ಧರಣಿ, ಪ್ರತಿಭಟನೆ, ಮೆರವಣಿಗೆ, ಮುಷ್ಕರಗಳಿಗೆ ಅವಕಾಶ ಇಲ್ಲ
ಉಡುಪಿ: ಬಿಜೆಪಿ ಯುವ ನಾಯಕ ಪ್ರದೀಪ್ ಪೂಜಾರಿ ಎಂಬ ಯುವಕ ಉಡುಪಿಯ ಅಜ್ಜರಕಾಡು ಆಸ್ಪತ್ರೆಯಲ್ಲಿ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಸಂಭಾವ್ಯ ಉದ್ವಿಗ್ನ ಪರಿಸ್ಥಿತಿ ತಡೆಯುವ ನಿಟ್ಟಿನಲ್ಲಿ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯಡ್ಕ ಪೊಲೀಸ್ ಠಾಣೆ ಮುಂದೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ ನಂತರ ಪರಿಸ್ಥಿತಿ ಉದ್ವಿಗ್ನಗೊಂಡಿದೆ.
ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ನವೆಂಬರ್ 3ರಂದು ಬೆಳಿಗ್ಗೆ 6 ಗಂಟೆಯಿಂದ ನವೆಂಬರ್ 7ರಂದು ರಾತ್ರಿ 10 ಗಂಟೆಯವರೆಗೆ ನಿಷೇಧಾಜ್ಞೆ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಈ ಅವಧಿಯಲ್ಲಿ ಧರಣಿ, ಪ್ರತಿಭಟನೆ, ಮೆರವಣಿಗೆ ಮತ್ತು ಮುಷ್ಕರಗಳಿಗೆ ಅವಕಾಶವಿರುವುದಿಲ್ಲ. ಯಾವುದೇ ಸ್ಥಳದಲ್ಲಿ ಐದಕ್ಕೂ ಹೆಚ್ಚು ಜನರು ಸೇರುವುದನ್ನು ಸಹ ನಿಷೇಧಿಸಲಾಗಿದೆ. ನಿಷೇಧಿತ ಅವಧಿಯಲ್ಲಿ ಅಧಿಕಾರ ವ್ಯಾಪ್ತಿಯಲ್ಲಿ ಶಸ್ತ್ರಾಸ್ತ್ರಗಳು ಮತ್ತು ಇತರ ಮಾರಕ ವಸ್ತುಗಳನ್ನು ಸಾಗಿಸುವುದನ್ನು ನಿಷೇಧಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳನ್ನು ತಡೆಗಟ್ಟಲು ಮತ್ತು ಪ್ರದೇಶದಲ್ಲಿ ಶಾಂತಿ ಕಾಪಾಡಲು ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಬಂಧಗಳನ್ನು ವಿಧಿಸಲಾಗಿದೆ.










































