ಮಂಗಳೂರು ಸೈಂಟ್ ಆ್ಯಗ್ನೆಸ್ ವಿದ್ಯಾರ್ಥಿಗಳಿಂದ ಕಾಲೇಜು ಆಡಳಿತ ಮಂಡಳಿ ವಿರುದ್ಧ ಆಕ್ರೋಶ
ಮಂಗಳೂರು: ರಾಜ್ಯದೆಲ್ಲೆಡೆ ನಾಡ ಹಬ್ಬ ದಸರಾ ಸಂಭ್ರಮವಿದ್ದು, ತಮಗೆ ಮಾತ್ರ ಈ ರಜಾವಧಿಯಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಮಂಗಳೂರಿನ ಸೈಂಟ್ ಆ್ಯಗ್ನೆಸ್ ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿ ಕಾಲೇಜಿನ ಗೇಟ್ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಅ.12 ರಿಂದ 28 ರ ವರೆಗೆ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಕಾಲೇಜು ಮುಂದಾಗಿದೆ. ಈ ವೇಳೆ ಮಂಗಳೂರಿನಲ್ಲಿಯೂ ದಸರಾ ಹಬ್ಬ ವೈಭವದಿಂದ ನಡೆಯುತ್ತಿದ್ದು, ತಮಗೆ ಮಾತ್ರ ಅದನ್ನು ಸಂಭ್ರಮಿಸಲು ಅವಕಾಶ ನೀಡದ ಕಾಲೇಜು ಆಡಳಿತದ ವಿರುದ್ಧ ವಿದ್ಯಾರ್ಥಿನಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿಗಳ ಈ ಪ್ರತಿಭಟನೆಗೆ ಎಬಿವಿಪಿ ಬೆಂಬಲ ಸೂಚಿಸಿದೆ. ಪರೀಕ್ಷೆಗಳನ್ನು ಮುಂದೂಡುವಂತೆ ಆಡಳಿತ ಮಂಡಳಿಗೆ ಮೊದಲೇ ಮನವಿ ಸಲ್ಲಿಸಲಾಗಿದೆ. ಆದರೂ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಪರಿಗಣಿಸಿ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಆಗ್ರಹಿಸಿದ್ದಾರೆ.
ದಸರಾ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಎದುರಾಗಿರುವ ಸಮಸ್ಯೆಯನ್ನು ಪರಿಹರಿಸಿ, ಪರೀಕ್ಷೆಗಳನ್ನು ಮುಂದೂಡುವಂತೆ ಒತ್ತಾಯಿಸಿ ವಿದ್ಯಾರ್ಥಿ ಸಂಘಟನೆಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೂ ದೂರು ಸಲ್ಲಿಸಿವೆ. ಸದ್ಯ ಕಾಲೇಜಿನ ಗೇಟ್ ಎದುರು ಪ್ರತಿಭಟನೆ ಮುಂದುವರಿದಿದ್ದು, ಆಡಳಿತ ಮಂಡಳಿಯ ನಿರ್ಧಾರದ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.











































