ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆ ಹಿನ್ನೆಲೆ ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ತಲಾ ₹2,500 ಬರ ಪರಿಹಾರ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಘೋಷಣೆ ಮಾಡಿದಂತೆ, ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ (DBT) ಮೂಲಕ ಪರಿಹಾರದ ಮೊತ್ತ ಜಮೆ ಮಾಡಲು ನಿರ್ಧರಿಸಲಾಗಿದೆ.
ರಾಜ್ಯದ ಒಟ್ಟು 240 ತಾಲೂಕುಗಳ ಪೈಕಿ 226 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಕೇಂದ್ರ ಸರ್ಕಾರದ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (NDRF) ಅನುದಾನ ಬಿಡುಗಡೆಯಾಗುವವರೆಗೆ ಕಾಯದೆ, ರಾಜ್ಯ ಸರ್ಕಾರ ತನ್ನ ರಾಜ್ಯ ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದಲೇ ರೈತರಿಗೆ ಪರಿಹಾರ ನೀಡಲು ಮುಂದಾಗಿದೆ. ಈ ಪರಿಹಾರ ಪಡೆಯಲು ರೈತರು ಪ್ರತ್ಯೇಕವಾಗಿ ಯಾವುದೇ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಇ-ಆಡಳಿತ ಇಲಾಖೆಯ ಫ್ರೂಟ್ಸ್ (FRUITS) ತಂತ್ರಾಂಶ ಹಾಗೂ ಮುಂಗಾರು ಬೆಳೆ ಸಮೀಕ್ಷೆಯ ದತ್ತಾಂಶವನ್ನು ಆಧರಿಸಿ ಅರ್ಹ ಫಲಾನುಭವಿಗಳನ್ನು ಗುರುತಿಸಲಾಗುತ್ತದೆ. ಆಯ್ಕೆಯಾದ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ವರ್ಗಾವಣೆ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.

ರಾಜ್ಯ ಸರ್ಕಾರವೇ ಈ ಪರಿಹಾರ ಮೊತ್ತ ಬಿಡುಗಡೆಗೆ ಮುಂದಾಗಿರುವುದು ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ತಾತ್ಕಾಲಿಕ ನೆಲೆಯಲ್ಲಿ ರಿಲೀಫ್ ನೀಡುವ ಸಲುವಾಗಿ ಎಂದು ಹೇಳಲಾಗಿದೆ. ಒಬ್ಬ ರೈತನಿಗೆ ಗರಿಷ್ಠ 2 ಹೆಕ್ಟೇರ್ ಕೃಷಿ ಭೂಮಿಗೆ ಮಾತ್ರ ಈ ಪರಿಹಾರ ಸೀಮಿತವಾಗಿರುತ್ತದೆ. ಕೃಷಿಯೇತರ ಉದ್ದೇಶಗಳಿಗೆ ಭೂಪರಿವರ್ತನೆಗೊಂಡ ಜಮೀನುಗಳು, ನೀರಾವರಿ ಯೋಜನೆಗಳಿಗಾಗಿ ಭೂಸ್ವಾಧೀನವಾಗಿರುವ ಪ್ರದೇಶಗಳು ಹಾಗೂ ಸರ್ಕಾರಿ ಜಮೀನುಗಳಿಗೆ ಈ ಪರಿಹಾರ ಅನ್ವಯವಾಗುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.






























































