರಾಕೇಶ್‌ ಆಗ್ರಹಿಸಿದ್ದಾರೆ.
ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸುವುದು ಶಿಕ್ಷಣ ಸಂಸ್ಥೆಗಳ ಜವಾಬ್ದಾರಿಯಾಗಿದೆ. ಪರೀಕ್ಷೆ ಮುಂದೂಡುವ ಸಾಧ್ಯತೆಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿ, ಅವರ ಶೈಕ್ಷಣಿಕ ಹಿತಾಸಕ್ತಿಗೆ ಧಕ್ಕೆಯಾಗದಂತೆ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಜಿಲ್ಲಾಡಳಿತವೂ ಮಧ್ಯಪ್ರವೇಶಿಸಿ, ವಿದ್ಯಾರ್ಥಿಗಳ ಬೇಡಿಕೆ ಪರಿಶೀಲಿಸಿ ಸೂಕ್ತ ಪರಿಹಾರ ಕಂಡುಕೊಳ್ಳಬೇಕು ರಾಕೇಶ್‌ ಶೆಟ್ಟಿ ಕುಕ್ಕುಂದೂರು ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.



















































































error: Content is protected !!
Scroll to Top